ವಿವಿಧ ಬೇಡಿಕೆ ಈಡೇರಿಸಲು ಆಗ್ರಹ: ಸರ್ಕಾರಿ ನೌಕರರ ಸಂಘದಿಂದ ಮನವಿ ಸಲ್ಲಿಕೆ

KannadaprabhaNewsNetwork | Published : Jul 13, 2024 1:38 AM

ಸಾರಾಂಶ

ಚಿಕ್ಕಮಗಳೂರು, ಏಳನೇ ವೇತನ ಆಯೋಗದ ಶಿಫಾರಸ್ಸನ್ನು ಯಥಾವತ್ತಾಗಿ ಜಾರಿಗೊಳಿಸಬೇಕು, ನೂತನ ಪಿಂಚಣಿ ಯೋಜನೆ ಕೈ ಬಿಟ್ಟು, ಹಳೇ ಯೋಜನೆಯನ್ನೇ ಮುಂದುವರಿಸಬೇಕು ಮತ್ತು ತಮಗೂ ಆರೋಗ್ಯ ಸಂಜೀವಿನಿ ವಿಮಾ ಯೋಜನೆ ಜಾರಿಗೊಳಿಸ ಬೇಕೆಂದು ರಾಜ್ಯ ಸರ್ಕಾರಿ ನೌಕರರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಜಿಲ್ಲಾ ಸರ್ಕಾರಿ ನೌಕರರ ಸಂಘದ ನೇತೃತ್ವದಲ್ಲಿ ಸಚಿವ ಕೆ.ಜೆ. ಜಾರ್ಜ್, ಎಚ್.ಡಿ. ತಮ್ಮಯ್ಯ, ಸಿ. ಟಿ. ರವಿಗೆ ಕೋರಿಕೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಏಳನೇ ವೇತನ ಆಯೋಗದ ಶಿಫಾರಸ್ಸನ್ನು ಯಥಾವತ್ತಾಗಿ ಜಾರಿಗೊಳಿಸಬೇಕು, ನೂತನ ಪಿಂಚಣಿ ಯೋಜನೆ ಕೈ ಬಿಟ್ಟು, ಹಳೇ ಯೋಜನೆಯನ್ನೇ ಮುಂದುವರಿಸಬೇಕು ಮತ್ತು ತಮಗೂ ಆರೋಗ್ಯ ಸಂಜೀವಿನಿ ವಿಮಾ ಯೋಜನೆ ಜಾರಿಗೊಳಿಸ ಬೇಕೆಂದು ರಾಜ್ಯ ಸರ್ಕಾರಿ ನೌಕರರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಸಂಬಂಧ ಜಿಲ್ಲಾ ಸರ್ಕಾರಿ ನೌಕರರ ಸಂಘದ ನೇತೃತ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್, ಶಾಸಕರಾದ ಎಚ್.ಡಿ. ತಮ್ಮಯ್ಯ, ಸಿ. ಟಿ. ರವಿ, ಎಸ್.ಎಲ್‌. ಭೋಜೇಗೌಡ, ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಅವರನ್ನು ಶುಕ್ರವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ರಾಜ್ಯ ಸಮಾವೇಶದಲ್ಲಿ ಮುಖ್ಯಮಂತ್ರಿ ಏಳನೇ ವೇತನ ಆಯೋಗದ ಶಿಫಾರಸ್ಸನ್ನು ಆದಷ್ಟು ಶೀಘ್ರ ಜಾರಿಗೊಳಿಸುವುದಾಗಿ ಭರವಸೆ ನೀಡಿದ್ದರು, ನಂತರ ಚುನಾವಣಾ ನೀತಿ ಸಂಹಿತೆ ಮುಗಿದ ಮೇಲೆ ಜಾರಿಗೊಳಿಸುವುದಾಗಿ ತಿಳಿಸಿದ್ದರು.ವೇತನ ಆಯೋಗದ ಶಿಫಾರಸ್ಸನ್ನು ಜಾರಿಗೊಳಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಉಪಯೋಗವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ನೌಕರರು, ವೇತನ ಆಯೋಗ ವರದಿ ಸಲ್ಲಿಸಿ 19 ತಿಂಗಳಾದರೂ ರಾಜ್ಯ ಸರ್ಕಾರ ಅದನ್ನು ಇನ್ನೂ ಜಾರಿಗೊಳಿಸಿಲ್ಲ ಎಂದು ಮನವಿಯಲ್ಲಿ ಆರೋಪಿಸಿದ್ದಾರೆ.ನೂತನ ಪಿಂಚಣಿ ಯೋಜನೆಯಿಂದಾಗಿ ನಿವೃತ್ತ ರಾಜ್ಯ ಸರ್ಕಾರಿ ನೌಕರರಿಗೆ ಆರ್ಥಿಕ ಭದ್ರತೆ ಇಲ್ಲದಂತಾಗಿದೆ ಎಂದು ಅಳಲು ತೋಡಿಕೊಂಡ ನೌಕರರು, ಹಳೇ ಯೋಜನೆಯನ್ನೇ ಮುಂದುವರಿಸಬೇಕು. ಸದಾ ಒತ್ತಡದ ನಡುವೆ ಕರ್ತವ್ಯ ನಿರ್ವಹಿಸುವ ತಮಗೂ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ದೇವೇಂದ್ರ, ಗೌರವಾಧ್ಯಕ್ಷ ಮಂಜುನಾಥ್, ರಾಜ್ಯ ಪರಿಷತ್ ಸದಸ್ಯ ಎಸ್.ಟಿ. ಪೂರ್ಣೇಶ್, ಕೇಂದ್ರ ಸಂಘದ ಪದಾಧಿಕಾರಿಗಳಾದ ಶಿವಕುಮಾರ್, ವಿಜಯಕುಮಾರ್, ಮಾಜಿ ಗೌರವಾಧ್ಯಕ್ಷ ಓಂಕಾರ ಸ್ವಾಮಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಸುಂದರೇಶ್, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಯೋಗೀಶ್ ಹಾಗೂ ವಿವಿಧ ಇಲಾಖೆಗಳ ನೌಕರರು ಹಾಜರಿದ್ದರು.

ಪೋಟೋ ಫೈಲ್‌ ನೇಮ್‌ 12 ಕೆಸಿಕೆಎಂ 3ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು. ನೌಕರರ ಸಂಘದ ಜಿಲ್ಲಾಧ್ಯಕ್ಷ ದೇವೇಂದ್ರ, ಮಂಜುನಾಥ್‌, ಓಂಕಾರಸ್ವಾಮಿ, ಸುಂದರೇಶ್‌ ಇದ್ದರು.

Share this article