ಮದ್ದೂರು ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಉಪಸ್ಥಿತಿ ಇರದೆ ಬೇರೆ ಕಡೆಯಿಂದ ಕರ್ತವ್ಯಕ್ಕೆ ಬರುತ್ತಿದ್ದಾರೆ. ಇದರಿಂದ ಸಾರ್ವಜನಿಕರ ಹಾಗೂ ರೈತರ ಕೆಲಸಗಳು ವಿಳಂಬವಾಗುತ್ತಿವೆ. ಆದ್ದರಿಂದ ಅಧಿಕಾರಿಗಳು ಕೇಂದ್ರ ಸ್ಥಳದಲ್ಲಿ ವಾಸಿಸುವಂತೆ ಆದೇಶಿಸಬೇಕು.
ಕನ್ನಡಪ್ರಭ ವಾರ್ತೆ ಮದ್ದೂರು
ಸರ್ಕಾರಿ ಭೂಮಿ, ಗೋಮಾಳ ಮತ್ತು ಮುಜಾರಾಯಿ ಇಲಾಖೆಗಳ ಆಸ್ತಿಗಳು ತಾಲೂಕಿನಾದ್ಯಂತ ಒತ್ತುವರಿಯಾಗಿವೆ. ತಾಲೂಕು ಆಡಳಿತ ಸರ್ವೇ ಮಾಡಿಸಿ ಸರ್ಕಾರದ ವಶಕ್ಕೆ ತೆಗೆದುಕೊಳ್ಳಬೇಕು ಒತ್ತಾಯಿಸಿ, ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಡಾ.ಶಿವಕುಮಾರ ಬಿರಾದಾರ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ತಾಲೂಕು ಕಚೇರಿಯಲ್ಲಿ ಆರ್‌ಆರ್‌ಟಿ, ಸರ್ವೇ ಹಾಗೂ ಎಲ್ಲಾ ವಿಭಾಗಗಳಲ್ಲಿ ಕೆಲಸ ಕಾರ್ಯಗಳು ಸಮರ್ಪಕವಾಗಿ ಆಗುತ್ತಿಲ್ಲ. ಕಚೇರಿ ಆವರಣದಲ್ಲಿ ಸುಸಜ್ಜಿತ ಶೌಚಾಗೃಹ, ವಾಹನ ನಿಲ್ದಾಣ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲ ಸೌಕರ್ಯ ಒದಗಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.
ವೇದಿಕೆ ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ್ ಮಾತನಾಡಿ, ಕೋಟ್ಯಂತರ ರು.ಬೆಲೆ ಬಾಳುವ ಸರ್ಕಾರಿ ಜಮೀನುಗಳು ಒತ್ತುವರಿಯಾಗಿರುವುದನ್ನು ಗಂಭೀರವಾಗಿ ಪರಿಗಣಿಸಬೇಕು. ಹಣ ಪಡೆದು ಸರ್ಕಾರಿ ಕೆಲಸ ಮಾಡಿಸಿಕೊಡುವ ಮಧ್ಯವರ್ತಿಗಳ ಹಾವಳಿ ತಪ್ಪಿಸುವಂತೆ ಮನವಿ ಮಾಡಿದರು.
ತಾಲೂಕಿನ ಶಿಂಷಾ ನದಿ ಪಾತ್ರದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ತಡೆಯಲು ತಾಲೂಕು ಆಡಳಿತ ಹಾಗೂ ಸಂಬಂಧಿಸಿದ ಅಧಿಕಾರಿಗಳು ಪ್ರಾಮಾಣಿಕಕಾಗಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಉಪಸ್ಥಿತಿ ಇರದೆ ಬೇರೆ ಕಡೆಯಿಂದ ಕರ್ತವ್ಯಕ್ಕೆ ಬರುತ್ತಿದ್ದಾರೆ. ಇದರಿಂದ ಸಾರ್ವಜನಿಕರ ಹಾಗೂ ರೈತರ ಕೆಲಸಗಳು ವಿಳಂಬವಾಗುತ್ತಿವೆ. ಆದ್ದರಿಂದ ಅಧಿಕಾರಿಗಳು ಕೇಂದ್ರ ಸ್ಥಳದಲ್ಲಿ ವಾಸಿಸುವಂತೆ ಆದೇಶಿಸುವಂತೆ ಮನವಿ ಮಾಡಿದರು.
ಮನವಿ ಸ್ವೀಕರಿಸಿ ಮಾತನಾಡಿದ ತಹಸೀಲ್ದಾರ್ ಡಾ.ಶಿವಕುಮಾರ್ ಬಿರಾದಾರ, ಶುಕ್ರವಾರ ಹೊಸದಾಗಿ ಅಧಿಕಾರಿ ಸ್ವೀಕರಿಸಿದ್ದೇನೆ. ನಿಮ್ಮ ಎಲ್ಲಾ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಹಂತ ಹಂತವಾಗಿ ಬಗೆಹರಿಸುವಲ್ಲಿ ಪ್ರಯತ್ನಿಸಿ ಕಾರ್ಯರೂಪಕ್ಕೆ ತರುತ್ತೇನೆಂದು ಭರವಸೆ ನೀಡಿದರು
ಈ ವೇಳೆ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಸಿ.ಲಿಂಗರಾಜು, ತಾಲೂಕು ಅಧ್ಯಕ್ಷ ತಿಪ್ಪೂರು ರಾಜೇಶ್, ಯುವ ಘಟಕದ ಅಧ್ಯಕ್ಷ ವಿ.ಪಿ.ವಿಶ್ವಾಸ್, ಸಂಘಟನಾ ಕಾರ್ಯದರ್ಶಿ ಅಜ್ಜಹಳ್ಳಿ ಕರಿಗೌಡ, ವಿ.ಪಿ.ವರದರಾಜು, ವಿ.ಬಿ.ಸದಾನಂದ, ಸಂಘಟನ ಕಾರ್ಯದರ್ಶಿ ಬೋರಾಪುರ ಸಿದ್ದರಾಮ, ಮುಖಂಡರಾದ ಕಲ್ಯಾಣಿ, ರಾಮಣ್ಣ, ವೀರಭದ್ರಚಾರಿ, ಜಿಲ್ಲಾ ರೈತ ಮುಖಂಡ ಕುದುರಗುಂಡಿ ನಾಗರಾಜು, ಚೇತನ್ ಸೇರಿದಂತೆ ಇತರರು ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.