ಕನ್ನಡಪ್ರಭ ವಾರ್ತೆ ಮದ್ದೂರು
ಪಕ್ಷದ ರಾಜ್ಯ ಉಪಾಧ್ಯಕ್ಷ ವೆಂಕಟಗಿರಿಯಯ್ಯ ನೇತೃತ್ವದಲ್ಲಿ ಕಾರ್ಯಕರ್ತರು ಪುರಸಭೆ ಮುಂಭಾಗದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಮೆರವಣಿಗೆ ಮೂಲಕ ಬಂದು ತಾಲೂಕ ಕಚೇರಿಗೆ ಮುತ್ತಿಗೆ ಹಾಕಿ ಧರಣಿ ನಡೆಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ಕಬ್ಬು ಮತ್ತು ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕು. ಕೃಷಿತಜ್ಞ ಡಾ.ಸ್ವಾಮಿನಾಥನ್ ವರದಿಯಂತೆ ಪ್ರತಿ ಟನ್ ಕಬ್ಬಿಗೆ 5 ಸಾವಿರ ಮತ್ತು ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ಘೋಷಣೆ ಮಾಡುವಂತೆ ಒತ್ತಾಯಿಸಿದರು.ರಾಜ್ಯದ ಪ್ರಮುಖ ವಾಣಿಜ್ಯ ಬೆಳೆಯಾದ ಕಬ್ಬಿಗೆ 9.5ರ ಇಳುವರಿ ಪ್ರಮಾಣದ ಆಧಾರದ ಮೇಲೆ 5 ಸಾವಿರ ಬೆಲೆ ನಿಗದಿ ಮಾಡದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಕ್ಕರೆ ಕಾರ್ಖಾನೆ ಮಾಲೀಕರ ಪರವಾಗಿ ರೈತರಿಗೆ ವಂಚನೆ ಮಾಡುತ್ತಿವೆ ಎಂದು ದೂರಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇನ್ನಾದರೂ ಎಚ್ಚೆತ್ತುಕೊಂಡು ಪ್ರತಿ ಟನ್ ಕಬ್ಬಿಗೆ ವೈಜ್ಞಾನಿಕವಾಗಿ 9.5ರ ಇಳುವರಿಗೆ ನಿಗದಿ ಮಾಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರ ಗೊಳಿಸುವುದಾಗಿ ಎಚ್ಚರಿಸಿದರು.