ಕುಷ್ಟಗಿ: ತಾಲೂಕಿನಲ್ಲಿ ಬರಗಾಲದ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಬೆಳೆ ವಿಮೆ ಪರಿಹಾರ, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಬರ ಪರಿಹಾರ ಒದಗಿಸುವುದು ಸೇರಿದಂತೆ ಜಾನುವಾರುಗಳ ಸಂರಕ್ಷಣೆಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ರೈತ ಮುಖಂಡರು ಒತ್ತಾಯಿಸಿದರು.
ಕುಷ್ಟಗಿ ತಾಲೂಕಿನಲ್ಲಿ ಮೇವು ಬ್ಯಾಂಕ್ ಸ್ಥಾಪಿಸಬೇಕು. ಅರ್ಹ ರೈತರಿಗೆ ಬೆಳೆ ವಿಮೆ ಪರಿಹಾರ ಹಾಗೂ ಬರ ಪರಿಹಾರ ತ್ವರಿತವಾಗಿ ದೊರಕಿಸಬೇಕು. ಕೇಂದ್ರ ಸರ್ಕಾರದಿಂದಲೂ ಬರ ಪರಿಹಾರ ಕೊಡಿಸಲು ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮ ವಹಿಸಬೇಕು. ಜಾನುವಾರುಗಳಿಗೆ ಮೇವು ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಕೆರೆಗಳನ್ನು ತುಂಬಿಸುವ ಮೂಲಕ ಅಂತರ್ಜಲ ಹೆಚ್ಚಳ ಹಾಗೂ ಜಾನುವಾರುಗಳಿಗೆ ನೀರಿನ ಸೌಲಭ್ಯ ಕಲ್ಪಿಸಬೇಕು ಹಾಗೂ ಉದ್ಯೋಗ ಖಾತರಿ ಯೋಜನೆ ಸಮರ್ಪಕ ಅನುಷ್ಠಾನ ಮಾಡಬೇಕು ಎಂದು ರೈತ ಮುಖಂಡರು ಒತ್ತಾಯಿಸಿದರು.
ರೈತ ಮುಖಂಡರ ಬೇಡಿಕೆಗಳನ್ನು ಆಲಿಸಿದ ಶಾಸಕ ದೊಡ್ಡನಗೌಡ ಪಾಟೀಲ, ಬರಗಾಲದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವಿನ ಕೊರತೆಯಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಅಗತ್ಯವಿರುವ ಕಡೆಗಳಲ್ಲಿ ಮೇವು ಬ್ಯಾಂಕ್ ಸ್ಥಾಪನೆಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ರೈತರಿಗೆ ಬರ ಪರಿಹಾರ ಹಾಗೂ ಬೆಳೆ ವಿಮೆ ದೊರಕಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಜಾನುವಾರುಗಳ ಸಂರಕ್ಷಣೆಗೆ ವಿಶೇಷ ಆದ್ಯತೆ ನೀಡಬೇಕು. ರೈತರು ಹಾಗೂ ಜಾನುವಾರುಗಳು ಸಂಕಷ್ಟಕ್ಕೆ ಸಿಲುಕದಂತೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.