ಕನ್ನಡಪ್ರಭ ವಾರ್ತೆ ಬೀದರ್
ನಗರದ ಡಾ.ಅಂಬೇಡ್ಕರ್ ವೃತ್ತದಲ್ಲಿ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾಧ್ಯಕ್ಷೆ ವಿಜಯಲಕ್ಷ್ಮಿ ಗಡ್ಡೆ ಮಾತನಾಡಿ, ಭಾರತೀಯ ಸಂವಿಧಾನ ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ನೀಡಿದ್ದರೂ ರಾಜಕೀಯ ಕ್ಷೇತ್ರದಲ್ಲಿ ಅವರಿಗೆ ಸಮರ್ಪಕ ಪ್ರಾತಿನಿಧ್ಯ ದೊರೆತಿಲ್ಲ ಎಂದು ಆರೋಪಿಸಿದರು.
ಸುಮಾರು ಐದು ದಶಕಗಳಿಂದ ಲೋಕಸಭೆ ಹಾಗೂ ರಾಜ್ಯಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿಗಾಗಿ ಹೋರಾಟ ನಡೆಯುತ್ತಿದ್ದರೂ ಅದು ಇನ್ನೂ ಜಾರಿ ಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.ಸಂಸತ್ತಿನಲ್ಲಿ ಅಂಗೀಕರಿಸಲಾದ 106ನೇ ಸಂವಿಧಾನ ತಿದ್ದುಪಡಿ ಕಾಯ್ದೆಯ ಜಾರಿಯನ್ನು ಜನಗಣತಿ ಹಾಗೂ ಕ್ಷೇತ್ರ ಮರುವಿಂಗಡಣೆಯೊಂದಿಗೆ (ಡಿಲಿಮಿಟೇಶನ್) ಜೋಡಿಸಿ ರುವ ಷರತ್ತುಗಳನ್ನು ಕೈಬಿಟ್ಟು, ಪ್ರಸಕ್ತ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿಯೇ ಮಹಿಳಾ ಮೀಸಲಾತಿ ಕಾಯ್ದೆ ಜಾರಿಗೊಳಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ದರು. ಬೇಡಿಕೆ ಈಡೇರದಿದ್ದಲ್ಲಿ ದೇಶಾದ್ಯಂತ ಹೋರಾಟವು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ರಾಷ್ಟ್ರೀಯ ಮಹಿಳಾ ಮೀಸಲಾತಿ ಒಕ್ಕೂಟದ ನೇತೃತ್ವದಲ್ಲಿ ರಾಜ್ಯಾದ್ಯಂತ ಮಹಿಳಾ ಮೀಸಲಾತಿ ಕುರಿತು ಜನಜಾಗೃತಿ ಅಭಿಯಾನ ನಡೆಯುತ್ತಿದ್ದು, ವಿವಿಧ ರಾಜಕೀಯ ಮುಖಂಡರು, ಸಾಹಿತಿಗಳು, ಸಮಾಜಮುಖಿ ಚಿಂತಕರು ಹಾಗೂ ಸಾರ್ವಜನಿಕರಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಈ ಹೋರಾಟವನ್ನು ಬಲಪಡಿಸುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.