ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕ ಡಾ. ಮಂತರ್ ಗೌಡಗೆ ಮನವಿ

KannadaprabhaNewsNetwork | Published : Jan 18, 2024 2:02 AM

ಸಾರಾಂಶ

ಜ.6ರಂದು ಮಂಡ್ಯದಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈಗಿನ ಸರ್ಕಾರಿ ನೌಕರರ ಸಮಸ್ಯೆಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಂಘದ ಸೋಮವಾರಪೇಟೆ ತಾಲೂಕು ಘಟಕದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಶಾಸಕ ಡಾ. ಮಂತರ್ ಗೌಡ ಅವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಶಾಸಕ ಡಾ. ಮಂತರ್ ಗೌಡ ಅವರಿಗೆ ಬುಧವಾರ ಮನವಿ ಸಲ್ಲಿಸಿತು.

ಜ.6ರಂದು ಮಂಡ್ಯದಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈಗಿನ ಸರ್ಕಾರಿ ನೌಕರರ ಸಮಸ್ಯೆಗಳ ಬಗ್ಗೆ ಸುಧೀರ್ಘವಾಗಿ ಚರ್ಚಿಸಲಾಗಿದೆ. ಬೇಡಿಕೆಗಳ ಈಡೇರಿಕೆಗೆ ಪೂರಕವಾಗಿ ಹೋರಾಟ ಕೈಗೊಳ್ಳುವ ಮುಂಚಿತವಾಗಿ ರಾಜ್ಯದ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರಿಗೆ ನಮ್ಮ ಸಂಘದ ಬೇಡಿಕೆಗಳನ್ನು ಈಡೇರಿಸಲು ಮನವಿ ಪತ್ರವನ್ನು ಸಲ್ಲಿಸಿ ಅವರ ಸಹಕಾರ ಮತ್ತು ಬೆಂಬಲ ಪಡೆಯಲು ಸಭೆ ನಿರ್ಣಯಿಸಿದಂತೆ ಎಲ್ಲ ಶಾಸಕರುಗಳಿಗೂ ಮನವಿ ಸಲ್ಲಿಸಲಾಗುತ್ತಿದೆ ಎಂದು ಅಧ್ಯಕ್ಷ ಪ್ರದೀಪ್ ತಿಳಿಸಿದರು.

ರಾಜ್ಯ ಸರ್ಕಾರದ ಅಧಿಕಾರಿ, ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರು ಕಾಲಕಾಲಕ್ಕೆ ವೇತನ ಹಾಗೂ ಭತ್ಯೆಗಳನ್ನು ಪರಿಷ್ಕರಣೆಯೊಂದಿಗೆ ಪಡೆಯುವುದು ಅವರ ಮೂಲಭೂತ, ನ್ಯಾಯಸಮ್ಮತ ಹಕ್ಕಾಗಿದ್ದು, ಪ್ರಸ್ತುತ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆಯಲ್ಲಿ ನೌಕರರು ಕುಟುಂಬ ನಿರ್ವಹಣೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವುದರಿಂದ ನೌಕರರ ವೇತನ ಪರಿಷ್ಕರಣೆ ಮಾಡಿ ಆರ್ಥಿಕ ವ್ಯತ್ಯಾಸಗಳನ್ನು ಸರಿಪಡಿಸುವುದು ಸರ್ಕಾರದ ಜವಾಬ್ದಾರಿಯಾಗಿರುತ್ತದೆ.

ರಾಜ್ಯ 7 ನೇ ವೇತನ ಆಯೋಗದಿಂದ ಶೀಘ್ರ ವರದಿ ಪಡೆದು ನೌಕರರ ವೇತನ ಭತ್ಯೆಗಳನ್ನು ಪೂರ್ಣ ಪ್ರಮಾಣದಲ್ಲಿ ಪರಿಷ್ಕರಿಸಿ ಆದೇಶ ಹೊರಡಿಸುವುದು, ಹಳೆ ಪಿಂಚಣೆ ಯೋಜನೆಯನ್ನು ಮರು ಜಾರಿಗೊಳಿಸುವುದು, ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ (ಕೆ.ಎ.ಎಸ್.ಎಸ್.) ಅನುಷ್ಠಾನಗೊಳಿಸುವುದು ಸೇರಿದಂತೆ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕೆಂದು ಮನವಿ ಮಾಡಿದರು.ಮನವಿ ಸಲ್ಲಿಸುವ ಸಂದರ್ಭ ತಾಲೂಕು ಘಟಕದ ಗೌರವ ಅಧ್ಯಕ್ಷ ಪ್ರಸನ್ನ, ಉಪಾಧ್ಯಕ್ಷ ದಯಾನಂದ, ಪ್ರಧಾನ ಕಾರ್ಯದರ್ಶಿ ಎನ್.ಎಂ. ನಾಗೇಶ್, ಖಜಾಂಚಿ ದಿನೇಶ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರತ್ನಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ಕೆ. ಬಸವರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Share this article