ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ
ಪಟ್ಟಣದ ಕೆ. ಆರ್. ವೃತ್ತದಲ್ಲಿ ಬಿಡದಿಯ ಬಗ್ಗೆ ಘೋಷಣೆ ಕೂಗಿ ಮೆರವಣಿಗೆಯನ್ನು ಮಹಿಳೆಯರು ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿ ನಂತರ ಮಾನವ ಸರಪಳಿ ನಿರ್ಮಿಸಿದರು. ಈ ಸಂದರ್ಭ ಮಾತನಾಡಿದ ಸಂಘದ ರಾಜ್ಯ ಮಹಿಳಾ ಅಧ್ಯಕ್ಷೆ ನಾಗರತ್ನಮ್ಮ ಅವರು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈ ವರ್ಷ ಸಮರ್ಪಕವಾಗಿ ಮಳೆಯಾಗದೆ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಅಣೆಕಟ್ಟುಗಳು, ಕೆರೆಕಟ್ಟೆಗಳು ಹಾಗೂ ಇತರೆ ಜಲಮೂಲಗಳಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿದಿದ್ದು, ಕೃಷಿ ಚಟುವಟಿಕೆಗಳು ಸಂಪೂರ್ಣವಾಗಿ ಹಿನ್ನಡೆಯಾಗಿವೆ. ಸಾಲಸೋಲ ಮಾಡಿ ಬೆಳೆ ಬೆಳೆದ ಸಾವಿರಾರು ರೈತರ ಬೆಳೆಗಳು ನೀರಿನ ಕೊರತೆಯಿಂದ ಒಣಗಿ ನಾಶವಾಗಿವೆ. ಇದರಿಂದ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಜೀವನ ನಿರ್ವಹಣೆಯೇ ದುಸ್ತರವಾಗಿದೆ, ಸರ್ಕಾರವು ತಕ್ಷಣವೇ ಸಮೀಕ್ಷೆ ನಡೆಸಿ, ಬರಪೀಡಿತ ಪ್ರದೇಶಗಳನ್ನು ತಕ್ಷಣ ಘೋಷಿಸಿ, ರೈತರನ್ನು ಉಳಿಸುವ ಉದ್ದೇಶ ಇಟ್ಟುಕೊಂಡು ಬೆಳೆ ನಷ್ಟದ ಪರಿಹಾರವನ್ನು ವೈಜ್ಞಾನಿಕವಾಗಿ ಸಮೀಕ್ಷೆ ಮಾಡಿ, ರೈತ ಬೆಳೆ ಬೆಳೆಯಲು ಮಾಡಿರುವ ಸಂಪೂರ್ಣ ಖರ್ಚನ್ನು ಯಾವುದೇ ವಿಳಂಬವಿಲ್ಲದೆ ರೈತರ ಬ್ಯಾಂಕ ಖಾತೆಗಳಿಗೆ ನೇರವಾಗಿ ಜಮಾ ಮಾಡಬೇಕು ಎಂದು ಆಗ್ರಹಿಸಿದರು.
ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವು ತೀವು ಕೊರತೆಯಾಗಿದ್ದು, ರೈತರು ತಮ್ಮ ಜಾನುವಾರುಗಳನ್ನು ಸಾಕುವುದು ಕಷ್ಟಕರವಾಗಿದೆ. ಹೀಗಾಗಿ ಸರ್ಕಾರವು ತಕ್ಷಣ ಗೋಶಾಲೆಗಳನ್ನು ತೆರೆಯುವುದರ ಜತೆಗೆ ಮೇವು ಬ್ಯಾಂಕ್‌ಗಳನ್ನು ಸ್ಥಾಪಿಸಿ, ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆ ಕಲ್ಪಿಸಿ ಜಾನುವಾರುಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು. ರಾಜ್ಯವನ್ನು ತಕ್ಷಣ ಬರಪೀಡಿತರಾಜ್ಯ ವೆಂದುಘೋಷಿಸಿ, ಕೇಂದ್ರ ಸರ್ಕಾರದಿಂದ ವಿಶೇಷ ಬರಪರಿಹಾರ ಪ್ಯಾಕೇಜ್ ಪಡೆಯಲು ಅಗತ್ಯ ಕ್ರಮಕೈಗೊಳ್ಳಬೇಕು. ಬೆಳೆ ನಷ್ಟದ ಸಮೀಕ್ಷೆಯನ್ನು ತ್ವರಿತವಾಗಿ ಪೂರ್ಣ ಗೊಳಿಸಿ, ರೈತರಿಗೆ ಸೂಕ್ತ ಪರಿಹಾರವನ್ನು ನೇರವಾಗಿ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಬೇಕೆಂದು ಒತ್ತಾಯಿಸಿದರು.ರೈತರ ಕೃಷಿ ಸಾಲ ಮನ್ನಾ ಮಾಡಿ ಹಾಗೂ ಅಗತ್ಯ ನೆರವು ಒದಗಿಸಬೇಕು. ಏಕೆಂದರೆ ಬೆಳೆ ನಷ್ಟದಿಂದ ರೈತ ಎಚ್ಚೆತ್ತುಕೊಳ್ಳಲು ಕನಿಷ್ಟ ಎರಡು ವರ್ಷಗಳಾದರೂ ಬೇಕಾಗುತ್ತದೆ. ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾನುವಾರುಗಳಿಗೆ ಮೇವು ಬ್ಯಾಂಕ್‌ಗಳನ್ನು ಸ್ಥಾಪಿಸಿ, ಉಚಿತ ಮೇವು ಮತ್ತು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಬರಪೀಡಿತ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ತುರ್ತು ಕ್ರಮ ಕೈಗೊಳ್ಳಬೇಕು. ಬೆಳೆ ವಿಮೆ ಯೋಜನೆಯಡಿ ಅರ್ಹ ರೈತರಿಗೆ ಯಾವುದೇ ವಿಳಂಬವಿಲ್ಲದೆ ಸಂಪೂರ್ಣ ವಿಮೆ ಪರಿಹಾರವನ್ನು ತ್ವರಿತವಾಗಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ಕುಮಾರಸ್ವಾಮಿ, ಬಾಬು, ರಾಮಚಂದ್ರ ಸಮುದ್ರವಳ್ಳಿ, ಬರಗೂರು ಶಂಕರ್, ಶಂಕರ್ ಪ್ರಸಾದ್ ಮತ್ತಿತರಿದ್ದರು.