ಕನ್ನಡಪ್ರಭ ವಾರ್ತೆ ಕಾರವಾರ
ಬುಧವಾರ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಓಬಿಸಿ ಮೋರ್ಚಾ ನೇತೃತ್ವದಲ್ಲಿ ನಡೆದ ಸತ್ಯಾಗ್ರಹದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ, ಮಾಜಿ ಸಚಿವ ಹರತಾಳು ಹಾಲಪ್ಪ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್.ಹೆಗಡೆ ಸಚಿವ ನಾಗೇಂದ್ರ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಸತ್ಯಾಗ್ರಹಕ್ಕೂ ಮುನ್ನ ಭಾರತಮಾತೆ ಹಾಗೂ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಪ್ರತಿಭಟನೆಗೆ ಚಾಲನೆ ನೀಡಲಾಯಿತು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ರೂ. ಅವ್ಯವಹಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ ವಿರುದ್ಧ ಗಂಭೀರ ಆರೋಪಗಳಿದ್ದು, ಕೂಡಲೇ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಬಿಜೆಪಿ ಮುಖಂಡರು ಒತ್ತಾಯಿಸಿದರು.ರೂಪಾಲಿ ಎಸ್. ನಾಯ್ಕ ಮಾತನಾಡಿ, ವಾಲ್ಮೀಕಿ ಮಹರ್ಷಿ ಅವರ ಹೆಸರಿನಲ್ಲಿ ಸ್ಥಾಪನೆಯಾಗಿರುವ ನಿಗಮದಲ್ಲಿ ದೊಡ್ಡ ಪ್ರಮಾಣದ ಹಗರಣ ನಡೆದಿರುವುದು ಖಂಡನೀಯ. ಸಚಿವ ನಾಗೇಂದ್ರ ವಿರುದ್ಧ ಈ ಹಿಂದೆಯೂ ಬಿಜೆಪಿ ಹೋರಾಟ ನಡೆಸಿದ್ದು, ಅದರ ಪರಿಣಾಮವಾಗಿ ಅವರು ರಾಜೀನಾಮೆ ನೀಡಿದ್ದರು. ಇದೀಗ ಮತ್ತೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಿರುವುದು ಸರ್ಕಾರ ಭ್ರಷ್ಟರನ್ನು ಪೋಷಿಸುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಟೀಕಿಸಿದರು. ಕೂಡಲೇ ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
ಮಾಜಿ ಸಚಿವ ಹರತಾಳ ಹಾಲಪ್ಪ ಮಾತನಾಡಿ, ಭ್ರಷ್ಟಾಚಾರದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳುವ ಕಾಂಗ್ರೆಸ್ ಸರ್ಕಾರ ತನ್ನ ಸಚಿವರ ವಿರುದ್ಧದ ಆರೋಪಗಳ ವಿಚಾರದಲ್ಲಿ ಮೃದು ಧೋರಣೆ ತಾಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಧರಣಿ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗೆ ಮಾಜಿ ಸಚಿವ ಹರತಾಳು ಹಾಲಪ್ಪ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ಎಸ್.ನಾಯ್ಕ ಪ್ರತಿಭಟನಾಕಾರರಿಗಾಗಿ ವಿದ್ಯುದ್ದೀಪದ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದರು. ಇತರೆ ಜಿಲ್ಲೆಗಳಲ್ಲಿ ಕುಡಿಯುವ ನೀರು ಹಾಗೂ ವಿದ್ಯುತ್ ದೀಪದ ವ್ಯವಸ್ಥೆ ಮಾಡಲಾಗಿದ್ದು, ಕಾರವಾರದಲ್ಲಿಯೂ ಅಗತ್ಯ ಸೌಲಭ್ಯ ಒದಗಿಸಬೇಕು ಎಂದು ಮನವಿ ಸಲ್ಲಿಸಿದರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ವಿದ್ಯುದ್ದೀಪದ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿದರು.