- ಬಿಜೆಪಿಯವರದ್ದು ಮುಂಚಿನಿಂದಲೂ ಹೊಡಿ ಬಡಿ ಸಂಸ್ಕೃತಿ: ಸೈಯದ್ ಖಾಲಿದ್ - - -
ಕಾಂಗ್ರೆಸ್ ನಾಯಕರನ್ನು ಅರಬ್ಬೀ ಸಮುದ್ರಕ್ಕೆ ಎಸೆಯುತ್ತೇವೆಂಬ ವಿವಾದಾತ್ಮಕ ಹೇಳಿಕೆ ನೀಡಿದ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ವಿರುದ್ಧ ತಕ್ಷಣವೇ ಎಫ್ಐಆರ್ ದಾಖಲಿಸಿ, ಬಂಧಿಸುವಂತೆ ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ದಾವಣಗೆರೆಯ ಸೈಯದ್ ಖಾಲಿದ್ ಅಹಮ್ಮದ್ ಒತ್ತಾಯಿಸಿದ್ದಾರೆ.
ವಿವಾದಾತ್ಮಕ ಹೇಳಿಕೆ ನೀಡಿರುವ ಛಲವಾದಿ ನಾರಾಯಣ ಸ್ವಾಮಿ ನೈತಿಕ ಹೊಣೆ ಹೊತ್ತು ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಬಿಜೆಪಿ ನಾಯಕರು ಕಾಂಗ್ರೆಸ್ಸಿನ ನಾಯಕರ ವಿರುದ್ಧ ಪ್ರಚೋದಾತ್ಮಕ ಹಾಗೂ ನಿಂದನಾತ್ಮಕ ಹೇಳಿಕೆ ನೀಡುತ್ತಿರುವುದು ಖಂಡನೀಯ ಎಂದು ಅವರು ತಿಳಿಸಿದ್ದಾರೆ.ಕೆಲ ದಿನಗಳ ಹಿಂದಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದಾವಣಗೆರೆಯಲ್ಲಿ ಕಾಂಗ್ರೆಸ್ ನಾಯಕರ ಬಗ್ಗೆ ಆಕ್ಷೇಪಾರ್ಹ ಪದ ಬಳಸಿ, ಮಾತನಾಡಿದ್ದರು. ಈಗ ಪ್ರಚೋದನೆ ಹಾಗೂ ಕೊಲೆ ಬೆದರಿಕೆ ಹಾಕುವ ಮಾತನಾಡಿರುವ ಛಲವಾದಿ ನಾರಾಯಣ ಸ್ವಾಮಿ ಸಾಂವಿಧಾನಿಕ ಹುದ್ದೆಯಲ್ಲಿ ಇರುವುದನ್ನೇ ಮರೆತು, ರೌಡಿಗಳಂತೆ ಹೇಳಿಕೆ ನೀಡಿರುವುದು ಖಂಡನೀಯ ಎಂದು ಆಕ್ಷೇಪಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ವಿಪಕ್ಷ ಬಿಜೆಪಿ ನಾಯಕರ ಗೊಡ್ಡು ಬೆದರಿಕೆಗಳಿಗೆ ಜಗ್ಗಲ್ಲ, ಕುಗ್ಗಲ್ಲ, ಬಗ್ಗುವವರಲ್ಲ. ಕಾಂಗ್ರೆಸ್ ನಾಯಕರನ್ನು ತುಂಡು ತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯುತ್ತೇವೆಂಬ ಪ್ರಚೋದನಾಕಾರಿ ಹೇಳಿಕೆ ನೀಡಿದ ಛಲವಾದಿ ನಾರಾಯಣ ಸ್ವಾಮಿ ವಿರುದ್ಧ ಕಾನೂನು ಕ್ರಮ ಜರುಗಿಸಲಿ. ಇಲ್ಲದಿದ್ದರೆ ಕಾಂಗ್ರೆಸ್ ಕಾರ್ಯಕರ್ತರು ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿತ್ತಾರೆ ಎಂದು ಸೈಯದ್ ಖಾಲಿದ್ ಅಹ್ಮದ್ ಎಚ್ಚರಿಸಿದ್ದಾರೆ.