ಬೇಡಿಕೆ ಈಡೇರಿಕೆಗೆ ಅಧಿವೇಶನದಲ್ಲಿ ಒತ್ತಾಯ: ಶಾಸಕ ಭೀಮಣ್ಣ

KannadaprabhaNewsNetwork |  
Published : Oct 16, 2025, 02:01 AM IST
ಪೊಟೋ14ಎಸ್.ಆರ್.ಎಸ್1 (ಅರಣ್ಯ ಮಹಾವಿದ್ಯಾಲಯದಲ್ಲಿ ಧರಣಿ ನಿರತ ವಿದ್ಯಾರ್ಥಿಗಳನ್ನು ಶಾಸಕ ಭೀಮಣ್ಣ ನಾಯ್ಕ ಭೇಟಿಯಾದರು.) | Kannada Prabha

ಸಾರಾಂಶ

ಅರಣ್ಯದ ಬಗ್ಗೆ ಅಧ್ಯಯನ ಮಾಡಿರುವ ಅರಣ್ಯ ಶಾಸ್ತ್ರ ಪದವೀಧರರನ್ನು ಅರಣ್ಯ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಪರಿಗಣಿಸಬೇಕು.

ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಅನಿರ್ದಿಷ್ಟಾವಧಿ ಧರಣಿ ಐದನೇ ದಿನಕ್ಕೆ

ಕನ್ನಡಪ್ರಭ ವಾರ್ತೆ ಶಿರಸಿ

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯಾರಣ್ಯಾಧಿಕಾರಿ ಹುದ್ದೆ ನೇರ ನೇಮಕಾತಿಯಲ್ಲಿ ಬಿಎಸ್ಸಿ ಅರಣ್ಯ ಶಾಸ್ತ್ರ ಪದವಿಯನ್ನೇ ಕನಿಷ್ಠ ವಿದ್ಯಾರ್ಹತೆಯನ್ನಾಗಿ ಮಾಡುವಂತೆ ಆಗ್ರಹಿಸಿ, ನಗರದ ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ, ಅನಿರ್ದಿಷ್ಟಾವಧಿ ಧರಣಿ ಐದನೇ ದಿನವೂ ಮುಂದುವರೆದಿದೆ.

ಧರಣಿ ನಿರತ ವಿದ್ಯಾರ್ಥಿಗಳನ್ನು ಭೇಟಿಯಾದ ಶಾಸಕ ಭೀಮಣ್ಣ ನಾಯ್ಕ ವಿದ್ಯಾರ್ಥಿಗಳ ಮನವೊಲಿಸಲು ಪ್ರಯತ್ನಿಸಿ, ಬೇಡಿಕೆ ಈಡೇರಿಕೆಗೆ ಚಳಿಗಾಲದ ಅಧಿವೇಶನದಲ್ಲಿ ಒತ್ತಾಯಿಸುತ್ತೇನೆ ಎಂದು ಭರವಸೆ ನೀಡಿದರು.

ಅರಣ್ಯ ಶಾಸ್ತ್ರ ಸೇರುವವರು ಪಿಯುಸಿಯಲ್ಲಿ ವಿಜ್ಞಾನ ವಿಷಯ ಆಯ್ಕೆ ಮಾಡಿಕೊಂಡು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳಿಸಿ ಬಂದಿದ್ದಾರೆ. ವರ್ಷದಿಂದ ವರ್ಷಕ್ಕೆ ಈ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿ ಪಡೆದ ವಿದ್ಯಾರ್ಥಿಗಳು ಬಿಎಸ್ಸಿ ಅರಣ್ಯ ಶಾಸ್ತ್ರ ಪದವಿಯನ್ನೇ ಬೇರೆ ವಿಷಯಗಳಿಗಿಂತ ಹೆಚ್ಚು ಆಸಕ್ತಿಯಿಂದ ಆಯ್ಕೆ ಮಾಡಿಕೊಳ್ಳುತ್ತಿರುವುದು, ಪ್ರತಿಭಾವಂತ ವಿದ್ಯಾರ್ಥಿಗಳೇ ಈ ಕ್ಷೇತ್ರಕ್ಕೆ ಬರುತ್ತಿರುವುದು ಈ ಪದವಿ ವ್ಯಾಸಂಗದ ಮಹತ್ವವನ್ನು ಸೂಚಿಸುತ್ತದೆ. ಅರಣ್ಯಾಧಿಕಾರಿ ಹುದ್ದೆಯ ನೇರ ನೇಮಕಾತಿಯಲ್ಲಿ ಬಿಎಸ್ಸಿ ಅರಣ್ಯಶಾಸ್ತ್ರ ಪದವೀಧರರಿಗೆ ಮೊದಲು ನೀಡಿದ್ದ ಶೇ.75 ರಷ್ಟು ಮೀಸಲಾತಿಯನ್ನು ಶೇ.50 ಕ್ಕೆ ಕಡಿತಗೊಳಿಸಿರುವುದು ಅನ್ಯಾಯದ ಸಂಗತಿ ಎಂದು ವಿದ್ಯಾರ್ಥಿಗಳು ಶಾಸಕರ ಗಮನಕ್ಕೆ ತಂದರು.

ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ಅರಣ್ಯದ ಬಗ್ಗೆ ಅಧ್ಯಯನ ಮಾಡಿರುವ ಅರಣ್ಯ ಶಾಸ್ತ್ರ ಪದವೀಧರರನ್ನು ಅರಣ್ಯ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಪರಿಗಣಿಸಬೇಕು. ಈ ಬಗ್ಗೆ ಬೆಳಗಾವಿಯಲ್ಲಿ ನವೆಂಬರ್‌ ತಿಂಗಳಿನಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಧ್ವನಿ ಎತ್ತಿ ಸರ್ಕಾರದ ಗಮನ ಸೆಳೆಯುತ್ತೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಅರಣ್ಯ ಸಚಿವ ಈಶ್ವರ ಖಂಡ್ರೆ ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಖುದ್ದು ಭೇಟಿಯಾಗಿ ಅರಣ್ಯ ಶಾಸ್ತ್ರ ಪದವೀಧರರಿಗೆ ಆಗುತ್ತಿರುವ ಅನ್ಯಾಯದ ಕುರಿತು ಮನವರಿಕೆ ಮಾಡಿಕೊಡುತ್ತೇನೆ ಎಂದರು ಭರವಸೆ ನೀಡಿದರು.

ಅರಣ್ಯ ಮಹಾವಿದ್ಯಾಲಯದ ಡೀನ್ ಡಾ. ವಾಸುದೇವ, ಉಪನ್ಯಾಸಕರು, ವಿದ್ಯಾರ್ಥಿಗಳು ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೀಸರ್ ಸೋರಿಕೆ: ತಾಯಿ-ಮಗು ದುರ್ಮರಣ
ದೇವತೆಗಳ ಆರಾಧನೆ ಮೊಕ್ಷಸಾಧನೆ ಮೆಟ್ಟಿಲಿದ್ದಂತೆ: ಶಿರೂರು ಶ್ರೀಗಳು