ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಕೇಂದ್ರ ಬಸ್ ನಿಲ್ದಾಣದ ಸಮೀಪದ ಜಿಲ್ಲಾ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಡಿಆರ್‌ಸಿಒ) ಕಚೇರಿ ಎದುರು ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಜಮಾಯಿಸಿದ್ದರು.
ಸಿಂಗಾಡಿಕದಿರೇನಹಳ್ಳಿ ಗ್ರಾಮದ ದಲಿತ ಕುಟುಂಬಗಳ ಭೂ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ನಗರ ಹೊರವಲಯದ ಸೂಲಾಲಪ್ಪ ದಿನ್ನೆಯ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಮುಂದೆ ಕಳೆದ 33 ದಿನಗಳಿಂದ ಧರಣಿ ಮುಂದುವರಿದಿದ್ದು, ಹಲವು ಬಾರಿ ಮನವಿ ಸಲ್ಲಿಸಿದರೂ ಕಂದಾಯ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಯಾವುದೇ ಸ್ಪಷ್ಟ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.ಈ ವೇಳೆ ದಸಂಸ ಜಿಲ್ಲಾ ಸಂಚಾಲಕ ಸಿ.ಜಿ. ಗಂಗಪ್ಪ ಮಾತನಾಡಿ, ದಲಿತರ ಜೀವ, ಮಾನ ಮತ್ತು ಆಸ್ತಿಗೆ ಧಕ್ಕೆಯಾದ ಸಂದರ್ಭದಲ್ಲಿ ರಕ್ಷಣೆ ನೀಡುವುದು ಹಾಗೂ ನ್ಯಾಯ ಒದಗಿಸುವುದು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಕರ್ತವ್ಯವಾಗಿದೆ. ಲಿಖಿತ ದೂರು ನೀಡಿ ಐದು ದಿನಗಳಾಗಿವೆ. ವಾಸ್ತವವಾಗಿ ಈ ಇಲಾಖೆ ಸ್ವಯಂಪ್ರೇರಿತ (ಸುಮೋಟೋ ) ಪ್ರಕರಣ ದಾಖಲಿಸಿಕೊಂಡು ನ್ಯಾಯ ಒದಗಿಸುವಷ್ಟು ಬಲಿಷ್ಠವಾಗಿದೆ. ಆದರೂ ಯಾವುದೋ ಒತ್ತಡಕ್ಕೆ ಮಣಿದು ಈ ಪ್ರಕರಣದಲ್ಲಿ ಕ್ರಮವಹಿಸದೆ ಇಲಾಖೆ ಕಾಲಹರಣ ಮಾಡುತ್ತಿದೆ. ತಪ್ಪು ಮಾಡಿದವರ ವಿರುದ್ಧ ಕ್ರಮ ಜರುಗಿಸುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರಲ್ಲದೇ, ಅಧಿಕಾರಿಗಳು ತಟಸ್ಥ ಧೋರಣೆ ಅನುಸರಿಸುತ್ತಿದ್ದು, ದಲಿತರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು.
ಪ್ರತಿಭಟನಾ ಕಾರರನ್ನು ಉದ್ದೇಶಿಸಿ ಜಿಲ್ಲಾ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಅಧಿಕಾರಿ ಡಿವೈಎಸ್ ಪಿ ಎಸ್.ಶಿವಕುಮಾರ್ ಮಾತನಾಡಿ, ಸಿಂಗಾಡಿ ಕದಿರೇನಹಳ್ಳಿ ಗ್ರಾಮದ ದಲಿತ ಕೃಷಿಕರ ಭೂಮಿ ಸಮಸ್ಯೆ ಪರಿಹಾರದ ವಿಚಾರದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ಕಂದಾಯ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ದ ದೂರು ದಾಖಲಿಸುವಂತೆ ನೀಡಿರುವ ಮನವಿಯನ್ನು ಮೇಲಾಧಿಕಾರಿಗಳಿಗೆ ಸಲ್ಲಿಸಲಾಗಿದೆ. ಅಲ್ಲಿಂದ ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡುವಂತೆ ನಿರ್ದೇಶನ ಬಂದಿದ್ದು, ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಎಲ್ಲ ವಿಚಾರಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.