ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಸೇರಿದ ಕಾರ್ಯಕರ್ತರು ಜನಿವಾರ ಹಿಡಿದು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಕಚೇರಿ ಸಹಾಯಕ ಸೋಮಶೇಖರ್ ಅವರಿಗೆ ಮನವಿ ಸಲ್ಲಿಸಿದರು.
ಕೃಪಾನಿಧಿ ಕಾಲೇಜಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯ ಸಂದರ್ಭದಲ್ಲಿ ಕೆಲವು ವಿದ್ಯಾರ್ಥಿಗಳು ಧರಿಸಿದ್ದ ಜನಿವಾರವನ್ನು ಬಲವಂತವಾಗಿ ತೆಗೆಸಲಾಗಿದ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಬ್ರಾಹ್ಮಣ ಸಮುದಾಯದ ಧಾರ್ಮಿಕ ಭಾವನೆಗೆ ತೀವ್ರ ಧಕ್ಕೆ ಉಂಟಾಗಿದೆ ಎಂದು ದೂರಿದರು.ಜನಿವಾರ ಎಂಬುದು ಬ್ರಾಹ್ಮಣ ಸಮುದಾಯದವರಿಗೆ ಕೇವಲ ದಾರವಲ್ಲ. ಅದು ಧಾರ್ಮಿಕ ನಂಬಿಕೆ, ಸಂಸ್ಕೃತಿ, ಸಂಪ್ರದಾಯ, ಆಚರಣೆ ಹಾಗೂ ಆತ್ಮಗೌರವದ ಪ್ರತೀಕವಾಗಿದೆ. ಇಂತಹ ಧಾರ್ಮಿಕ ಗುರುತನ್ನು ಬಲವಂತವಾಗಿ ತೆಗೆಸುವುದು ಭಾರತದ ಸಂವಿಧಾನ ನೀಡಿರುವ ಧಾರ್ಮಿಕ ಸ್ವಾತಂತ್ರ್ಯ, ವೈಯಕ್ತಿಕ ಗೌರವ ಹಾಗೂ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದರು.
ಘಟನೆಯ ಹೊಣೆಗಾರಿಕೆಗೆ ಸಂಬಂಧಿಸಿದ ಕಾಲೇಜಿನ ಪ್ರಾಂಶುಪಾಲರು, ಪರೀಕ್ಷಾ ಮೇಲ್ವಿಚಾರಕರು, ಭದ್ರತಾ ಸಿಬ್ಬಂದಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನು ತಕ್ಷಣ ಅಮಾನತ್ತು ಮಾಡಬೇಕು. ನ್ಯಾಯಸಮ್ಮತ, ಪಾರದರ್ಶಕ ಹಾಗೂ ನಿಷ್ಪಕ್ಷಪಾತ ತನಿಖೆಗಾಗಿ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ಎಸ್‌ಐಟಿ ರಚಿಸಬೇಕು. ತಪ್ಪಿತಸ್ಥ ಸಿಬ್ಬಂದಿ ಹಾಗೂ ಸಂಬಂಧಪಟ್ಟವರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು. ಪರೀಕ್ಷೆ ಬರೆಯಲು ತೊಂದರೆ ಅನುಭವಿಸಿದ ವಿದ್ಯಾರ್ಥಿಗಳಿಗೆ ವಿಶೇಷ ಪರಿಹಾರ ಕ್ರಮ ಒದಗಿಸಬೇಕು ಎಂದು ಆಗ್ರಹಿಸಿದರು.
ಬ್ರಾಹ್ಮಣ ಮಹಾಸಂಘದ ಜಿಲ್ಲಾಧ್ಯಕ್ಷ ಶ್ರೀಪತಿ ಭಾರದ್ವಾಜ್, ಉಪಾಧ್ಯಕ್ಷೆ ಎಸ್.ಜಿ. ಭಾರತೀಬಾಬು, ಕಾರ್ಯದರ್ಶಿ ನಾಗಸುಂದರ್, ಮಹಿಳಾ ಘಟಕದ ಅಧ್ಯಕ್ಷ ಮಮತಾ, ಕಾರ್ಯದರ್ಶಿ ವೀಣಾ, ಮುಖಂಡರಾದ ಶಶಿಕುಮಾರ್, ಚೇತಕ್, ಬಾಲಾಜಿ ಕೆ.ಆರ್., ಮಂಜುನಾಥ್, ಹರ್ಷ, ಉಷಾ, ನಾಗರಾಜು, ಪ್ರಕಾಶ್‌ಮೂರ್ತಿ, ಗೋಪಿನಾಥ್, ಸಂತೋಷ್ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.