ಹಾವೇರಿ ಜಿಲ್ಲೆ ಬರಪೀಡಿತ ಘೋಷಿಸುವಂತೆ ಆಗ್ರಹ

KannadaprabhaNewsNetwork |  
Published : Jul 01, 2026, 02:00 AM IST
ಹಾವೇರಿ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ಮಾತನಾಡಿದರು. | Kannada Prabha

ಸಾರಾಂಶ

ಕೃಷಿ ಪ್ರಧಾನವಾದ ಹಾವೇರಿ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಎಂದು ಘೋಷಿಸಿ ರೈತರಿಗೆ ವಿಶೇಷ ಪರಿಹಾರ ಕಲ್ಪಿಸುವಂತೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ಸರ್ಕಾರವನ್ನು ಆಗ್ರಹಿಸಿದರು.

ಹಾವೇರಿ: ಕೃಷಿ ಪ್ರಧಾನವಾದ ಹಾವೇರಿ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಎಂದು ಘೋಷಿಸಿ ರೈತರಿಗೆ ವಿಶೇಷ ಪರಿಹಾರ ಕಲ್ಪಿಸುವಂತೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ಸರ್ಕಾರವನ್ನು ಆಗ್ರಹಿಸಿದರು.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಎರಡು ತಿಂಗಳಿಂದ ಜಿಲ್ಲೆಯಲ್ಲಿ ಸಮರ್ಪಕ ಮಳೆಯಾಗದೇ ಕೃಷಿ ಚಟುವಟಿಕೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.53ರಷ್ಟು ಮಳೆ ಕೊರತೆಯಾಗಿದ್ದು, ರೈತರ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ ಎಂದು ಹೇಳಿದರು.

ಇನ್ನೂ ಕೃಷಿ ಸಚಿವರು ಯಾರೆಂಬುದು ಗೊತ್ತಿಲ್ಲ. ಉಸ್ತುವಾರಿ ಸಚಿವರ ಗಮನವೂ ಇಲ್ಲ. ಜಿಲ್ಲಾಡಳಿತವೂ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ಅಗತ್ಯ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ ಅವರು, ರೈತರ ಮೇಲಿನ ಬ್ಯಾಂಕ್ ಸಾಲ ವಸೂಲಾತಿಯನ್ನು ತಕ್ಷಣ ಸ್ಥಗಿತಗೊಳಿಸಿ ಕೃಷಿ ಸಾಲ ಮನ್ನಾ ಮಾಡಬೇಕು. ಬ್ಯಾಂಕುಗಳು ಪದೇಪದೇ ನೋಟಿಸ್ ನೀಡುವ ಮೂಲಕ ರೈತರ ಮೇಲೆ ಒತ್ತಡ ಹೇರುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೆಸ್ಕಾಂ ಅನ್ನು ಟಾಟಾ ಕಂಪನಿಗೆ ವಹಿಸುವ ಮೂಲಕ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸುವ ಪ್ರಯತ್ನ ಸರಿಯಲ್ಲ. ಹಾವೇರಿ ಜಿಲ್ಲೆಯಲ್ಲಿ ವಿದ್ಯುತ್ ಖಾಸಗೀಕರಣಕ್ಕೆ ಅವಕಾಶ ನೀಡುವುದಿಲ್ಲ. ಅಂತಹ ಯಾವುದೇ ಪ್ರಯತ್ನ ನಡೆದರೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಪ್ರಧಾನಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, ಬೆಳೆ ವಿಮೆ ನೋಂದಣಿಯಲ್ಲಿ ರೈತರು ಅನಗತ್ಯ ತಾಂತ್ರಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕೃಷಿ ಸಾಲ ಪಡೆದಿಲ್ಲ ಎಂದು ಸ್ವಯಂ ಘೋಷಣಾ ಪತ್ರ ನೀಡಬೇಕು. ಸರ್ಕಾರ ಮತ್ತು ವಿಮಾ ಕಂಪನಿಗಳು ರೈತರು ವಿಮೆ ಮಾಡಿಸದಂತೆ ಪರೋಕ್ಷವಾಗಿ ಒಪ್ಪಂದ ಮಾಡಿಕೊಂಡಂತಿದೆ ಎಂಬ ಅನುಮಾನ ಮೂಡುತ್ತಿದೆ ಎಂದು ಆರೋಪಿಸಿದರು.

ರೈತ ಸಂಘದ ರಾಜ್ಯ ಸಮಿತಿ ಸದಸ್ಯ ಮಾಲತೇಶ ಪೂಜಾರ ಮಾತನಾಡಿ, ವಿದ್ಯುತ್ ಖಾಸಗೀಕರಣಕ್ಕೆ ಮುಂದಾದರೆ ಅದರ ಪರಿಣಾಮ ಗಂಭೀರವಾಗಲಿದೆ. ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ವಿರೋಧ ಪಕ್ಷವೇ ಇಲ್ಲದಂತಾಗಿದ್ದು, ರೈತರ ಪರವಾಗಿ ಧ್ವನಿ ಎತ್ತುವ ಕೆಲಸ ನಡೆಯುತ್ತಿಲ್ಲ. ಈಗಿರುವ ವಿದ್ಯುತ್ ಪೂರೈಕೆಯನ್ನೂ ಕಸಿದುಕೊಂಡರೆ ರೈತರು ಬದುಕುವುದು ಹೇಗೆ ಎಂದು ಪ್ರಶ್ನಿಸಿದ ಅವರು, ಹಾವೇರಿ ಜಿಲ್ಲೆಯನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಎಚ್.ಎಚ್ ಮುಲ್ಲಾ, ಹಾನಗಲ್ಲ ತಾಲೂಕಾಧ್ಯಕ್ಷ ಮರಿಗೌಡ ಪಾಟೀಲ, ಶಿವಯೋಗಿ ಹೊಸಗೌಡ್ರ, ಅಡಿವೆಪ್ಪ ಆಲದಕಟ್ಟಿ, ಪ್ರಭುಗೌಡ ಪ್ಯಾಟಿ, ಚನ್ನಪ್ಪ ಮರಡೂರ, ಗಂಗಾಧರ ಪ್ಯಾಟಿಗೌಡ್ರ, ಶಾಂತನಗೌಡ ಪಾಟೀಲ, ರುದ್ರಪ್ಪ ಅಣ್ಣಿ, ಸುಭಾಸ ಬನ್ನಿಹಟ್ಟಿ, ಅಬ್ದುಲ್ ಖಾದರ್ ಬುಡಂದಿ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೌರ್ಜನ್ಯ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್