ಶನಿವಾರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾದ್ಯಂತ ಮಾನವ ಸರಪಳಿ ಆಯೋಜಿಸುವ ಕುರಿತ ಪೂರ್ವಭಾವಿ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕನ್ನಡಪ್ರಭ ವಾರ್ತೆ ಮಣಿಪಾಲ
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸೆ.15ರಂದು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜನಸಾಮಾನ್ಯರಿಗೆ ತಲುಪಿಸುವ 1 ಲಕ್ಷಕ್ಕೂ ಹೆಚ್ಚು ಮಂದಿ ಭಾಗವಹಿಸುವ ಬೃಹತ್ ಮಾನವ ಸರಪಳಿಯನ್ನು ಜಿಲ್ಲೆಯಲ್ಲಿ ರಚಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು.ಅವರು ಶನಿವಾರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಜಿಲ್ಲಾದ್ಯಂತ ಮಾನವ ಸರಪಳಿ ಆಯೋಜಿಸುವ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಯುವಪೀಳಿಗೆಗೆ ಪ್ರಜಾಪ್ರಭುತ್ವದ ಮೌಲ್ಯಾನುಸಾರ ಶಕ್ತವಾಗಲು ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಜಾಗೃತಿ ಮೂಡಿಸುವುದಕ್ಕಾಗಿ ಸರ್ಕಾರ ಸೆ.15ರಂದು ಬೀದರ್‌ನಿಂದ ಚಾಮರಾಜನಗರದ ವರೆಗೆ ಮಾನವ ಸರಪಳಿ ನಿರ್ಮಿಸಿಲು ನಿರ್ಧರಿಸಿದೆ. ಅದರಂತೆ ಉಡುಪಿ ಜಿಲ್ಲೆಯಲ್ಲಿಯೂ ಅರ್ಥಪೂರ್ಣವಾಗಿ ಮಾನವ ಸರಪಳಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಉದ್ದೇಶಿಸಿದ್ದು, ಜಿಲ್ಲೆಯ ಗಡಿಭಾಗಗಳಾದ ಬೈಂದೂರು ತಾಲೂಕಿನ ಶಿರೂರು ಗ್ರಾಮದಿಂದ ಕಾಪು ತಾಲೂಕಿನ ಹೆಜಮಾಡಿ ಗ್ರಾಮದ ವರೆಗೆ 26 ಗ್ರಾ.ಪಂ. ಮೂಲಕ 100 ಕಿ.ಮೀ. ಉದ್ದದ 1 ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸುವ ಮಾನವ ಸರಪಳಿ ನಿರ್ಮಿಸಲಾಗುತ್ತದೆ ಎಂದರು.ಇದರಲ್ಲಿ ಜಿಲ್ಲೆಯ ಯುವಜನತೆ ಹಾಗೂ ಸಾರ್ವಜನಿಕರು, ಸಂಘ-ಸಂಸ್ಥೆಗಳು, ಜನಪ್ರತಿನಿಧಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.ಮಾನವ ಸರಪಳಿ ನಿರ್ಮಾಣಕ್ಕೆ ಪ್ರತೀ 100 ಮೀ. ಗೆ ಒಬ್ಬ ಮೇಲ್ವಿಚಾರಕರು, ತಾಲೂಕು ಮಟ್ಟದಲ್ಲಿ ತಹಸೀಲ್ದಾರ್‌ಗಳು ಉಸ್ತುವಾರಿ ವಹಿಸಲಿದ್ದಾರೆ. ಮಾನವ ಸರಪಳಿಯಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ಕುಡಿಯುವ ನೀರು, ತಂಪು ಪಾನೀಯ, ಸಿಹಿ ತಿಂಡಿ ವಿತರಿಸಲಾಗುತ್ತದೆ ಎಂದು ಡಿಸಿ ಹೇಳಿದ್ದಾರೆ.
ಮಾನವ ಸರಪಳಿಯಲ್ಲಿ ಭಾಗವಹಿಸುವವರಿಗೆ ನೋಂದಣಿ ಮಾಡಿಕೊಳ್ಳಲು ಆನ್ಲೈನ್ ವ್ಯವಸ್ಥೆ ಕಲ್ಪಿಸಲಾಗುವುದು. ಭಾಗವಹಿಸಿದವರಿಗೆ ಭಾವಚಿತ್ರವನ್ನು ಒಳಗೊಂಡ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಸಾರ್ವಜನಿಕರು, ಸಂಘಸಂಸ್ಥೆಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಕ್ರೀಯವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಮ್ಯೂಸಿಕ್ ಬ್ಯಾಂಡ್ಸೆಟ್, ಟ್ಯಾಬ್ಲೋಗಳು, ಸಾಂಸ್ಕೃತಿಕ ಕಲಾತಂಡಗಳು, ಸಾರ್ವಜನಿಕರು ಭಾಗವಹಿಸಲಿದ್ದಾರೆ. ಇದಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್., ಎಎಸ್ಪಿ ಸಿದ್ಧಲಿಂಗಪ್ಪ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ನಗರಸಭೆ ಪೌರಾಯುಕ್ತ ರಾಯಪ್ಪ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರುಗಳು ಹಾಗೂ ಮತ್ತಿತರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.