ರಾಮನಗರ: ಕನಿಷ್ಟ ವೇತನ ಅನುದಾನ ಹೆಚ್ಚಳ ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘ ರಾಮನಗರ ತಾಲೂಕು ಮತ್ತು ಜಿಲ್ಲಾ ಸಮಿತಿ ಪದಾಧಿಕಾರಿಗಳು ಮಂಗಳವಾರ ನಗರದ ಜಿಲ್ಲಾ ಕಚೇರಿಗಳ ಸಂಕೀರ್ಣದ ಆವರಣದಲ್ಲಿ ಪ್ರತಿಭಟನಾ ಧರಣಿ ನಡೆಸಿದರು.
3ರಿಂದ 6 ವರ್ಷದ ಮಕ್ಕಳಿಗೆ ಅಂಗನವಾಡಿಗಳಲ್ಲಿಯೇ ಪ್ರಾಥಮಿಕ ಶಿಕ್ಷಣ ನೀಡಲು ಕಾನೂನು ತರಬೇಕು. ಯೋಜನೆಯಲ್ಲಿ ದುಡಿಯುತ್ತಿರುವ ನೌಕರರನ್ನು ಖಾಯಮಾತಿ ಮಾಡಬೇಕು. ನಿವೃತ್ತಿ ಹೊಂದಿದ ನೌಕರರಿಗೆ ಮಾಸಿಕ 10 ಸಾವಿರ ಪಿಂಚಣಿ, 31 ಸಾವಿರ ಕನಿಷ್ಠ ವೇತನ ಜಾರಿ, ಕಾರ್ಯಕರ್ತರಿಗೆ ಸಹಾಯಕಯರಿಗೆ ಗ್ರಾಚ್ಯುಟಿ ಸೌಲಭ್ಯ ನೀಡಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಸರ್ಕಾರ ಫೆಬ್ರವರಿಯಲ್ಲಿ ಮಂಡಿಸಲಿರುವ ಬಜೆಟ್ ನಲ್ಲಿ ಎಂಡಿಎಂ ಯೋಜನೆಗೆ ಅನುದಾನ ಹೆಚ್ಚಿಸಬೇಕು, ಆಹಾರ, ಆರೋಗ್ಯ, ಶಿಕ್ಷಣ ಯೋಜನೆಗಳಾದ ಐಸಿಡಿಎಸ್, ಎಂಡಿಎಂ, ಎನ್ ಹೆಚ್ ಎಂ, ಐಸಿಪಿಎಸ್, ಎಸ್ ಎಸ್ ಎ, ಎಂಎನ್‌ಆರ್‌ಇಜಿ ಯೋಜನೆಗಳನ್ನು ಖಾಯಂ ಮಾಡುವ ಮೂಲಕ ಯೋಜನೆಯ ಹಕ್ಕುಗಳನ್ನು ಸಾರ್ವತ್ರಿಕಗೊಳಿಸಬೇಕು. ಯೋಜನೆಯ ನೌಕರರಿಗೆ ಕನಿಷ್ಠ ವೇತನ ನಿವೃತ್ತಿ ಸೌಲಭ್ಯ ಕಲ್ಪಿಸಿ ನೌಕರರು ಎಂದು ಪರಿಗಣಿಸಬೇಕು ಎಂದು ಒತ್ತಾಯಿಸಿದರು.ಅಕ್ಷರ ದಾಸೋಹ ಕೈಪಿಡಿಯಲ್ಲಿ ಕೆಲಸದ ಅವಧಿಯನ್ನು ನಾಲ್ಕು ಗಂಟೆಯಿಂದ ಆರು ಗಂಟೆ ಎಂದು ಬದಲಾಯಿಸಬೇಕು. ಬಿಸಿ ಊಟ ನೌಕರರಿಗೆ ಪರಿಹಾರ ನೀಡದೆ ನಿವೃತ್ತಿ ಮಾಡಬಾರದು. ಈಗಾಗಲೇ ನಿವೃತ್ತಿಯಾಗಿರುವವರಿಗೆ ಇಡಿಗಂಟು ನೀಡಬೇಕು. ಅಕ್ಷರ ದಾಸೋಹ ಯೋಜನೆಯನ್ನು ಶಿಕ್ಷಣ ಇಲಾಖೆ ಅಡಿಯಲ್ಲಿ ನಡೆಸಬೇಕು. ಹಲವು ವರ್ಷದಿಂದ ವೇತನ ಹೆಚ್ಚಳ ಮಾಡದಿರುವುದರಿಂದ ಕೂಡಲೇ ವೇತನ ಹೆಚ್ಚಿಸಬೇಕು, ವಿದ್ಯುತ್, ರೈಲ್ವೆ ಸೇರಿ ಸಾರ್ವಜನಿಕ ವಲಯ ಖಾಸಗೀ ಕರಣ ನಿಲ್ಲಿಸಬೇಕು.
ಕಾಂಗ್ರೆಸ್ ಸರ್ಕಾರ ಭರವಸೆ ನೀಡಿದ 6 ನೇ ಗ್ಯಾರಂಟಿ ಅಂಗನವಾಡಿ ಕಾರ್ಯಕರ್ತರಿಗೆ 15 ಸಾವಿರ, ಬಿಸಿಯೂಟ ನೌಕರರಿಗೆ 6 ಸಾವಿರ ವೇತನ ನಿವೃತ್ತಿ ಸೌಲಭ್ಯ ಜಾರಿ ಮಾಡಬೇಕು ಎಂದು ಒತ್ತಾಯಿಸಿ ಪ್ರತಿಭಟನಾಕಾರರು ಅಪರ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.
ರಾಮನಗರ ಜಿಲ್ಲಾ ಕಚೇರಿಗಳ ಸಂಕೀರ್ಣದ ಆವರಣದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದಮೂರ್ತಿ ಅವರಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು.