ರಾಗಿ ಖರೀದಿ ಕೇಂದ್ರ ತೆರೆಯಲು ಒತ್ತಾಯ

KannadaprabhaNewsNetwork |  
Published : Nov 14, 2026, 02:15 AM IST
ಹೂವಿನಹಡಗಲಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘವು ರಾಗಿ ಖರೀದಿ ಕೇಂದ್ರ ತೆರೆಯುವಂತೆ ಆಗ್ರಹಿಸಿ ತಹಸೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು. | Kannada Prabha

ಸಾರಾಂಶ

ರಾಗಿ ಬೆಳೆದು ಕಟಾವಿನ ಹಂತಕ್ಕೆ ಬಂದಿರುವ ಸಂದರ್ಭದಲ್ಲಿ ರೈತರಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಹಾಗೂ ಖರೀದಿ ಭರವಸೆ ಇಲ್ಲದಿರುವುದು ಆತಂಕಕ್ಕೆ ಕಾರಣವಾಗಿದೆ

ಹೂವಿನಹಡಗಲಿ: ಮುಂಗಾರು ಹಂಗಾಮಿನ ರಾಗಿ ಬೆಳೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಲ್‌ಗೆ ₹5502ಗಳ ದರದಲ್ಲಿ ಖರೀದಿಸಲು ತಕ್ಷಣ ಖರೀದಿ ಕೇಂದ್ರ ಪ್ರಾರಂಭಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಮನವಿ ಪತ್ರ ನೀಡಿ ಒತ್ತಾಯಿಸಿದ್ದಾರೆ.

ಸಂಘದ ತಾಲೂಕಾಧ್ಯಕ್ಷ ಎಚ್‌. ಸಿದ್ದಪ್ಪ, ಪ್ರಧಾನ ಕಾರ್ಯದರ್ಶಿ ಶಿವರಾಜ ಹೊಳಗುಂದಿ ಮಾತನಾಡಿ, ತಾಲೂಕಿನಲ್ಲಿ ಹೆಚ್ಚು ರೈತರು ರಾಗಿ ಬೆಳೆದಿದ್ದಾರೆ, ಜತೆಗೆ 5670 ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬಿತ್ತನೆ ಮಾಡಲಾಗಿದ್ದು, ರೈತರು ಹೆಚ್ಚಿನ ಬಂಡವಾಳ ಹೂಡಿ, ಸಾಲಸೋಲ ಮಾಡಿ ಬೆಳೆ ಬೆಳೆದಿದ್ದಾರೆ. ಕೂಡಲೇ ಸರ್ಕಾರ ಎಪಿಎಂಸಿ ಆವರಣದಲ್ಲಿ ರಾಗಿ ಖರೀದಿ ಕೇಂದ್ರ ತೆರೆಯಬೇಕೆಂದು ಮನವಿ ಮಾಡಿದರು.

ರಾಗಿ ಬೆಳೆದು ಕಟಾವಿನ ಹಂತಕ್ಕೆ ಬಂದಿರುವ ಸಂದರ್ಭದಲ್ಲಿ ರೈತರಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಹಾಗೂ ಖರೀದಿ ಭರವಸೆ ಇಲ್ಲದಿರುವುದು ಆತಂಕಕ್ಕೆ ಕಾರಣವಾಗಿದೆ. ಮುಕ್ತ ಮಾರುಕಟ್ಟೆಯಲ್ಲಿ ಮಧ್ಯವರ್ತಿಗಳು ಕಡಿಮೆ ಬೆಲೆಗೆ ರಾಗಿ ಖರೀದಿಸುವ ಸಾಧ್ಯತೆ ಇದೆ, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ಎದುರಾಗಿದೆ. ಆದರಿಂದ ಸರ್ಕಾರ ಕೂಡಲೇ ರೈತರ ನೆರವಿಗೆ ಬರಬೇಕೆಂದು ಒತ್ತಾಯಿಸಿದರು.

ಸರ್ಕಾರ ಘೋಷಿಸಿರುವ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ, ಪ್ರತಿ ಕ್ವಿಂಟಲ್ ರಾಗಿಗೆ ₹5,502 ದರದಲ್ಲಿ ರೈತರಿಂದ ನೇರವಾಗಿ ಖರೀದಿ ಮಾಡಬೇಕು. ಈ ನಿಟ್ಟಿನಲ್ಲಿ ತಾಲೂಕಿನಲ್ಲಿ ಅಗತ್ಯವಿರುವ ಕಡೆಗಳಲ್ಲಿ ರಾಗಿ ಖರೀದಿ ಕೇಂದ್ರ ತಕ್ಷಣ ಪ್ರಾರಂಭಿಸಿ ರೈತರು ಯಾವುದೇ ತೊಂದರೆ ಇಲ್ಲದೆ ತಮ್ಮ ಉತ್ಪನ್ನ ಮಾರಾಟ ಮಾಡಲು ಅನುಕೂಲ ಕಲ್ಪಿಸಬೇಕೆಂದು ಆಗ್ರಹಿಸಿದರು.

ರೈತರಿಗೆ ನೋಂದಣಿ ಪ್ರಕ್ರಿಯೆ ಸರಳಗೊಳಿಸಿ ಯಾವುದೇ ಅನಗತ್ಯ ತೊಂದರೆ ನೀಡಬಾರದು. ಖರೀದಿಸಿದ ರಾಗಿಯ ಹಣ ರೈತರ ಬ್ಯಾಂಕ್ ಖಾತೆಗಳಿಗೆ ನಿಗದಿತ ಕಾಲಮಿತಿಯಲ್ಲಿ ಜಮಾ ಮಾಡಬೇಕು. ಸಣ್ಣ ಮತ್ತು ಅತಿಸಣ್ಣ ರೈತರಿಗೆ ಖರೀದಿಯಲ್ಲಿ ಆದ್ಯತೆ ನೀಡಬೇಕು. ಖರೀದಿ ಕೇಂದ್ರಗಳಲ್ಲಿ ತೂಕ, ಗುಣಮಟ್ಟ ಪರೀಕ್ಷೆ ಹಾಗೂ ಚೀಲಗಳ ವ್ಯವಸ್ಥೆ ಸಮರ್ಪಕವಾಗಿ ಕಲ್ಪಿಸಬೇಕು. ರೈತರು ಬೆಳೆದ ಬೆಳೆಗೆ ನ್ಯಾಯಯುತ ಬೆಲೆ ದೊರೆಯುವುದು ಸರ್ಕಾರದ ಜವಾಬ್ದಾರಿಯಾಗಿದೆ. ಆದ್ದರಿಂದ ರೈತರ ಹಿತದೃಷ್ಟಿಯಿಂದ ಈ ಬೇಡಿಕೆ ಗಂಭೀರವಾಗಿ ಪರಿಗಣಿಸಿ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ ರಾಗಿ ಖರೀದಿ ಪ್ರಕ್ರಿಯೆ ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ದಾವಲ್‌ಸಾಬ್‌, ಕೆ. ಮಂಜುನಾಥ, ರೇಖಾ, ಬಿ.ಫಕ್ಕೀರಪ್ಪ, ಕೋಡಬಾಳ ಚಂದ್ರಪ್ಪ, ಬಿ.ಎಚ್‌.ಎಂ. ವಿಜಯಲಕ್ಷ್ಮೀ ಸೇರಿದಂತೆ ಇತರರು ಉಪ ತಹಸೀಲ್ದಾರ್‌ ಮಲ್ಲಿಕಾರ್ಜುನ ಇವರಿಗೆ ಮನವಿ ಪತ್ರ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳ ಸರ್ವತೋಮುಖ ಪ್ರಗತಿಗೆ ಶ್ರಮಿಸಿ
ಎಸಿಯಾಗಿ ಪದೋನ್ನತಿ ಹೊಂದಿದ ತಹಸೀಲ್ದಾರ್‌ ಬೋಸಗಿ