ಸಮಾನತೆ ಸಂದೇಶ ಸಾರಿದ ಪ್ರಜಾಪ್ರಭುತ್ವ ದಿನ

KannadaprabhaNewsNetwork | Published : Sep 16, 2024 1:52 AM

ಸಾರಾಂಶ

ಸಮಾನತೆ ಸಂದೇಶ ಸಾರಿದ ಪ್ರಜಾಪ್ರಭುತ್ವ ದಿನ

ಕನ್ನಡಪ್ರಭ ವಾರ್ತೆ ತುಮಕೂರುಜಾತಿ, ಮತ, ಧರ್ಮ ಎಂಬ ಯಾವುದೇ ಬೇಧವಿಲ್ಲದೆ ನಾವೆಲ್ಲರೂ ಒಂದೇ ಎನ್ನುವ ಮನೋಭಾವದಿಂದ ಜಿಲ್ಲೆಯ ಜನ ಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು, ಶಾಲಾ ಕಾಲೇಜಿನ ವಿದ್ಯಾರ್ಥಿ ಗಳು ಸೇರಿದಂತೆ ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಮಾನವ ಸರಪಳಿಯಲ್ಲಿ ಭಾಗವಹಿಸುವ ಮೂಲಕ ಸಂವಿಧಾನದ ಮಹತ್ವವನ್ನು ಎತ್ತಿ ಹಿಡಿದಿದ್ದಾರೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಿ. ಪರಮೇಶ್ವರ್‌ ತಿಳಿಸಿದರು. ಅಂತಾರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲೆಯ ತಾವರೆಕೆರೆ ಗ್ರಾಮ ಪಂಚಾಯಿತಿಯ ಉಜ್ಜನಕುಂಟೆ ಗ್ರಾಮದಲ್ಲಿ ಭಾರತ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಿರ್ಮಿಸಲಾಗಿದ್ದ 90 ಕಿಮೀ ಉದ್ದದ ಮಾನವ ಸರಪಳಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮಹತ್ವವನ್ನು ದೇಶದ ಎಲ್ಲಾ ಪ್ರಜೆಗಳಿಗೂ ತಿಳಿಸುವ ಉದ್ದೇಶದಿಂದ ವಿಶ್ವದಲ್ಲಿಯೇ ಮೊದಲ ಬಾರಿಗೆ ಬೀದರ್‌ನಿಂದ ಚಾಮರಾಜನಗರ ಜಿಲ್ಲೆವರೆಗೆ ಸುಮಾರು 2500 ಕಿಮೀ ಉದ್ದದ ಮಾನವ ಸರಪಳಿಯನ್ನು ರಾಜ್ಯದಲ್ಲಿ ವಿಶ್ವ ದಾಖಲೆಯಾಗುವ ರೀತಿಯಲ್ಲಿ ನಿರ್ಮಿಸಲಾಗಿದ್ದು, ಎಲ್ಲ ಜಿಲ್ಲೆಯಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ದೇಶದ ಯಾವುದೇ ರಾಜ್ಯದಲ್ಲಿ ಇಂಥ ಪ್ರಯತ್ನ ನಡೆದಿಲ್ಲ. ಇಡೀ ದೇಶಕ್ಕೆ ನಮ್ಮ ಪ್ರಯತ್ನ ಮಾದರಿಯಾಗಲಿದೆ ಎಂದು ತಿಳಿಸಿದರು.ದೇಶದಲ್ಲಿ ದೇಶದ ಪ್ರಜಾ ಪ್ರಭುತ್ವ ವ್ಯವಸ್ಥೆ ಕುರಿತು ಅರಿವು ಮೂಡಿಸಲು ರಾಜ್ಯದಾದ್ಯಂತ ಲಕ್ಷಾಂತರ ಜನರನ್ನು ಒಂದೆಡೆ ಸೇರಿಸಿ ನಿರ್ಮಿಸಿರುವ ಮಾನವ ಸರಪಳಿಯು ಹಬ್ಬದ ವಾತವರಣವನ್ನು ಸೃಷ್ಟಿಸಿದೆ ಎಂದರು. ಈ ಸಂದರ್ಭದಲ್ಲಿ ದೆಹಲಿಯ ವಿಶೇಷ ಪ್ರತಿನಿಧಿ ಟಿ. ಬಿ.ಜಯಚಂದ್ರ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯಾನಿರ್ವಹಣಾಧಿಕಾರಿ ಜಿ.ಪ್ರಭು, ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಪೋಲಿಸ್ ವರಿಷ್ಠಾಧಿಕಾರಿ ಕೆ.ವಿ ಅಶೋಕ್, ಮಹಾನಗರ ಪಾಲಿಕೆ ಆಯುಕ್ತ ಬಿ.ವಿ ಆಶ್ವೀಜ, ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಸಪ್ತಶ್ರಿ ಸೇರಿದಂತೆ ವಿವಿಧ ಸಂಘಟನೆಯ ಮುಖಂಡರು, ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.ಕಾರ್ಯಕ್ರಮದ ಬಳಿತ ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಮಾನವ ಸರಪಳಿ ಕಾರ್ಯಕ್ರಮವನ್ನು ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗಿತ್ತು. ಜಿಲ್ಲೆಯಲ್ಲಿಂದು ನಿರ್ಮಿಸಲಾದ ಮಾನವ ಸರಪಳಿಯಲ್ಲಿ ಯಾವುದೇ ಜಾತಿ,ಧರ್ಮ, ಬೇಧ-ಭಾವಗಳಿಲ್ಲದೆ 1.20 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿ ಯಶಸ್ವಿಗೊಳಿಸಿದ್ದಾರೆ. ಮಾನವ ಸರಪಳಿಯಲ್ಲಿ ನಿರೀಕ್ಷೆಗೂ ಮೀರಿ ಹೆಚ್ಚಿನ ಜನರು ಭಾಗವಹಿಸಿರುವುದು ನಮ್ಮ ಪ್ರಜಾಪ್ರಭುತ್ವದ ವೈಶಿಷ್ಟ್ಯ. ಇಂತಹ ಕಾರ್ಯಕ್ರಮಗಳು ಜನರನ್ನು ಪ್ರಜ್ಞಾವಂತರನ್ನಾಗಿ ಮಾಡುತ್ತದೆ ಎಂದು ಹೇಳಿದರು.

ಸಂವಿಧಾನ ಪೀಠಿಕೆ ಪ್ರತಿಜ್ಞೆ ಬೋಧನೆಇದಕ್ಕೂ ಮುನ್ನ ಸಚಿವರು ಮಹಾನಗರ ಪಾಲಿಕೆ ಮುಂಭಾಗ ಏರ್ಪಡಿಸಲಾಗಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂವಿಧಾನ ಪೀಠಿಕೆಯ ಪ್ರತಿಜ್ಞಾ ವಿಧಿಯನ್ನು ಬೊಧಿಸಿದರು. ನಂತರ ನಗರದ ಗ್ರಂಥಾಲಯ ಆವರಣದಲ್ಲಿ ಪ್ರಜಾ ಪ್ರಭುತ್ವ ದಿನಾಚರಣೆ ಅಂಗವಾಗಿ ಸಚಿವರು ಗಿಡ ನೆಟ್ಟು ನೀರೆರೆದರು.ಫೋಟೋ: ಅಂತಾರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲೆಯ ತಾವರೆಕೆರೆ ಗ್ರಾಮ ಪಂಚಾಯಿತಿಯ ಉಜ್ಜನಕುಂಟೆ ಗ್ರಾಮದಲ್ಲಿಂದು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಿರ್ಮಿಸಲಾಗಿದ್ದ 90 ಕಿಮೀ ಉದ್ದದ ಮಾನವ ಸರಪಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಜಿ. ಪರಮೇಶ್ವರ್‌ ಕೈ ಜೋಡಿಸಿದರು.

Share this article