ಬಳ್ಳಾರಿ: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಖಂಡಿಸಿ ಬಿಜೆಪಿಯ ನೂರಾರು ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ವಿಧಾನಪರಿಷತ್ ಸದಸ್ಯ ವೈ.ಎಂ.ಸತೀಶ್ ಹಾಗೂ ಮಾಜಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ, ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆಯಿಲ್ಲದಂತಾಗಿದೆ. ಪಾಲಿಕೆ ಸದಸ್ಯನ ಮಗಳಿಗೆ ಈ ಗತಿಯಾದರೆ ಬೇರೆಯವರ ಪಾಡೇನು? ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ವಹಿಸುತ್ತಿರುವುದು ಕಂಡು ಬರುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ ಎಂದು ಆರೋಪಿಸಿದರು.
ಕೆಲವು ಯುವಕರು ಲವ್ ಜಿಹಾದ್ ಮಾಡಲು ಹೊಂಚು ಹಾಕುತ್ತಿದ್ದಾರೆ. ಹೆಣ್ಣು ಮಕ್ಕಳು ವಿರೋಧಿಸಿದರೆ ಕೊಲೆಗೈಯುವ ಕ್ರೂರ ಕೃತ್ಯಕ್ಕೆ ಮುಂದಾಗುತ್ತಿದ್ದಾರೆ. ಲವ್ ಜಿಹಾದ್‌ನ್ನು ತಲೆಯಲ್ಲಿ ತುಂಬಿಕೊಂಡಿರುವವರನ್ನು ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಯಾಗಬೇಕು ಎಂದು ಪ್ರತಿಭಟನಾನಿರತ ಮಹಿಳೆಯರು ಆಗ್ರಹಿಸಿದರು.ಕಾಂಗ್ರೆಸ್ ಸರ್ಕಾರ ವಿರುದ್ಧ ಹಾಗೂ ವಿದ್ಯಾರ್ಥಿನಿಯನ್ನು ಕೊಲೆಗೈದ ದುಷ್ಕರ್ಮಿ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಪ್ರತಿಭಟನಾಕಾರರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಬಿಜೆಪಿ ನಾಯಕರಾದ ಲಕ್ಷ್ಮಿ ಅರುಣಾ, ಪಕ್ಷದ ಜಿಲ್ಲಾಧ್ಯಕ್ಷ ಅನಿಲ್‌ಕುಮಾರ್ ಮೋಕಾ, ಗುರುಲಿಂಗನಗೌಡ, ಮುರಹರಗೌಡ ಗೋನಾಳ್, ವಿರುಪಾಕ್ಷಗೌಡ, ಮಹಿಳಾ ಮೋರ್ಚಾದ ಅಧ್ಯಕ್ಷೆ ಸುಗುಣ, ಸಾಧನಾ ಹಿರೇಮಠ, ವಿಜಯಲಕ್ಷ್ಮಿ ಅಲುವೇಲು, ಜ್ಯೋತಿ ಪ್ರಕಾಶ, ಮಾರುತಿ ಪ್ರಸಾದ್, ದಮ್ಮೂರು ಶೇಖರ್, ಡಾ.ಅರುಣಾ ಕಾಮಿನೇನಿ, ಡಾ.ಬಿ.ಕೆ.ಸುಂದರ್ ಸೇರಿದಂತೆ ಪಕ್ಷದ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.