ಕನ್ನಡಪ್ರಭ ವಾರ್ತೆ ಹಾಸನ
ಪ್ರತಿಭಟನೆಯಲ್ಲಿ ಡಿಎಚ್‌ಎಸ್ ಜಿಲ್ಲಾ ಸಂಚಾಲಕ ಎಂ.ಜಿ. ಪೃಥ್ವಿ ಮಾತನಾಡಿ, ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಸಂತ್ರಸ್ತರಿಗೆ ಕಾನೂನುಬದ್ಧವಾಗಿ ದೊರೆಯಬೇಕಾದ ಪರಿಹಾರ ಧನ ವಿತರಣೆಯಲ್ಲಿ ವಿಳಂಬವಾಗುತ್ತಿರುವುದು ಖಂಡನೀಯ ಎಂದು ಹೇಳಿದರು. ಹಾಸನ ಜಿಲ್ಲೆಯಲ್ಲಿ ಕಳೆದ ವರ್ಷ ದಾಖಲಾಗಿರುವ ದೌರ್ಜನ್ಯ ಪ್ರಕರಣಗಳಲ್ಲಿ ೫೨ ಸಂತ್ರಸ್ತ ಕುಟುಂಬಗಳು ಹಾಗೂ ೨೨ ಪಿಂಚಣಿದಾರರಿಗೆ ಸೇರಬೇಕಾದ ಸುಮಾರು ₹೧.೨೩ ಕೋಟಿ ಪರಿಹಾರ ಇನ್ನೂ ಬಾಕಿ ಇದೆ ಎಂದು ಆರೋಪಿಸಿದರು. ಅಂತರ್ಜಾತಿ ವಿವಾಹಿತರಿಗೆ ನೀಡಬೇಕಾದ ಪ್ರೋತ್ಸಾಹಧನವೂ ವಿಳಂಬವಾಗಿದ್ದು, ಹಾಸನ ಜಿಲ್ಲೆಯಲ್ಲಿ ೪೨೮ ಅಂತರ್ಜಾತಿ ವಿವಾಹಗಳು, ೩೩ ಒಳಪಂಗಡಗಳ ವಿವಾಹಗಳು ಹಾಗೂ ಇಬ್ಬರು ವಿಧವಾ ಮರುವಿವಾಹಿತರ ಸೇರಿ ಒಟ್ಟು ಫಲಾನುಭವಿಗಳಿಗೆ ಸುಮಾರು ೧೧.೯೦ ಕೋಟಿ ಪ್ರೋತ್ಸಾಹ ಧನ ವಿತರಣೆ ಆಗಿಲ್ಲ ಎಂದು ತಿಳಿಸಿದರು. ಅಗತ್ಯ ಅನುದಾನ ಬಿಡುಗಡೆ ಮಾಡಿ ಬಾಕಿ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ದಲಿತರ ವಿರುದ್ಧ ದಾಖಲಿಸಲಾಗುತ್ತಿರುವ ಸುಳ್ಳು ಕೌಂಟರ್ ಪ್ರಕರಣಗಳನ್ನು ತಡೆದು, ಜಾತಿ ದೌರ್ಜನ್ಯ ಎಸಗಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ದಲಿತರಿಗೆ ದೊರೆಯುವ ಸೌಲಭ್ಯಗಳನ್ನು ಕಾಲಮಿತಿಯೊಳಗೆ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡುವ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು. ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಸರ್ಕಾರದ ವಿರುದ್ಧ ತೀವ್ರ ಹೋರಾಟ ಹಾಗೂ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.ಪ್ರತಿಭಟನೆಯಲ್ಲಿ ಡಿ. ಎಚ್.ಎಸ್. ಜಿಲ್ಲಾ ಸಂಚಾಲಕ ಪೃಥ್ವಿ ಎಂ.ಜಿ., ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ನವೀನ್ ಕುಮಾರ್, ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು.