ಬಳ್ಳಾರಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಸ್ಥಗಿತಗೊಳಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ (ಡಿಎಸ್ಎಸ್)ಯಿಂದ ನಗರದ ಡಿಸಿ ಕಚೇರಿ ಮುಂಭಾಗ ಶುಕ್ರವಾರ ಧರಣಿ ಸತ್ಯಾಗ್ರಹ ನಡೆಸಲಾಯಿತು.
ಎಸ್ಐಆರ್ ಪ್ರಕ್ರಿಯೆಯ ಹೆಸರಿನಲ್ಲಿ ಮತದಾರರ ಹಕ್ಕುಗಳಿಗೆ ಧಕ್ಕೆಯಾಗುವ ಆತಂಕ ಎದುರಾಗಿದೆ.ಅರ್ಹ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡುವ ಪ್ರಯತ್ನ ನಡೆಯುತ್ತಿವೆ. ಎಸ್ಐಆರ್ ಪ್ರಕ್ರಿಯೆಯಲ್ಲಿ ಸಾಕಷ್ಟು ಲೋಪದೋಷಗಳಿವೆ.ಇದನ್ನು ಕೈಬಿಡಬೇಕು ಎಂದು ಕೋರಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿವೆ. ಅರ್ಜಿಗಳ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲಿಯೂ ಪ್ರಕ್ರಿಯೆ ಮುಂದುವರಿಸುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಆಕ್ಷೇಪ ವ್ಯಕ್ತಪಡಿಸಿದರು.
ನೇತೃತ್ವ ವಹಿಸಿದ್ದ ಹಿರಿಯ ದಲಿತ ಮುಖಂಡ ಎ.ಮಾನಯ್ಯ ಮಾತನಾಡಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಕಾರ್ಯವೈಖರಿ ಪಾರದರ್ಶಕವಾಗಿಲ್ಲ. ಅವರು ಪಕ್ಷಪಾತದ ಧೋರಣೆ ಅನುಸರಿಸುತ್ತಿದ್ದಾರೆ. ಹೀಗಾಗಿ ಕೂಡಲೇ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು. ಸಂವಿಧಾನ ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಮತದಾನದ ಹಕ್ಕು ನೀಡಿದೆ. ಮತದಾರರ ಪಟ್ಟಿಯ ಪರಿಷ್ಕರಣೆ ನೆಪದಲ್ಲಿ ಬಡವರು, ದಲಿತರು ಹಾಗೂ ಹಿಂದುಳಿದ ವರ್ಗದ ಜನರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಎಚ್ಚರ ವಹಿಸಬೇಕು. ಚುನಾವಣಾ ಆಯೋಗವು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು. ಮತದಾರರ ಹಕ್ಕುಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಹಾಗೂ ಎಸ್ಐಆರ್ ಪ್ರಕ್ರಿಯೆ ತಕ್ಷಣ ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿದರು.ಸಂಘಟನೆಯ ಪ್ರಮುಖರಾದ ಸಿ.ನರಸಪ್ಪ, ಕೆ.ದೇವದಾಸ್, ಎಚ್.ಆಂಜಿನೇಯ, ಬಿ.ರಮೇಶ್, ದುರ್ಗಾದಾಸ್, ಮಲ್ಲಿಕಾರ್ಜುನ ಕೋಳೂರು, ತಿಪ್ಪಯ್ಯ ಸೋಮಸಮುದ್ರ, ಗಾದಿಲಿಂಗಪ್ಪ ಹರಗಿನಡೋಣಿ, ಎರಿಸ್ವಾಮಿ, ದೊಡ್ಡಬಸಪ್ಪ, ಭೀಮೇಶಿ, ಜಗದೀಶ್, ಹನುಮಂತಪ್ಪ ಎತ್ತಿನಬೂದಿಹಾಳು ಸೇರಿದಂತೆ ಸಂಘದ ಜಿಲ್ಲಾ ಸಮಿತಿ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.