ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ವಿಜ್ಞಾನ ಕಾಲೇಜು ಎದುರಿಗೆ ಇರುವ ಹಿಂದೂ ಮಹಾಗಣಪತಿ ಪ್ರತಿಷ್ಠಾಪನಾ ಪೆಂಡಾಲ್ ಸಮೀಪದಿಂದ ಮೆರವಣಿಗೆ ಮೂಲಕ ಹೊರಟ ಪ್ರತಿಭಟನಾಕಾರರು ಮದಕರಿ ನಾಯಕ ವೃತ್ತ, ಅಂಬೇಡ್ಕರ್ ವೃತ್ತ, ಗಾಂಧಿ ವೃತ್ತದ ಮೂಲಕ ಒನಕೆ ಓಬವ್ವ ವೃತ್ತಕ್ಕೆ ಆಗಮಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಈ ವೇಳೆ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ನುಗ್ಗಲು ಯತ್ನಿಸಿದಾಗ ಪೊಲೀಸರು ತಡೆದರು. ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗ ಸುತ್ತಲೂ ಬ್ಯಾರಿಕೇಡ್‍ಗಳನ್ನು ಅಡ್ಡ ಇಟ್ಟು ಪೊಲೀಸರು ಪ್ರತಿಭಟನಾಕಾರರ ನಿರ್ಬಂಧಿಸಿದರು.ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಮಾತನಾಡಿ, 18 ವರ್ಷಗಳಿಂದಲೂ ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಯಶಸ್ವಿಯಾಗಿ ನಡೆದಿದೆ. ಸಣ್ಣ ಅಹಿತಕರ ಘಟನೆಯಾಗಿಲ್ಲ. ರಾಜ್ಯ ಸರ್ಕಾರ ಏಕೆ ಡಿಜೆಗೆ ಅನುಮತಿ ನೀಡುತ್ತಿಲ್ಲ. ವಿಶ್ವಹಿಂದೂ ಪರಿಷತ್‍ನ ಶರಣ್ ಪಂಪ್‍ವೆಲ್ ಚಿತ್ರದುರ್ಗ ಪ್ರವೇಶಕ್ಕೆ ಜಿಲ್ಲಾಧಿಕಾರಿ ನಿರ್ಬಂಧ ಹೇರಿರುವುದನ್ನು ಹಿಂದಕ್ಕೆ ಪಡೆಯಬೇಕು. ರಾಜ್ಯ ಹೊರ ರಾಜ್ಯಗಳಿಂದ ಲಕ್ಷಾಂತರ ಭಕ್ತರು ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಪಾಲ್ಗೊಂಡು ಭಕ್ತಿ ಪ್ರದರ್ಶಿಸುತ್ತಿದ್ದಾರೆ. ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಗಣಪತಿ ಮೆರವಣಿಗೆಗೆ ರಾಜ್ಯ ಸರ್ಕಾರ ಡಿಜೆಗೆ ಅನುಮತಿ ಕೊಟ್ಟಿದೆ. ಅದೇ ರೀತಿ ಇಲ್ಲಿಯೂ ಅವಕಾಶ ನೀಡಬೇಕೆಂದು ಒತ್ತಾಯಿಸಿದರು.