ಕನ್ನಡಪ್ರಭ ವಾರ್ತೆ ಬೀದರ್
ನಗರದಲ್ಲಿ ರಾಷ್ಟ್ರೀಯ ಬಸವದಳ ಸೇರಿದಂತೆ ಇನ್ನಿತರ ಬಸವಪರ ಸಂಘಟನೆಗಳಿಂದ ವಿಜಯಪುರ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಹೇಳಿಕೆ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿ, ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ್ ಅವರು ಇತ್ತೀಚೆಗೆ ಬೀದರ್‌ನಲ್ಲಿ ವಕ್ಫ್ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಲಿಂಗೈಕ್ಯದ ಬಗ್ಗೆ ಅವಹೇಳನಕಾರಿಯಾಗಿ ಭಾಷಣ ಮಾಡಿ ಬಸವಣ್ಣನವರಿಗೆ ಅವಮಾನವೆಸಗಿದ್ದಾರೆ. ವಿಶ್ವಗುರು ಬಸವಣ್ಣನವರು ಹೊಳೆಗೆ ಹಾರಿ ಪ್ರಾಣಬಿಟ್ಟರು ಎಂಬ ಆಧಾರರಹಿತ ಸುಳ್ಳನ್ನು ತಮ್ಮ ಭಾಷಣದಲ್ಲಿ ಬಳಸಿ, ಬಸವಣ್ಣನವರು ಓರ್ವ ಹೇಡಿಯಾಗಿದ್ದರು ಎನ್ನುವ ಅರ್ಥದಲ್ಲಿ ಮಾತನಾಡಿ ಗುರು ಬಸವಣ್ಣನವರಿಗೆ ಅವಮಾನ ಮಾಡಿದ್ದಾರೆ.
ಲಿಂಗಾಯತರ ಧರ್ಮಸ್ಥಾಪಕ ವಿಶ್ವಗುರು ಬಸವಣ್ಣನವರನ್ನು ಅವಮಾನ ಮಾಡಿರುವ ಬಸನಗೌಡ ಪಾಟೀಲ್ ಯತ್ನಾಳರಿಗೆ ಇನ್ನು ಮುಂದೆ ಪಕ್ಷ ಹಾಗೂ ಸರ್ಕಾರದಿಂದ ಲಿಂಗಾ ಯತ ಮೀಸಲಾತಿ ಕೋಟಾದಲ್ಲಿ ಯಾವುದೇ ಸೌಲಭ್ಯಗಳನ್ನು ನೀಡಬಾರದು ಹಾಗೂ ಇವರ ವಿರುದ್ಧ ಕಾನೂನು ಶಿಸ್ತು ಕ್ರಮ ಕೈಗೊಂಡು ಇವರನ್ನು ಶಾಸಕ ಸ್ಥಾನದಿಂದ ವಜಾ ಗೊಳಿಸುವಂತೆ ಸ್ಪೀಕರ್ ಅವರಿಗೆ ಒತ್ತಾಯಿಸಿದರು.ಲಿಂಗಾಯತ ಮಹಾಮಠದ ಪ್ರಭುದೇವರು ಮಾತನಾಡಿ, ಯತ್ನಾಳ್ ಅವರು ಕ್ಷಮೆ ಯಾಚಿಸಬೇಕೆಂದರು. ಬೀದರ್ ಬಸವ ಮಂಟಪದ ಮಾತೆ ಸತ್ಯಾದೇವಿ, ಲಿಂಗಾಯತ ಸಮನ್ವಯ ಸಮಿತಿ ರಾಜ್ಯ ಸಂಚಾಲಕ ಶ್ರೀಕಾಂತ ಸ್ವಾಮಿ ಮಾತನಾಡಿದರು.
ಬಸವೇಶ್ವರ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿವರೆಗೆ ತೆರಳಿ ವಿಧಾನಸಭಾ ಅಧ್ಯಕ್ಷರಿಗೆ ಬರೆದ ಮನವಿ ಪತ್ರ ಜಿಲ್ಲಾಧಿಕಾರಿಗಳ ಮುಖಾಂತರ ಸಲ್ಲಿಸಿದರು. ರಾಷ್ಟ್ರೀಯ ಬಸವದಳ, ಲಿಂಗಾಯತ ಧರ್ಮ ಮಹಾಸಭಾ, ಕ್ರಾಂತಿ ಗಂಗೋತ್ರಿ ಅಕ್ಕನಾಗಲಾಂಬಿಕ ಮಹಿಳಾಗಣ, ಬಸವ ಕೇಂದ್ರ, ಬಸವ ಸೇವಾ ಪ್ರತಿಷ್ಠಾನ ಹಾಗೂ ಬಸವಪರ ಸಂಘಟನೆಗಳು, ಸಂಘ ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು.