ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನ ಬಿಡುಗಡೆಗೆ ಆಗ್ರಹ

KannadaprabhaNewsNetwork |  
Published : Oct 17, 2024, 12:45 AM IST
೧೬ಕೆಎಲ್‌ಆರ್-೪ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ದೊರೆಯುವ ಶೈಕ್ಷಣಿಕ ಸಹಾಯಧನ ಕಡಿತ ಮಾಡಿರುವ ಆದೇಶ ವಾಪಸ್ ಪಡೆದು ಹೈಕೋರ್ಟ್ ಆದೇಶದಂತೆ ಬಾಕಿ ಇರುವ ಶೈಕ್ಷಣಿಕ ಧನ ಸಹಾಯ ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್‌ನಿಂದ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಸೌಲಭ್ಯಗಳಿಗಾಗಿ ಸಲ್ಲಿಸಿರುವ ಅರ್ಜಿಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡಬೇಕು. ಪಿಂಚಣಿದಾರರಿಗೆ ಪ್ರತಿ ತಿಂಗಳು ೫ನೇ ತಾರೀಖಿನೊಳಗೆ ಹಣವನ್ನು ಬಿಡುಗಡೆ ಮಾಡಬೇಕು. ಟೆಂಡರ್ ಆಧಾರಿತ ಎಲ್ಲ ಖರೀದಿ ವ್ಯವಹಾರಗಳನ್ನು ನಿಲ್ಲಿಸಬೇಕು, ಇದುವರೆಗೆ ನಡೆದಿರುವ ಖರೀದಿಗಳಲ್ಲಿ ಅವ್ಯವಹಾರ ನಡೆದಿದ್ದು, ಈ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಕನ್ನಡಪ್ರಭ ವಾರ್ತೆ ಕೋಲಾರ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ದೊರೆಯುವ ಶೈಕ್ಷಣಿಕ ಸಹಾಯಧನವನ್ನು ಕಡಿತಗೊಳಿಸಿರುವ ಆದೇಶವನ್ನು ವಾಪಸ್ ಪಡೆದು ಹೈಕೋರ್ಟ್ ಆದೇಶದಂತೆ ಬಾಕಿಯಿರುವ ಶೈಕ್ಷಣಿಕ ಧನವನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್‌ನಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಸಂಘದ ಜಿಲ್ಲಾಧ್ಯಕ್ಷ ಪಿ.ಶ್ರೀನಿವಾಸ್ ಮಾತನಾಡಿ, ಅತ್ಯಂತ ಸಂಕಷ್ಟದಲ್ಲಿ ಜೀವನ ನಡೆಸುತ್ತಿರುವ ಕಟ್ಟಡ ಕಾರ್ಮಿಕರು, ತಮ್ಮ ಮಕ್ಕಳನ್ನು ವಿದ್ಯಾಭ್ಯಾಸ ಮಾಡಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಮಂಡಳಿಯಿಂದ ದೊರೆಯುವ ವಿದ್ಯಾರ್ಥಿ ವೇತನದಿಂದ ಪ್ರಯೋಜನವಾಗುತ್ತಿತ್ತು. ಕಳೆದ ವರ್ಷ ಪೂರ್ವಾನ್ವಯವಾಗುವಂತೆ ವಿದ್ಯಾರ್ಥಿವೇತನವನ್ನು ಭಾರೀ ಪ್ರಮಾಣದಲ್ಲಿ ಕಡಿತ ಮಾಡಿರುವುದು ಖಂಡನೀಯ. ಕೂಡಲೇ ಈ ಆದೇಶವನ್ನು ವಾಪಸ್ ಪಡೆದು, ಹಿಂದಿನಂತೆ ವಿದ್ಯಾರ್ಥಿವೇತನ ಬಿಡುಗಡೆಗೊಳಿಸುವಂತೆ ಆಗ್ರಹಿಸಿದರು.

ನೈಜ ಕಟ್ಟಡ ಕಾರ್ಮಿಕರ ನೋಂದಣಿ ಮತ್ತು ನವೀಕರಣ ಅರ್ಜಿಗಳನ್ನು ಸಕಾರಣವಿಲ್ಲದೇ ತಿರಸ್ಕರಿಸುವುದು ನಿಲ್ಲಬೇಕು ಹಾಗೂ ವಿಳಂಬ ಮಾಡದೇ ಕಾರ್ಡು ವಿತರಣೆ ಆಗಬೇಕು. ಸೌಲಭ್ಯಗಳಿಗಾಗಿ ಸಲ್ಲಿಸಿರುವ ಅರ್ಜಿಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡಬೇಕು. ಪಿಂಚಣಿದಾರರಿಗೆ ಪ್ರತಿ ತಿಂಗಳು ೫ನೇ ತಾರೀಖಿನೊಳಗೆ ಹಣವನ್ನು ಬಿಡುಗಡೆ ಮಾಡಬೇಕು. ಟೆಂಡರ್ ಆಧಾರಿತ ಎಲ್ಲ ಖರೀದಿ ವ್ಯವಹಾರಗಳನ್ನು ನಿಲ್ಲಿಸಬೇಕು, ಇದುವರೆಗೆ ನಡೆದಿರುವ ಖರೀದಿಗಳಲ್ಲಿ ಅವ್ಯವಹಾರ ನಡೆದಿದ್ದು, ಈ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ. ಭೀಮರಾಜ್ ಮಾತನಾಡಿ, ನೈಜ ಕಟ್ಟಡ ಕಾರ್ಮಿಕರು ಸಲ್ಲಿಸುವ ಸೌಲಭ್ಯಗಳ ಅರ್ಜಿಗಳನ್ನು ತಿರಸ್ಕರಿದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ, ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು. ನಗರಸಭೆ, ಪುರಸಭೆ ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ ಖಾಸಗಿ ಕಟ್ಟಡಗಳಿಂದ ಸೆಸ್ ಸಂಗ್ರಹಿಸಲು ವಿಶೇಷ ಯೋಜನೆ ರೂಪಿಸಬೇಕು. ಕಳೆದ ವರ್ಷ ಸಾಫ್ಟ್ ವೇರ್ ಸಮರ್ಪಕವಾಗಿ ಕೆಲಸ ನಿರ್ವಹಿಸದೇ ಹಲವು ಮಂದಿ ಪಿಂಚಣಿ ಅರ್ಜಿ ಸಲ್ಲಿಸಲು ಸಾಧ್ಯವಾಗಲಿಲ್ಲ. ಅಂತವರು ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕು. ತಿರಸ್ಕೃತ ನೋಂದಣಿ, ನವೀಕರಣ, ಸೌಲಭ್ಯಗಳ ಅರ್ಜಿಗಳ ಕುರಿತು ಮೇಲ್ಮನವಿ ಸಲ್ಲಿಸಲು ಆನ್‌ಲೈನ್‌ನಲ್ಲಿ ಅವಕಾಶ ನೀಡಬೇಕು. ಈ ಮೇಲ್ಮನವಿ ಪ್ರಾಧಿಕಾರಿಗಳ ಕಾರ್ಯನಿರ್ವಹಣೆ ಕುರಿತು ಅಗತ್ಯ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಬೇಕು ಎಂದು ಕಾರ್ಮಿಕ ಅಧಿಕಾರಿಗಳ ಮೂಲಕ ಕಾರ್ಮಿಕ ಸಚಿವರಿಗೆ ಒತ್ತಾಯಿಸಿದರು.

ಸಂಘದ ಕಾರ್ಯಾಧ್ಯಕ್ಷ ಕೆ. ಮಂಜುನಾಥ್, ಜಿಲ್ಲಾ ಸಹ ಕಾರ್ಯದರ್ಶಿ ಎಂ. ವಿಜಯಕೃಷ್ಣ, ತಾಲೂಕು ಅಧ್ಯಕ್ಷ ಹೊಗರಿ ನಾಗರಾಜ್, ಮುಖಂಡರಾದ ಗುರುಸ್ವಾಮಿ, ಅಪ್ಪಯ್ಯಣ್ಣ, ಕೇಶವರಾವ್ ಅಶೋಕರಾವ್, ಚಂದ್ರಪ್ಪ, ವೆಂಕಟೇಶ್, ಪೆರುಮಾಳಪ್ಪ, ಗೋಪಾಲ್, ದಶರತ್, ದಿಂಬ ಮಂಜುನಾಥ್, ಮುನಿಯಪ್ಪ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ