ಉದ್ಯೋಗಾಕಾಂಕ್ಷಿಗಳ ವಿವಿಧ ಬೇಡಿಕೆಗಳಿಗೆ ಆಗ್ರಹ

KannadaprabhaNewsNetwork |  
Published : Mar 24, 2026, 02:45 AM IST
ಉದ್ಯೋಗಾಕಾಂಕ್ಷಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸಲು ಯುವ ಅಧಿವೇಶನದ ಮೂಲಕ ಆಗ್ರಹ | Kannada Prabha

ಸಾರಾಂಶ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳನ್ನು ಭರ್ತಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಜನಸಾಮಾನ್ಯರ ಬೇಡಿಕೆ ಹಾಗೂ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಯುವ ಅಧಿವೇಶನ ಹಮ್ಮಿಕೊಳ್ಳಲಾಯಿತು.

ಕನ್ನಡಪ್ರಭ ವಾರ್ತೆ ವಿಜಯಪುರ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳನ್ನು ಭರ್ತಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಜನಸಾಮಾನ್ಯರ ಬೇಡಿಕೆ ಹಾಗೂ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಯುವ ಅಧಿವೇಶನ ಹಮ್ಮಿಕೊಳ್ಳಲಾಗಿತ್ತು.

ಯುವ ಅಧಿವೇಶನದಲ್ಲಿ ಉದ್ಯೋಗಾಕಾಂಕ್ಷಿ ಯುವಜನರ ಹಲವಾರು ಸಮಸ್ಯೆಗಳ ಕುರಿತು ಚರ್ಚಿಸಿ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಅದರಂತೆ, ಅಪರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ, ವಿವಿಧ ಹಕ್ಕೊತ್ತಾಯಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಲೇ ಬಗೆಹರಿಸಬೇಕು ಎಂದು ವಿಜಯಪುರದಲ್ಲಿ ನಡೆದ ಯುವ ಅಧಿವೇಶನದ ಮೂಲಕ ಆಗ್ರಹಿಸಲಾಯಿತು.

ರಾಜ್ಯ ಸಚಿವ ಸಂಪುಟದಲ್ಲಿ ಘೋಷಿಸಿದಂತೆ 56,432 ಹುದ್ದೆಗಳಿಗೆ ಕೂಡಲೇ ನೇಮಕಾತಿ ಅಧಿಸೂಚನೆ ಹೊರಡಿಸಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು, ಎಫ್‌ಆರ್‌ಬಿಎಂ ಕಾಯ್ದೆಯನ್ನು ರದ್ದುಗೊಳಿಸಬೇಕು, ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿಯಲ್ಲಿ ವಯೋಮಿತಿಯನ್ನು ಎಸ್ಸಿ, ಎಸ್ಟಿ ಹಾಗೂ ಒಬಿಸಿಗೆ 33 ಹಾಗೂ ಸಾಮಾನ್ಯ ವರ್ಗಕ್ಕೆ 30 ವರ್ಷಗಳಿಗೆ ಹೆಚ್ಚಿಸಿ ಯಾವುದೇ ನೆಪಗಳನ್ನು ಕೊಡದೇ ಶೀಘ್ರವೇ ನೇಮಕಾತಿ ಅಧಿಸೂಚನೆ ಹೊರಡಿಸಬೇಕು, ಒಳ ಮೀಸಲಾತಿ, ಮೀಸಲಾತಿ ಗೊಂದಲಗಳನ್ನು ಕೂಡಲೇ ಪರಿಹರಿಸಿ ಅಧಿಸೂಚನೆಗಳನ್ನು ಹೊರಡಿಸಬೇಕು, ಎಲ್ಲ ನೇಮಕಾತಿಗಳಲ್ಲಿ ದುಬಾರಿ ಅರ್ಜಿ ಶುಲ್ಕವನ್ನು ಕೈಬಿಡಬೇಕು ಹಾಗೂ ಪರೀಕ್ಷಾರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು, ರಾಜ್ಯದಲ್ಲಿ ಎಲ್ಲ ನೇಮಕಾತಿ ಪ್ರಾಧಿಕಾರಗಳು ಪ್ರತಿ ವರ್ಷ ನೇಮಕಾತಿ ಪ್ರಕ್ರಿಯೆಯ ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ ಮಾಡಬೇಕು, ಎಲ್ಲ ನೇಮಕಾತಿ ಪ್ರಕ್ರಿಯೆಗಳಲ್ಲಿ ಸಂಪೂರ್ಣ ಪಾರದರ್ಶಕತೆ ಇರಬೇಕು, ಎಲ್ಲ ರೀತಿಯ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಬೇಕು, ಯುಪಿಎಸ್‌ಸಿ, ಸಿಎಸ್‌ಇ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲಿಯೂ ನಡೆಸಬೇಕು ಎಂದು ಆಗ್ರಹಿಸಿದರು.ಉದ್ಯೋಗಾಕಾಂಕ್ಷಿಗಳ ರಾಜ್ಯ ಸಂಚಾಲಕ ಸಿದ್ದಲಿಂಗ ಬಾಗೇವಾಡಿ ಯುವ ಅಧಿವೇಶನದ ಅಧ್ಯಕ್ಷತೆ ವಹಿಸಿ ಮಾತನಾಡಿ, ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದವರು ವರ್ಷಕ್ಕೆ 1 ಲಕ್ಷ ಉದ್ಯೋಗ ಹಾಗೂ ಬಿಜೆಪಿಯವರು ಕೇಂದ್ರದಲ್ಲಿ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದರು. ಆದರೆ, ಈಗ ಖಾಲಿ ಇರುವ ಹುದ್ದೆಗಳನ್ನು ಸಹ ತುಂಬುತ್ತಿಲ್ಲ. ಬದಲಾಗಿ ಉದ್ಯೋಗಗಳನ್ನು ನಾಶಮಾಡಲಾಗುತ್ತಿದೆ. ಆದ್ದರಿಂದ ಅಧಿಕಾರಕ್ಕೆ ಬಂದ ನಂತರ ಬಂಡವಾಳಶಾಹಿಗಳ ಸೇವೆ ಮಾಡುವ ಉದ್ದೇಶದಿಂದ ಖಾಸಗೀಕರಣ ನೀತಿಯನ್ನು ಅನುಸರಿಸುವ ಸರ್ಕಾರಗಳ ವಿರುದ್ಧ ಯುವಜನರು ಸಂಘಟಿತ ಹೋರಾಟಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು. ಜನ ಸಾಮಾನ್ಯರ ವೇದಿಕೆ ಹನಮಂತ ಯಮಗಾರ ಮಾತನಾಡಿ, ನಿರುದ್ಯೋಗವು ಇಂದಿನ ಪ್ರಮುಖ ಸಮಸ್ಯೆಯಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಲೇ ನಮ್ಮ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು. ಎಲ್ಲ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.

ಉದ್ಯೋಗಾಕಾಂಕ್ಷಿಗಳಾದ ಮೇಘಾ, ವಿದ್ಯಾ, ಐಶ್ವರ್ಯ, ಪವಿತ್ರಾ, ಸಂತೋಷ ಮಮದಾಪೂರ, ಸಚಹಿನ ಕಾಂಬ್ಳೆ, ಆಕಾಶ ಕೊಣ್ಣೂರ, ಸಾಗರ ಜಾದವ, ಯುವರಾಜ ಪವಾರ, ಪ್ರವೀಣ, ದುಂಡೇಶ ಬಿಸನಾಳ, ಅರುಣ ಕರಜಣಗಿ ಅವರು ಯುವ ಅಧಿವೇಶನದಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆತಂಕವಿಲ್ಲದೆ ಪರೀಕ್ಷೆ ಬರೆಯಲು ಸೂಕ್ತ ವಾತಾವರಣ ಕಲ್ಪಿಸಿ
ಬಿಜೆಪಿ ಅಪಪ್ರಚಾರಕ್ಕೆ ಜನರು ಮಣೆ ಹಾಕಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ