ಕೊಪ್ಪಳ: ಕೊಪ್ಪಳವನ್ನು ತಕ್ಷಣ ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಿ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಜೆಡಿಎಸ್ ಮುಖಂಡರು ಸರ್ಕಾರವನ್ನು ಒತ್ತಾಯಿಸಿದರು.
ಜೂನ್‌ನಲ್ಲಿ ಮುಂಗಾರು ವಿಫಲವಾದ ಬಳಿಕ ಬೆಳೆಹಾನಿ ಸಮೀಕ್ಷೆ ನಡೆಸಿ ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ನೀಡಬೇಕು ಹಾಗೂ ಕೊಪ್ಪಳವನ್ನು ಬರಪೀಡಿತ ತಾಲೂಕು ಎಂದು ಘೋಷಿಸಬೇಕು ಎಂದು ಒತ್ತಾಯಿಸಲಾಗಿತ್ತು. ಆದರೆ, ಸರ್ಕಾರ ಹಾಗೂ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಸ್ಪಂದಿಸಿಲ್ಲ ಎಂದು ಚಂದ್ರಶೇಖರ ಆರೋಪಿಸಿದರು.
ಪಾದಯಾತ್ರೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ, ಆ. 27ರಂದು ಪ್ರಕಟಿಸಿದ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಕೊಪ್ಪಳವನ್ನು ಸೇರಿಸದಿರುವುದು ಜನರ ಸಂಕಷ್ಟದ ನಿರ್ಲಕ್ಷ್ಯಕ್ಕೆ ಸಾಕ್ಷಿ ಎಂದರು.ತಾಲೂಕು ಗೌರವಾಧ್ಯಕ್ಷ ಈಶಪ್ಪ ಮಾದಿನೂರು ಮಾತನಾಡಿ, ಏತ ನೀರಾವರಿ ಕಾಮಗಾರಿಗಳನ್ನು ಪೂರ್ಣಗೊಳಿಸುವುದಾಗಿ ಹೇಳಲಾಗುತ್ತಿದೆ. ಆದರೆ ಕಾಲುವೆ, ಪೈಪ್ ಕಾಮಗಾರಿಗಳೇ ಪೂರ್ಣಗೊಂಡಿಲ್ಲ ಎಂದು ಟೀಕಿಸಿದರು.
ದೇವದುರ್ಗ ಶಾಸಕಿ ಕರಿಯಮ್ಮ ನಾಯಕ ಅವರು ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಬರ ಪ್ಯಾಕೇಜ್ ಘೋಷಿಸಬೇಕು ಎಂದು ಒತ್ತಾಯಿಸಿದರು.
ಜೆಡಿಎಸ್ ಬಿಜೆಯಿಂದ ಒಬ್ಬರೇ ಅಭ್ಯರ್ಥಿ: ಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಇರುವುದರಿಂದ ಒಬ್ಬರೇ ಅಭ್ಯರ್ಥಿಯಾಗಲಿದ್ದಾರೆ ಎಂದು ಜೆಡಿಎಸ್ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ ಹೇಳಿದ್ದಾರೆ. ಪಾದಯಾತ್ರೆಯಲ್ಲಿ ಸುದ್ದಿಗಾರರ ಪ್ರಶ್ನೆ ಉತ್ತರಿಸಿದ ಅವರು, ಈ ಸಲ ಎರಡು ಪಕ್ಷಗಳ ಜಂಟಿಯಾಗಿ ಗೆಲುವಿಗಾಗಿ ಶ್ರಮಿಸಲಿದ್ದಾರೆ ಎಂದರು.