ಕನ್ನಡಪ್ರಭ ವಾರ್ತೆ ಶಿವಮೊಗ್ಗ
ವಿಶ್ವವಿದ್ಯಾಲಯ ಆವರಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು, ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳು ಅತ್ಯಂತ ತಾಂತ್ರಿಕ ಸ್ವರೂಪದ್ದಾಗಿದ್ದು, ರೈತರಿಗೆ ವೈಜ್ಞಾನಿಕ ಕೃಷಿ ಸಲಹೆ, ಬೆಳೆ ನಿರ್ವಹಣೆ, ಮಣ್ಣಿನ ಆರೋಗ್ಯ ಕಾಪಾಡುವುದು, ಕೀಟ ಹಾಗೂ ರೋಗ ನಿಯಂತ್ರಣ, ರಸಗೊಬ್ಬರ ಮತ್ತು ಬೀಜಗಳ ಗುಣಮಟ್ಟದ ಮೇಲ್ವಿಚಾರಣೆ ಸೇರಿದಂತೆ ಮಹತ್ವದ ಜವಾಬ್ದಾರಿಗಳನ್ನು ಹೊಂದಿವೆ. ಆದ್ದರಿಂದ ಐಸಿಎಆರ್ ಮಾನ್ಯತೆ ಪಡೆದ ಕೃಷಿ ಹಾಗೂ ಕೃಷಿ ಸಂಬಂಧಿತ ಪದವೀಧರರಿಗೆ ಮಾತ್ರ ಈ ಹುದ್ದೆಗಳಲ್ಲಿ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.ಈ ಕುರಿತು ಹಲವು ಬಾರಿ ಸರ್ಕಾರ ಹಾಗೂ ಸಂಬಂಧಿತ ಇಲಾಖೆಗೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅನಿರ್ದಿಷ್ಟ ಹೋರಾಟ ಆರಂಭಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿದ್ಯಾರ್ಥಿಗಳು ತಿಳಿಸಿದರು.
ರಾಜ್ಯ ಸರ್ಕಾರ ಹಾಗೂ ಸಂಬಂಧಿತ ಇಲಾಖೆಗಳು ತಕ್ಷಣ ಮಧ್ಯಪ್ರವೇಶಿಸಿ, ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವ ಮೂಲಕ ಕೃಷಿ ವಿದ್ಯಾರ್ಥಿಗಳು ಹಾಗೂ ರೈತ ಸಮುದಾಯದಲ್ಲಿರುವ ಆತಂಕವನ್ನು ನಿವಾರಿಸಬೇಕು ಎಂದು ಒತ್ತಾಯಿಸಿದರು.
---------------------