ಬಳ್ಳಾರಿ: ಹವಾಮಾನ ವೈಪರೀತ್ಯ ಹಾಗೂ ಮುಂಗಾರು ಮಳೆಯ ತೀವ್ರ ಕೊರತೆಯಿಂದ ಜಿಲ್ಲೆಯ ರೈತರು ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರಾಜ್ಯ ಸರ್ಕಾರ ಕೂಡಲೇ ಬರಗಾಲ ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ವಿತರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಅವರಿಗೆ ಮನವಿ ಸಲ್ಲಿಸಿದರು.ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಬಿ.ವಿ. ಗೌಡ ಮಾತನಾಡಿ, ಈ ವರ್ಷ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ ಕಾರಣ ತುಂಗಭದ್ರಾ ಜಲಾಶಯ ಹಾಗೂ ಜಿಲ್ಲೆಯ ಬಹುತೇಕ ಕೆರೆ, ಕಟ್ಟೆಗಳು ಭರ್ತಿಯಾಗಿಲ್ಲ. ಇದರಿಂದ ರೈತರು ಬಿತ್ತನೆ ಕಾರ್ಯ ನಡೆಸಲು ಸಾಧ್ಯವಾಗದೇ ತೀವ್ರ ಆತಂಕದಲ್ಲಿದ್ದಾರೆ. ಮಳೆ ಆಧಾರಿತ ಕೃಷಿಯನ್ನು ಅವಲಂಬಿಸಿರುವ ಸಾವಿರಾರು ರೈತ ಕುಟುಂಬಗಳ ಬದುಕು ಅತಂತ್ರವಾಗಿದ್ದು, ಸರ್ಕಾರ ತಕ್ಷಣವೇ ರೈತರ ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದರು.
ಬಿತ್ತನೆಗೆ ಮಾಡಿದ ವೆಚ್ಚವೂ ಕೈಗೆ ಸಿಗದ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಸಾಲದ ಹೊರೆ ಹೆಚ್ಚಿಸಿಕೊಂಡಿದ್ದಾರೆ. ಬೆಳೆ ಬೆಳೆಯಲು ಸಾಧ್ಯವಾಗದ ಕಾರಣ ಕುಟುಂಬ ನಿರ್ವಹಣೆಯೂ ಕಷ್ಟಕರವಾಗಿದೆ. ಆದ್ದರಿಂದ ಸರ್ಕಾರ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ಪ್ರತಿ ಎಕರೆಗೆ ₹50 ಸಾವಿರ ಬರಪರಿಹಾರ ಘೋಷಿಸಬೇಕು. ಅಲ್ಲದೆ ಬೆಳೆ ಸಾಲ ಮರುಪಾವತಿಗೆ ಕಾಲಾವಕಾಶ ನೀಡುವುದು, ಬಡ್ಡಿ ಮನ್ನಾ ಮಾಡುವುದು ಹಾಗೂ ರೈತರಿಗೆ ಅಗತ್ಯ ನೆರವು ಒದಗಿಸುವಂತೆ ಒತ್ತಾಯಿಸಿದರು.
ಕುಡಿಯುವ ನೀರಿನ ಸಮಸ್ಯೆಯೂ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಜನರು ಹಾಗೂ ಜಾನುವಾರುಗಳು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ತುಂಗಭದ್ರಾ ಜಲಾಶಯದಲ್ಲಿರುವ ಲಭ್ಯ ನೀರನ್ನು ಕೂಡಲೇ ನದಿಗೆ ಹರಿಸಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಬೇಕು. ಜೊತೆಗೆ ಜಾನುವಾರುಗಳಿಗೆ ಮೇವು ಹಾಗೂ ನೀರಿನ ವ್ಯವಸ್ಥೆ ಕಲ್ಪಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.ಈ ಸಂದರ್ಭದಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ವಿ. ವೀರೇಶ್, ಪದಾಧಿಕಾರಿಗಳಾದ ವೆಂಕಟರಮಣ, ರಾಜಪ್ಪ ಸೇರಿದಂತೆ ರೈತ ಸಂಘದ ಹಲವು ಮುಖಂಡರು ಹಾಗೂ ರೈತರು ಉಪಸ್ಥಿತರಿದ್ದರು.