ಹಾವೇರಿ: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಪ್ರತ್ಯೇಕ ಡಿಸಿಸಿ ಬ್ಯಾಂಕ್ ರಚನೆಯ ಬೇಡಿಕೆಗಳಿಗೆ ಬಜೆಟ್‌ನಲ್ಲಿ ಸ್ಪಂದನೆ ವ್ಯಕ್ತವಾಗಿದ್ದು, ಈ ಬೇಡಿಕೆಗಳು ಈಡೇರಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಆಶಯ ವ್ಯಕ್ತಪಡಿಸಿದ್ದಾರೆ.2026-27ನೇ ಸಾಲಿನಲ್ಲಿ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣ ಕಾಮಗಾರಿಗಳಿಗೆ 620 ಕೋಟಿ ರು. ಹಾಗೂ ಉಪಕರಣಗಳ ಖರೀದಿಗೆ 220 ಕೋಟಿ ರು. ಅನುದಾನ ಮೀಸಲಿಡಲಾಗಿದೆ. ಹಾವೇರಿ ವೈದ್ಯಕೀಯ ಕಾಲೇಜು ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಭರವಸೆ ನೀಡಿದ್ದು, ಈ ಉದ್ದೇಶದ ಯೋಜನೆಗಳಿಗೆ ಬಜೆಟ್‌ನಲ್ಲಿ ಅನುದಾನ ತೆಗೆದಿರಿಸಿದ್ದಾರೆ. ಹೀಗಾಗಿ ಹಾವೇರಿಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕನಸು ನನಸಾಗುವ ನಿರೀಕ್ಷೆ ಇದೆ. ಧಾರವಾಡ ಡಿಸಿಸಿ ಬ್ಯಾಂಕ್ ವಿಭಜನೆ ಮಾಡಿ ಹಾವೇರಿಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ್ ರಚನೆ ಮಾಡಬೇಕು ಎಂಬುದು ಜಿಲ್ಲೆಯ ರೈತರ ಬೇಡಿಕೆಯಾಗಿದ್ದು, ಪ್ರತಿ ಜಿಲ್ಲೆಯಲ್ಲಿ ಜಿಲ್ಲಾ ಸಹಕಾರಿ ಬ್ಯಾಂಕ್ ಸ್ಥಾಪನೆಗೆ ಆರ್‌ಬಿಐಗೆ ಪ್ರಸ್ತಾವನೆ ಸಲ್ಲಿಸುವುದಾಗಿ ಬಜೆಟ್‌ನಲ್ಲಿ ಪ್ರಕಟಿಸಲಾಗಿದೆ. ಹೀಗಾಗಿ ಈ ಬೇಡಿಕೆ ಕೂಡ ಈಡೇರುವ ವಿಶ್ವಾಸ ಇದೆ ಎಂದು ತಿಳಿಸಿದ್ದಾರೆ.ಜಿಲ್ಲೆಯಲ್ಲಿ ಕಳಪೆ ಬೀಜ, ಕೀಟನಾಶಕ ಹಾವಳಿ ತೀವ್ರವಾಗಿದ್ದು, ಈ ಕಾರಣದಿಂದ ಬೆಳೆ ಹಾನಿಗೀಡಾಗಿ ರೈತರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಕಳಪೆ ಬೀಜ, ಕಳಪೆ ಕೀಟನಾಶಕ ಮಾರಾಟ ತಡೆ ಹಾಗೂ ಅಧಿಕ ಬೆಲೆಗೆ ಕೃಷಿ ಪರಿಕರ ಮಾರಾಟಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧ್ಯಯನ ಮಾಡಿ ಶಿಫಾರಸ್ಸು ಸಲ್ಲಿಸಲು ರಾಜ್ಯಮಟ್ಟದ ಸಲಹಾ ಸಮಿತಿ ರಚನೆ ಘೋಷಣೆ ಮಾಡಲಾಗಿದೆ. ಜಿಲ್ಲೆಯ ರೈತರ ಹಿತರಕ್ಷಣೆಯ ದೃಷ್ಟಿಯಿಂದ ಈ ಘೋಷಣೆ ಆಶಾದಾಯಕವಾಗಿದ್ದು, ಕಳಪೆ ಬೀಜ ಮತ್ತು ಕೀಟನಾಶಕ ಮಾರಾಟದ ಜಾಲವನ್ನು ಕೊನೆಗಾಣಿಸಬಹುದಾಗಿದೆ. ಹಾವೇರಿಗೆ ಸಿಲ್ಕ್ ಪಾರ್ಕ್ ಘೋಷಣೆ ಮಾಡಿರುವುದು ರೇಷ್ಮೆ ಬೆಳೆಗಾರರಿಗೆ ಅನುಕೂಲವಾಗಲಿದೆ. ಹಾವೇರಿ ಜಿಲ್ಲೆಯ ತಿಳವಳ್ಳಿಗೆ ನೂತನ ಪೊಲೀಸ್ ಠಾಣೆ ಹಾಗೂ ಸವಣೂರಿನಲ್ಲಿ ಮಹಿಳಾ ಪಿಯು ಕಾಲೇಜು ಆರಂಭಿಸಬೇಕು ಎಂಬ ಬೇಡಿಕೆಗೂ ಸ್ಪಂದನೆ ಸಿಕ್ಕಿದೆ. ಜಿಲ್ಲೆಯ ರೈತರ ಸಮಸ್ಯೆಗಳ ಪರಿಹಾರಕ್ಕೆ ಪೂರಕವಾದ ಹಲವು ಯೋಜನೆಗಳನ್ನು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದ್ದು, ಬಿತ್ತನೆಯಿಂದ ಮಾರಾಟದವರೆಗೆ ರೈತರಿಗೆ ಸಮಗ್ರ ಬೆಂಬಲ ನೀಡುವ ನಾಲ್ಕು ಆಧಾರ ಸ್ತಂಭಗಳ ಮೇಲೆ ಕೃಷಿ ಅಭಿವೃದ್ಧಿ ತಂತ್ರ ರೂಪಿಸಲಾಗಿದೆ. ಬ್ಯಾಡಗಿ ತಾಲೂಕಿನ ಗುಡ್ಡದ ಮಲ್ಲಾಪುರ ಏತ ನೀರಾವರಿ ಯೋಜನೆ, ರಟ್ಟಿಹಳ್ಳಿ ತಾಲೂಕಿನ ಮದಗ - ಮಾಸೂರು ಕೆರೆ ಆಧುನೀಕರಣ ಯೋಜನೆಗಳಿಗೆ ಈಗಾಗಲೇ ಅನುಮೋದನೆ ದೊರೆತಿದೆ. ರಟ್ಟಿಹಳ್ಳಿ ಮತ್ತು ಶಿಗ್ಗಾಂವಿ ತಾಲೂಕುಗಳಲ್ಲಿ ಚೆಕ್ ಡ್ಯಾಮ್‌ಗಳ ನಿರ್ಮಾಣಕ್ಕೂ ಅನುಮೋದನೆ ಸಿಕ್ಕಿದೆ ಎಂದು ತಿಳಿಸಿದ್ದಾರೆ.