ಪರಿಷ್ಕೃತ ಕನಿಷ್ಠ ವೇತನ ಹಿಂಪಡೆಯಲು ಆಗ್ರಹ

KannadaprabhaNewsNetwork |  
Published : Aug 21, 2026, 01:45 AM IST
ಪತ್ರಿಕಾಗೋಷ್ಠಿ | Kannada Prabha

ಸಾರಾಂಶ

ಒಂದು ಕಡೆ ಅಗತ್ಯ ವಸ್ತುಗಳ ಬೆಲೆ ಏರಿಕೆ, ಮತ್ತೊಂದೆಡೆ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಮಾಡಬೇಕಾದ ಅನಿವಾರ್ಯತೆ ಇರುವ ಸಂದರ್ಭದಲ್ಲಿ ಸರ್ಕಾರದ ಈ ಕ್ರಮ ಒಪ್ಪುವಂತದ್ದಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ವೇತನ ಪರಿಷ್ಕರಣೆ ಜಾರಿಯಾಗಲಿ. ಈಗಾಗಲೇ ವೇತನವನ್ನು ಕೆಲವು ಕಡೆ ಪಾವತಿಸಿರುವಾಗ ಅದನ್ನು ಏಕಾಏಕಿ ಹಿಂಪಡೆಯುವ ಮೂಲಕ ನೌಕರರನ್ನು ಗೊಂದಲಕ್ಕೆ ಸಿಲುಕಿಸಲಾಗಿದೆ. ಸರ್ಕಾರ ಕೂಡಲೇ ತನ್ನ ನಿರ್ಧಾರವನ್ನು ಮರುಪರಿಶೀಲಿಸಿ ಪರಿಷ್ಕೃತ ಕನಿಷ್ಠ ವೇತನವನ್ನು ರಾಜ್ಯಾದ್ಯಂತ ಸಮರ್ಪಕವಾಗಿ ಜಾರಿಗೊಳಿಸಬೇಕು. ನೌಕರರ ಶ್ರಮಕ್ಕೆ ತಕ್ಕ ವೇತನ ದೊರೆಯುವಂತಾಗಬೇಕು ಎಂದು ಆಗ್ರಹಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಆರೋಗ್ಯ, ವೈದ್ಯಕೀಯ ಶಿಕ್ಷಣ ಹಾಗೂ ಆಯುಷ್ ಇಲಾಖೆಗಳ ವಿವಿಧ ವೃಂದಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಪರಿಷ್ಕರಿಸಲಾಗಿದ್ದ ಕನಿಷ್ಠ ವೇತನವನ್ನು ಸರ್ಕಾರ ಹಿಂಪಡೆಯಲು ಮುಂದಾಗಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ಆ. 25ರಂದು ಹಾಸನದಲ್ಲಿ ರಾಜ್ಯಮಟ್ಟದ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಅಕ್ಷಯ್ ಡಿ. ಎಂ. ಗೌಡ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ಹೊರಗುತ್ತಿಗೆ ನೌಕರರ ಹಲವು ವರ್ಷಗಳ ಬೇಡಿಕೆಗೆ ಸ್ಪಂದಿಸಿ ಕಾರ್ಮಿಕ ಇಲಾಖೆಯು ಮೇ 22ರಂದು ಅಧಿಸೂಚನೆ ಹೊರಡಿಸಿ ಕನಿಷ್ಠ ವೇತನವನ್ನು ಪರಿಷ್ಕರಿಸಿತ್ತು. ಅದರಂತೆ ಕೆಲವು ಜಿಲ್ಲೆಗಳಲ್ಲಿ ಇಲಾಖೆಯ ಮುಖ್ಯಸ್ಥರಿಂದ ಪರಿಷ್ಕೃತ ವೇತನದ ಅನುಬಂಧ ಪಡೆದು, ಏಜೆನ್ಸಿಗಳ ಮೂಲಕ ನೌಕರರಿಗೆ ಎರಡು ತಿಂಗಳ ಪರಿಷ್ಕೃತ ವೇತನವನ್ನೂ ಪಾವತಿಸಲಾಗಿದೆ ಎಂದರು. ಆದರೆ ಜುಲೈ ೧೫ರಂದು ಆರ್ಥಿಕ ಇಲಾಖೆ ಹೊರಡಿಸಿರುವ ಅಧಿಕೃತ ಜ್ಞಾಪನದಲ್ಲಿ ಪರಿಷ್ಕೃತ ಕನಿಷ್ಠ ವೇತನವನ್ನು ಹಿಂಪಡೆಯುವ ನಿರ್ಧಾರ ಕೈಗೊಂಡಿರುವುದು ಸಾವಿರಾರು ಹೊರಗುತ್ತಿಗೆ ನೌಕರರ ಬದುಕಿಗೆ ಮತ್ತೊಂದು ಹೊಡೆತ ನೀಡಿದಂತಾಗಿದೆ. ಒಂದು ಕಡೆ ಅಗತ್ಯ ವಸ್ತುಗಳ ಬೆಲೆ ಏರಿಕೆ, ಮತ್ತೊಂದೆಡೆ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಮಾಡಬೇಕಾದ ಅನಿವಾರ್ಯತೆ ಇರುವ ಸಂದರ್ಭದಲ್ಲಿ ಸರ್ಕಾರದ ಈ ಕ್ರಮ ಒಪ್ಪುವಂತದ್ದಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ವೇತನ ಪರಿಷ್ಕರಣೆ ಜಾರಿಯಾಗಲಿ. ಈಗಾಗಲೇ ವೇತನವನ್ನು ಕೆಲವು ಕಡೆ ಪಾವತಿಸಿರುವಾಗ ಅದನ್ನು ಏಕಾಏಕಿ ಹಿಂಪಡೆಯುವ ಮೂಲಕ ನೌಕರರನ್ನು ಗೊಂದಲಕ್ಕೆ ಸಿಲುಕಿಸಲಾಗಿದೆ. ಸರ್ಕಾರ ಕೂಡಲೇ ತನ್ನ ನಿರ್ಧಾರವನ್ನು ಮರುಪರಿಶೀಲಿಸಿ ಪರಿಷ್ಕೃತ ಕನಿಷ್ಠ ವೇತನವನ್ನು ರಾಜ್ಯಾದ್ಯಂತ ಸಮರ್ಪಕವಾಗಿ ಜಾರಿಗೊಳಿಸಬೇಕು. ನೌಕರರ ಶ್ರಮಕ್ಕೆ ತಕ್ಕ ವೇತನ ದೊರೆಯುವಂತಾಗಬೇಕು ಎಂದು ಆಗ್ರಹಿಸಿದರು.

ಈ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತರುವ ಉದ್ದೇಶದಿಂದ ರಾಜ್ಯದ ವಿವಿಧ ಜಿಲ್ಲೆಗಳ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು, ತಾಲೂಕು ಅಧ್ಯಕ್ಷರು ಹಾಗೂ ಸಾವಿರಾರು ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ‘ಜಾರಿಯಾಗಲಿ, ಜಾರಿಯಾಗಲಿ ಕನಿಷ್ಠ ವೇತನ ತೊಲಗಲಿ, ತೊಲಗಲಿ ಬಡತನ’ ಎಂಬ ಘೋಷಣೆಯೊಂದಿಗೆ ಹೋರಾಟ ನಡೆಸಲಾಗುವುದು ಎಂದು ಹೇಳಿದರು. ಆ.25ರಂದು ಬೆಳಗ್ಗೆ 11 ಗಂಟೆಗೆ ಹಾಸನ ನಗರದ ಡಬಲ್ ಟ್ಯಾಂಕ್ ಮುಂಭಾಗದ ಹಳೇ ಅಂಚೆ ಕಚೇರಿ ರಸ್ತೆಯಲ್ಲಿರುವ ಸಂಘದ ಕೇಂದ್ರ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದೆ. ಮೆರವಣಿಗೆ ಹೇಮಾವತಿ ಪ್ರತಿಮೆ ತಲುಪಿದ ಬಳಿಕ 30 ನಿಮಿಷಗಳ ಕಾಲ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಗುವುದು. ನಂತರ ಎನ್.ಆರ್. ವೃತ್ತದಲ್ಲಿ ರಸ್ತೆ ತಡೆ ನಡೆಸುವುದರೊಂದಿಗೆ ಒಂದು ಗಂಟೆಗಳ ಕಾಲ ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಲಾಗುವುದು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಅವರು ವಿವರಿಸಿದರು. ಹೊರಗುತ್ತಿಗೆ ನೌಕರರ ವೇತನ ಪರಿಷ್ಕರಣೆ ವಿಚಾರದಲ್ಲಿ ಸರ್ಕಾರ ಸ್ಪಷ್ಟ ನಿಲುವು ಪ್ರಕಟಿಸಿ, ಈಗಾಗಲೇ ಪರಿಷ್ಕರಿಸಿರುವ ಕನಿಷ್ಠ ವೇತನವನ್ನು ಯಾವುದೇ ಕಾರಣಕ್ಕೂ ಹಿಂಪಡೆಯಬಾರದು. ನ್ಯಾಯಯುತ ವೇತನಕ್ಕಾಗಿ ನಡೆಯುತ್ತಿರುವ ಹೋರಾಟಕ್ಕೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸಮಿತಿ ನಿರ್ದೇಶಕ ಹಾಗೂ ಹಾಸನ ಜಿಲ್ಲಾ ಕಾರ್ಯದರ್ಶಿ ರಾಜಯ್ಯ ಆರ್‌. ಎಸ್., ಜಿಲ್ಲಾಧ್ಯಕ್ಷ ಮಂಜುನಾಥ್ ಎಚ್.ಆರ್‌., ಮನು ಮಲ್ಲೇಶ್, ಕುಮಾರ್, ಲೋಕೇಶ್ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

108.50 ಕೋಟಿ ರು. ವೆಚ್ಚದಲ್ಲಿ ವಸತಿ ಬಡಾವಣೆ ಅಭಿವೃದ್ಧಿ: ವಸತಿ ಸಚಿವ
ಸ್ಥಳ ಶುದ್ಧೀಕರಣ: ದಲಿತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ