ಹಾವೇರಿ ಜಿಲ್ಲೆಯನ್ನು ಹಸಿರು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ

KannadaprabhaNewsNetwork |  
Published : Sep 03, 2026, 02:15 AM IST
ಬ್ಯಾಡಗಿ ತಹಸೀಲ್ದಾರ್‌ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಹಾವೇರಿ ಜಿಲ್ಲೆಯಲ್ಲಿ ಮಳೆ ಕೊರತೆ ಹಾಗೂ ಬೆಳೆ ಹಾನಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಹಾವೇರಿ ಜಿಲ್ಲೆಯನ್ನು ಕೂಡಲೇ ಹಸಿರು ಬರಪೀಡಿತ ಜಿಲ್ಲೆ ಎಂದು ಘೋಷಿಸಿ, ರೈತರಿಗೆ ಸೂಕ್ತ ಪರಿಹಾರ ಹಾಗೂ ಅಗತ್ಯ ನೆರವು ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸದಸ್ಯರು ಬ್ಯಾಡಗಿ ತಹಸೀಲ್ದಾರ್‌ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಬ್ಯಾಡಗಿ: ಜಿಲ್ಲೆಯಲ್ಲಿ ಮಳೆ ಕೊರತೆ ಹಾಗೂ ಬೆಳೆ ಹಾನಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಹಾವೇರಿ ಜಿಲ್ಲೆಯನ್ನು ಕೂಡಲೇ ಹಸಿರು ಬರಪೀಡಿತ ಜಿಲ್ಲೆ ಎಂದು ಘೋಷಿಸಿ, ರೈತರಿಗೆ ಸೂಕ್ತ ಪರಿಹಾರ ಹಾಗೂ ಅಗತ್ಯ ನೆರವು ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸದಸ್ಯರು ಪಟ್ಟಣದ ತಹಸೀಲ್ದಾರ್‌ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ, ಜಿಲ್ಲೆಯಲ್ಲಿ ಸರ್ಕಾರವೇ ನಿಗದಿ ಮಾಡಿರುವ ಮಾನದಂಡದ ಪ್ರಕಾರ ಶೇ. 31ರಷ್ಟು ಮಳೆ ಕೊರತೆಯಾಗಿದೆ. ಆಗೊಮ್ಮೆ ಈಗೊಮ್ಮೆ ಸುರಿಯುತ್ತಿರುವ ತುಂತುರು ಮಳೆಯನ್ನು ನಂಬಿಕೊಂಡು ರೈತರು ಬೆಳೆ ಬಿತ್ತನೆ ಮಾಡುತ್ತಿದ್ದಾರೆ. ಆದರೆ ನಿರಂತರ ಮಳೆಯ ಕೊರತೆಯಿಂದ ಬೆಳೆಗಳು ಸಮರ್ಪಕವಾಗಿ ಬೆಳೆಯದೆ ರೈತರ ಆರ್ಥಿಕ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಇಷ್ಟಾದರೂ ಯಾವ ಆಧಾರ ಮೇಲೆ ಜಿಲ್ಲೆ ಪಟ್ಟಿಯಿಂದ ಕೈ ಬಿಡಲಾಗಿದೆ ಎಂಬುದು ತಿಳಿಯುತ್ತಿಲ್ಲ ಎಂದರು.

ಕೆರೆಗಳಿಗೆ ನೀರು ತುಂಬಿಸಿಲ್ಲ: ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, ಮುಂಗಾರು ಆರಂಭವಾಗಿ ಹಲವು ದಿನಗಳು ಕಳೆದರೂ ಜಿಲ್ಲೆಯ ಪ್ರಮುಖ ಕೆರೆಗಳಿಗೆ ಸಮರ್ಪಕವಾಗಿ ನೀರು ಹರಿಸಿಲ್ಲ. ಇದರಿಂದ ಕೃಷಿ ಚಟುವಟಿಕೆಗೆ ಮಾತ್ರವಲ್ಲದೆ ಜಾನುವಾರು ಹಾಗೂ ಜನಸಾಮಾನ್ಯರಿಗೂ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಆತಂಕವಿದೆ. ಜಲಮೂಲಗಳು ಬತ್ತುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಮತ್ತಷ್ಟು ಉಲ್ಬಣಿಸುವ ಸಾಧ್ಯತೆಯಿದೆ, ಇವೆಲ್ಲ ಅಂಶಗಳನ್ನ ಗಮನದಲ್ಲಿ ಇಟ್ಟುಕೊಂಡು ಕೂಡಲೇ ಜಿಲ್ಲೆಯನ್ನು ಬರಗಾಲಪೀಡಿತ ಜಿಲ್ಲೆ ಎಂದು ಗೋಷಣೆ ಮಾಡುವಂತೆ ಆಗ್ರಹಿಸಿದರು.

ಶಾಸಕ ಮನೆ ಮುಂದೆ ಧರಣಿ: ರೈತ ಮುಖಂಡ ಗಂಗಣ್ಣ ಯಲಿ ಮಾತನಾಡಿ, ತಾಲೂಕುವಾರು ಪರಿಗಣನೆ ಮಾಡದೆ ಸಂಪೂರ್ಣ ಹಾವೇರಿ ಜಿಲ್ಲೆಯನ್ನು ಹಸಿರು ಬರಪೀಡಿತ ಜಿಲ್ಲೆ ಎಂದು ಘೋಷಿಸಿ, ಸರ್ಕಾರದ ಬರ ಪರಿಹಾರ ಯೋಜನೆಗಳನ್ನು ರೈತರಿಗೆ ತಲುಪಿಸಬೇಕು. ಸರ್ಕಾರ ಕೂಡಲೇ ರೈತರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಜಿಲ್ಲೆಯ ಎಲ್ಲ ಶಾಸಕರ ಮನೆಗಳ ಮುಂದೆ ರೈತ ಸಮುದಾಯದಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಬೆಳೆಹಾನಿ ಸಮೀಕ್ಷೆ ನಡೆಸಿ: ರುದ್ರನಗೌಡ್ರ ಕಾಡನಗೌಡ್ರ ಮಾತನಾಡಿ, ಜಿಲ್ಲೆಯ ರೈತರ ಸಂಕಷ್ಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ತಕ್ಷಣವೇ ಬರ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ರೈತರ ಬೆಳೆಹಾನಿ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡಬೇಕು. ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಕೆರೆಗಳಿಗೆ ನೀರು ತುಂಬಿಸುವ ಮೂಲಕ ಕೃಷಿಗೆ ಅನುಕೂಲ ಮಾಡಿ ಕೊಡಬೇಕು ಎಂದು ಆಗ್ರಹಿಸಿದರು.

ಈ ವೇಳೆ ನೂರಾರು ರೈತರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿದ್ಯುತ್ ನಿಯಮ ತಿದ್ದುಪಡಿ ಕೈಬಿಡಲು ಆಗ್ರಹ
ಮಾನಸಿಕ, ಬೌದ್ಧಿಕ ಬೆಳವಣಿಗೆಗೆ ಕ್ರೀಡೆ ಪೂರಕ: ಸುನೀಲ ಮಹಾಂತಶೆಟ್ಟರ