-ರಾಜ್ಯ ರೈತ ಸಂಘದ ಮಹಿಳಾ ಘಟಕದಿಂದ ಪ್ರತಿಭಟನೆ -ಖಾಲಿ ಕೊಡ ಪ್ರದರ್ಶನ -ತಹಸೀಲ್ದಾರರಿಗೆ ಮನವಿ ಕನ್ನಡಪ್ರಭ ವಾರ್ತೆ ಚನ್ನಪಟ್ಟಣ ರಾಜ್ಯದಲ್ಲಿ ಬರದ ಪರಿಸ್ಥಿತಿ ನಿರ್ಮಾಣವಾಗಿದ್ದು, ಕುಡಿಯುವ ನೀರಿನ ಅಭಾವದ ನಡುವೆಯೂ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಮಹಿಳಾ ಘಟಕದಿಂದ ಖಾಲಿಕೊಂಡ ಪ್ರದರ್ಶನ ಹಾಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಗುರುವಾರ ನಗರದ ಗಾಂಧಿ ಭವನದಲ್ಲಿ ಜಮಾವಣೆಗೊಂಡ ರೈತ ಸಂಘದ ಮಹಿಳಾ ಘಟಕದ ಪದಾಧಿಕಾರಿಗಳು ಮತ್ತು ಕಾರ್ಯಕರ್ತೆಯರು ಅಲ್ಲಿಂದ ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ಮೆರವಣಿಗೆ ನಡೆಸಿ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ರಸ್ತೆಯುದ್ದಕ್ಕೂ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮಳೆಯ ಅಭಾವದಿಂದ ರಾಜ್ಯದಲ್ಲಿ ಬರ ಆವರಿಸಿದೆ. ಕಾವೇರಿ ಒಡಲು ಬರಿದಾಗಿದ್ದು, ಅಣೆಕಟ್ಟುಗಳಲ್ಲಿ ನೀರು ಖಾಲಿಯಾಗಿದೆ. ಕಾವೇರಿ ಜಲಾನಯನ ಜಿಲ್ಲೆಗಳಲ್ಲಿ ಕುಡಿಯುವ ನೀರಿಗೂ ತತ್ವಾರ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡುವ ಆತಂಕವಿದೆ. ಇಂತಹ ಹೊತ್ತಿನಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಆದೇಶ ತಿರಸ್ಕರಿಸಿ: ನಮಗೆ ಕುಡಿಯಲು ನೀರಿಲ್ಲದ ಪರಿಸ್ಥಿತಿಯಲ್ಲಿ ತಮಿಳುನಾಡಿನ ಕೃಷಿ ಚಟುವಟಿಕೆಗೆ ನೀರು ಹರಿಸುವುದು ಸರಿಯಲ್ಲ. ಈ ಹಿನ್ನೆಲೆಯಲ್ಲಿ ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶ ಹಾಗೂ ಸುಪ್ರೀಂಕೋರ್ಟ್ ಆದೇಶವನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು. ರಾಜ್ಯದ ಜನರ ಹಿತ ಕಡೆಗಣಿಸಿ ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಹರಿಸಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಲಿ: ಕಾವೇರಿ ನೀರು ವಿಚಾರದಲ್ಲಿ ಸಮಿತಿ ಹಾಗೂ ಪ್ರಾಧಿಕಾರದ ಎದುರು ರಾಜ್ಯಸರ್ಕಾರ ಸಮರ್ಥವಾಗಿ ವಾದ ಮಂಡಿ ವಾಸ್ತವಾಂಶ ಮನವರಿಕೆ ಮಾಡಿಕೊಡುವಲ್ಲಿ ವಿಫಲವಾಗಿದೆ. ಈಗಲಾದರೂ ಬರ ಅದ್ಯಯನ ಸಮಿತಿ, ಕಾವೇರಿ ಅಧ್ಯಯನ ಸಮಿತಿ ಹಾಗೂ ತಜ್ಞರ ಸಮಿತಿ ಕೂಡಲೇ ಪ್ರಾಧಿಕಾರಕ್ಕೆ ಹಾಗೂ ಕೇಂದ್ರಕ್ಕೆ ರಾಜ್ಯದ ವಾಸ್ತವ ಸ್ಥಿತಿ ಮನವರಿಕೆ ಮಾಡಿಕೊಡಬೇಕು. ಸದ್ಯದ ಪರಿಸ್ಥಿತಿಯಲ್ಲಿ ಸಂಕಷ್ಟ ಸಮಯದ ಸೂತ್ರ ಅನುಸರಿಸಲು ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಿ, ಎರಡು ರಾಜ್ಯಗಳ ನೀರಿನ ಸಮಸ್ಯೆ ಬಗೆಹರಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು. ಮದ್ಯದಂಗಡಿ ತೆರೆಯುವ ಕ್ರಮ ಖಂಡನೀಯ: ಗ್ರಾಮ ಪಂಚಾಯಿತಿ, ಸೂಪರ್ ಮಾರ್ಕೆಟ್ ಸೇರಿದಂತೆ ಹಲವು ಕಡೆ ನೂತನ ಮದ್ಯದ ಅಂಗಡಿಗಳನ್ನು ತೆರೆಯಲು ಪರವಾನಗಿ ನೀಡುವ ರಾಜ್ಯ ಸರ್ಕಾರದ ಕ್ರಮ ಖಂಡನೀಯ. ಈ ಕೂಡಲೇ ರಾಜ್ಯ ಸರ್ಕಾರ ತನ್ನ ಈ ಪ್ರಸ್ತಾವವನ್ನು ಕೈಬಿಡಬೇಕು. ಅಕ್ರಮ ಮದ್ಯ ಮಾರಾಟ ತಡೆಯುವ ಜತೆಗೆ ಗ್ರಾಮಗಳನ್ನು ಮದ್ಯಮುಕ್ತವಾಗಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ತಹಸೀಲ್ದಾರ್ ಮಹೇಂದ್ರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಮಂಡ್ಯ ಜಿಲ್ಲಾಧ್ಯಕ್ಷ ಬೋರಾಪುರ ಶಂಕರೇಗೌಡ, ಮದ್ದೂರು ತಾಲೂಕು ಕಾರ್ಯದರ್ಶಿ ಡಿ.ಕೆ.ಚಂದ್ರು, ರೈತಸಂಘದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಬೈರಾಪಟ್ಟಣ ಶೋಭಾ, ತಾಲೂಕು ಅಧ್ಯಕ್ಷೆ ಬಿ.ಕೆ.ಶ್ವೇತಾ, ಪ್ರಧಾನ ಕಾರ್ಯದರ್ಶಿ ಚಕ್ಕಲೂರು ಅನಿತಾ, ಉಪಾಧ್ಯಕ್ಷರಾದ ಚಿಕ್ಕತಾಯಮ್ಮ, ಹರೂರು ರೂಪ, ನಾಗವೇಣಿ, ಗೌರವಾಧ್ಯಕ್ಷೆ ಬೈರಾಪಟ್ಟಣ ಸಾವಿತ್ರಮ್ಮ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಪೊಟೋ೫ಸಿಪಿಟಿ೩: ಚನ್ನಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ರಾಜ್ಯ ರೈತ ಸಂಘದ ತಾಲೂಕು ಮಹಿಳಾ ಘಟಕದಿಂದ ಖಾಲಿ ಕೊಡ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಪೊಟೋ೫ಸಿಪಿಟಿ೪: ಚನ್ನಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ರಾಜ್ಯ ರೈತಸಂಘದ ತಾಲೂಕು ಮಹಿಳಾ ಘಟಕ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.