ಗದಗ: ರಾಜ್ಯದಲ್ಲಿ ಉಂಟಾಗಿರುವ ಮಳೆ ಕೊರತೆ ಹಾಗೂ ತೀವ್ರ ಬರ ಪರಿಸ್ಥಿತಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಗದಗ ಜಿಲ್ಲೆಯನ್ನು ತಕ್ಷಣ ಬರಪೀಡಿತ ಘೋಷಿಸಿ ರೈತರಿಗೆ ಸಮಗ್ರ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘ ಗದಗ ಜಿಲ್ಲಾ ಘಟಕದಿಂದ ಬುಧವಾರ ಜಿಲ್ಲಾಧಿಕಾರಿಗಳ ಮೂಲಕ ಸಿಎಂಗೆ ಮನವಿ ಸಲ್ಲಿಸಲಾಯಿತು.
ಬರ ನಿರ್ವಹಣೆಗೆ ಪ್ರತಿ ತಾಲೂಕಿನಲ್ಲಿ ನಿಯಂತ್ರಣ ಕೊಠಡಿ ಸ್ಥಾಪಿಸಿ, ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಬೇಕು. ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು. ಜಾನುವಾರುಗಳಿಗೆ ಮೇವು ಬ್ಯಾಂಕ್ ಹಾಗೂ ಗೋಶಾಲೆಗಳನ್ನು ಆರಂಭಿಸಿ, ಮೇವು ಮತ್ತು ನೀರಿನ ವ್ಯವಸ್ಥೆ ಕಲ್ಪಿಸಬೇಕು. ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಹೆಚ್ಚುವರಿ ಉದ್ಯೋಗ ದಿನಗಳನ್ನು ಒದಗಿಸಬೇಕು. ರೈತರಿಗೆ ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು. ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಿ, ಪರಿಹಾರ ಮೊತ್ತವನ್ನು ವಿತರಿಸಬೇಕು.
ಕಳೆದ ಸಾಲಿನಲ್ಲಿ ಬೆಳೆ ವಿಮೆ ಪರಿಹಾರದ ಮೊತ್ತದಲ್ಲಿ ಶೇ. 70ರಷ್ಟು ಹಣವನ್ನು ಮಾತ್ರ ರೈತರಿಗೆ ನೀಡಲಾಗಿದ್ದು, ಉಳಿದ ಶೇ. 30ರಷ್ಟು ಮೊತ್ತವನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಬಾಕಿ ಇರುವ ವಿಮೆ ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡಿ ರೈತರ ಖಾತೆಗೆ ಜಮಾ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.ಸರ್ಕಾರ ರೈತರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಮನವಿಯಲ್ಲಿ ಎಚ್ಚರಿಕೆ ನೀಡಲಾಗಿದೆ.