ರೈತರ ಪ್ರತಿಭಟನೆ । ದೆಹಲಿ ರೈತ ಹೋರಾಟಕ್ಕೆ ಬೆಂಬಲ । ಎಡಿಸಿ ಗೀತಾ ಹುಡೇದ ಮೂಲಕ ಸಂಸದ ಸುನೀಲ್ ಬೋಸ್‌ಗೆ ಮನವಿ ಸಲ್ಲಿಕೆ । ಪ್ರತಿಭಟನಾ ಮೆರವಣಿಗೆ
ಪ್ರಸಕ್ತ ಸಂಸತ್, ಬೆಳಗಾವಿ ಅಧಿವೇಶನದಲ್ಲಿ ರೈತರ ಸಮಸ್ಯೆಗಳನ್ನು ಚರ್ಚಿಸಿ ನಿರ್ಲಕ್ಷ್ಯ ಮಾಡಬೇಡಿ ಎಂದು ಇಲ್ಲಿಯ ರೈತರು ನಗರದಲ್ಲಿ ಸೋಮವಾರ ದೆಹಲಿ ರೈತ ಹೋರಾಟ ಬೆಂಬಲಿಸಿ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಸಿ) ಗೀತಾ ಹುಡೇದ ಅವರ ಮೂಲಕ ಸಂಸದ ಸುನೀಲ್ ಬೋಸ್ ಅವರಿಗೆ ಮನವಿ ಸಲ್ಲಿಸಿದರು.
ನಗರದ ಜಿಲ್ಲಾಡಳಿತ ಭವನದ ಪ್ರವೇಶದ್ವಾರದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಜಿಲ್ಲಾಡಳಿತ ಭವನದ ಆವರಣದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಅಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಮೂಲಕ ಸಂಸದ ಸುನೀಲ್ ಬೋಸ್ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘಟನೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಮೂಕಹಳ್ಳಿ ಮಹದೇವಸ್ವಾಮಿ, ಜಿಲ್ಲಾ ರೈತ ಸಂಘದ ಅಧ್ಯಕ್ಷ ಹೊನ್ನೂರು ಪ್ರಕಾಶ್, ದೇಶದ ರೈತರ ಒಳಿತಿಗಾಗಿ ಹೋರಾಟ ನಡೆಸುತ್ತಿರುವ ದಹಲಿ ರೈತ ಹೋರಾಟದ ಮುಖಂಡ ಜಗಜಿತ್ ಸಿಂಗ್ ದಲೈವಾಲ ಉಪವಾಸ ಸತ್ಯಾಗ್ರಹ ೧೪ನೇ ದಿನಕ್ಕೆ ಮುಂದುವರಿದಿದೆ. ಆರೋಗ್ಯ ಸ್ಥಿತಿ ಹದಗೆಟ್ಟಿದೆ ಎಂದು ಹೇಳಿದರು.
ಇಂಥ ದಬ್ಬಾಳಿಕೆ ನಡೆದರೂ ಸಂಸತ್ ಅಧಿವೇಶನದಲ್ಲಿ ಚರ್ಚಿಸದೆ ಇರುವುದು ನಮಗೆ ನೋವಿನ ಸಂಗತಿಯಾಗಿದೆ. ನಮ್ಮ ಪ್ರತಿನಿಧಿಯಾಗಿ ನೀವು ಏಕೆ ಧ್ವನಿ ಎತ್ತುತ್ತಿಲ್ಲ ಎಂದು ಸಂಸದರನ್ನು ಪ್ರಶ್ನಿಸಿದರು.
ಎಲ್ಲಾ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೆ ತರಬೇಕು, ಡಾ ಸ್ವಾಮಿನಾಥನ್ ವರದಿಯಂತೆ ಕನಿಷ್ಠ ಬೆಂಬಲ ಬೆಲೆ ನಿಗದಿಯಾಗಬೇಕು. ರೈತರ ಸಾಲ ಸಂಪೂರ್ಣ ಮನ್ನಾ ಆಗಬೇಕು. ೬೦ ವರ್ಷ ತುಂಬಿದ ರೈತರಿಗೆ ಪಿಂಚಣಿ ಯೋಜನೆ ಜಾರಿಗೆ ಬರಬೇಕು. ರೈತರಿಗಾಗಿ ಹೋರಾಟ ಮಾಡಿದ ರೈತರ ಮೇಲೆ ಇರುವ ಎಲ್ಲಾ ಪ್ರಕರಣಗಳನ್ನು ಕೇಂದ್ರ, ರಾಜ್ಯ ಸರ್ಕಾರಗಳು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.