ಕನ್ನಡಪ್ರಭವಾರ್ತೆ ಚಿತ್ರದುರ್ಗಬಿಸಿಯೂಟ ತಯಾರಕರಿಗೆ ಏಪ್ರಿಲ್ ಮತ್ತು ಮೇ ತಿಂಗಳ ವೇತನವನ್ನು ಕೂಡಲೇ ಬಿಡುಗಡೆಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎಐಟಿಯುಸಿ ಕಾರ್ಯಕರ್ತರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.ಕಮ್ಯುನಿಸ್ಟ್ ಕಚೇರಿಯಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಬಿಸಿಯೂಟ ತಯಾರಕರಿಗೆ ಕನಿಷ್ಟ ವೇತನ ನೀಡದ ಸರ್ಕಾರದ ವಿರುದ್ಧ ಧಿಕ್ಕಾರಗಳನ್ನು ಕೂಗಿದರು. ಮುಖ್ಯ ಅಡುಗೆಯವರಿಗೆ ತಿಂಗಳಿಗೆ ₹3700 ಹಾಗೂ ಸಹಾಯಕರಿಗೆ ₹3600 ನೀಡುತ್ತಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜೀವನ ಮಾಡುವುದು ಕಷ್ಟವಾಗಿದೆ ಎಂದು ತಮ್ಮ ನೋವು ತೋಡಿಕೊಂಡರು.
ಎಐಟಿಯುಸಿ ರಾಜ್ಯ ಸಂಚಾಲಕ ಸಿ.ವೈ. ಶಿವರುದ್ರಪ್ಪ, ರಾಜ್ಯ ಮಂಡಳಿ ಸದಸ್ಯ ಟಿ.ಆರ್. ಉಮಾಪತಿ, ಸಂಘಟನಾ ಕಾರ್ಯದರ್ಶಿ ಕೆ.ಇ. ಸತ್ಯಕೀರ್ತಿ, ಸುವರ್ಣಮ್ಮ, ದೊಡ್ಡುಳ್ಳಾರ್ತಿ ಕರಿಯಣ್ಣ, ಪರ್ವಿನ್‍ಭಾನು, ಮಂಗಳಮ್ಮ, ಶಾಂತಮ್ಮ, ಗಿರಿಜಮ್ಮ, ತಿಪ್ಪಮ್ಮ, ಓಬಕ್ಕ ಸೇರಿದಂತೆ ಬಿಸಿಯೂಟ ತಯಾರಕರು ಹಾಗೂ ಸಹಾಯಕಿಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.