ಡೆಂಘೀ ಕುರಿತು ಜಾಗೃತಿಗಾಗಿ ಕಾರ್ಯಕ್ರಮ: ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಡಾ.ವಿ.ಮಹೇಶ್

KannadaprabhaNewsNetwork |  
Published : May 20, 2024, 01:30 AM IST
19ಎಚ್ಎಸ್ಎನ್3 : ಚನ್ನರಾಯಪಟ್ಟಣದಲ್ಲಿ ರಾಷ್ಟ್ರೀಯ ಡೆಂಘೆ ದಿನಾಚರಣೆ ಪ್ರಯುಕ್ತ ಅರಿವು ಮೂಡಿಸಲು ಜಾಗೃತಿ ಜಾಥಾ ಏರ್ಪಡಿಸಲಾಗಿತ್ತು. ಆರೋಗ್ಯ ಇಲಾಖೆ ಅಧಿಕಾರಿಗಳು, ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. | Kannada Prabha

ಸಾರಾಂಶ

ತಾಲೂಕಿನಲ್ಲಿ ಡೆಂಘೀ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದ್ದು, ರೋಗ ಮತ್ತಷ್ಟು ಹರಡದಂತೆ ತಡೆಗಟ್ಟಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ಮುಖ್ಯಾಧಿಕಾರಿ ಡಾ.ವಿ.ಮಹೇಶ್ ತಿಳಿಸಿದರು. ಚನ್ನರಾಯಪಟ್ಟಣದಲ್ಲಿ ಏರ್ಪಡಿಸಿದ್ದ ಡೆಂಘೀ ಜ್ವರದ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

ಜ್ವರದ ಬಗ್ಗೆ ಜನರಿಗೆ ಅರಿವು ಮೂಡಿಸುವ ಉದ್ದೇಶ

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ತಾಲೂಕಿನಲ್ಲಿ ಡೆಂಘೀ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದ್ದು, ರೋಗ ಮತ್ತಷ್ಟು ಹರಡದಂತೆ ತಡೆಗಟ್ಟಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ಮುಖ್ಯಾಧಿಕಾರಿ ಡಾ.ವಿ.ಮಹೇಶ್ ತಿಳಿಸಿದರು.

ಪಟ್ಟಣದ ಸರ್ಕಾರಿ ಆಸ್ಪತ್ರೆ ವೃತ್ತದಲ್ಲಿ ತಾಲೂಕು ಆರೋಗ್ಯ ಇಲಾಖೆ ಹಾಗೂ ತಾಲೂಕು ಸಾರ್ವಜನಿಕ ಆಸ್ಪತ್ರೆ ಚನ್ನರಾಯಪಟ್ಟಣ ಜಂಟಿಯಾಗಿ ರಾಷ್ಟ್ರೀಯ ಡೆಂಘೀ ದಿನಾಚರಣೆ ಪ್ರಯುಕ್ತ ಏರ್ಪಡಿಸಿದ್ದ ಡೆಂಘೀ ಜ್ವರದ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಬೇಸಿಗೆಯ ಕೊನೆಯಲ್ಲಿ ಮತ್ತು ಮಳೆಗಾಲದಲ್ಲಿ ಸಾಮಾನ್ಯವಾಗಿ ಹೆಚ್ಚಿನ ಪ್ರಮಾಣದಲ್ಲಿ ಡೆಂಘ ಪ್ರಕರಣಗಳು ವರದಿಯಾಗುತ್ತವೆ. ಪ್ರಸಕ್ತ ಸಾಲಿನಲ್ಲಿ ಕೇವಲ ಒಂದು ತಿಂಗಳ ಅಂತರದಲ್ಲಿ ತಾಲೂಕಿನಲ್ಲಿ ೩೩ ಪ್ರಕರಣಗಳು ವರದಿಯಾಗಿದ್ದು, ಕಳೆದ ವರ್ಷ ೨೨ ಪ್ರಕರಣಗಳ ಅಂಕಿಅಂಶಕ್ಕೆ ಹೋಲಿಸಿದರೆ ಗಮನಾರ್ಹ ಹೆಚ್ಚಳವಾಗಿದೆ. ಹೀಗಾಗಿ ಈ ಕುರಿತು ಜಾಗೃತಿ ಮೂಡಿಸಲು ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ತಿಳಿಸಿದರು.

ಪ್ರಮುಖವಾಗಿ ಡೆಂಘೀ ಜ್ವರ ಸೊಳ್ಳೆ ಕಡಿತದಿಂದ ಉಂಟಾಗುತ್ತದೆ. ಅಲ್ಲದೆ ಅದು ಹರಡುತ್ತದೆ. ಹೀಗಾಗಿ ಸೊಳ್ಳೆ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರು ಡೆಂಘೀ ಜ್ವರದ ಲಕ್ಷಣಗಳು ಕಂಡು ಬಂದರೆ ತಕ್ಷಣ ಹತ್ತಿರದ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದುಕೊಳ್ಳಬೇಕು. ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಿ ರೋಗ ಹರಡದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

‘ರೋಗ ಬರುವುದಕ್ಕೂ ಮುಂಚಿತವಾಗಿ ನಾವು ನಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಂಡರೆ ರೋಗ ಹರಡುವುದಿಲ್ಲ, ಹೀಗಾಗಿ ತಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು, ನೀರು ಶೇಖರಣೆಯಾಗುವ ಯಾವುದೇ ಪ್ರದೇಶವಿದ್ದರೂ ಶುಚಿಗೊಳಿಸುವುದು ಅಗತ್ಯ’ ಎಂದು ತಿಳಿಸಿದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎ.ಆರ್.ಅನಿತಾ ಮಾತನಾಡಿ, ರಾಷ್ಟ್ರೀಯ ಡೆಂಘೀ ದಿನವನ್ನು ಈ ಬಾರಿ ಸಮುದಾಯದೊಂದಿಗೆ ಸೇರಿ ’ಡೆಂಘೀ ನಿಯಂತ್ರಿಸೋಣ’ ಎಂಬ ಘೋಷ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಸೊಳ್ಳೆಯಿಂದ ಹರಡುವ ರೋಗವು ಸೋಂಕಿತ ಈಡಿಸ್ ಸೊಳ್ಳೆಗಳ ಕಡಿತದ ಮೂಲಕ ಜನರಿಗೆ ಹರಡುತ್ತದೆ, ಮುಂಬರುವ ಮುಂಗಾರು ಹಂಗಾಮ ಮತ್ತು ತಾಲೂಕಿನಾದ್ಯಂತ ಪ್ರಚಲಿತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಘೀ ನಿಯಂತ್ರಣ ಕ್ರಮಗಳನ್ನು ತೀವ್ರಗೊಳಿಸುವುದು ಅನಿವಾರ್ಯವಾಗಿದೆ ಎಂದು ಹೇಳಿದರು.

ಪಟ್ಟಣದ ಸರ್ಕಾರಿ ಆಸ್ಪತ್ರೆ ವೃತ್ತದಲ್ಲಿ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಏರ್ಪಡಿಸಿದ್ದ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು ಡೆಂಘೀ ನಿಯಂತ್ರಣದ ಘೋಷವಾಕ್ಯ ಕೂಗುತ್ತ ಆಸ್ಪತ್ರೆ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಡೆಂಘೀ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿದರು.

ಜಿಲ್ಲಾ ಆರೋಗ್ಯ ನಿರೀಕ್ಷಣಾಧಿಕಾರಿ ನಿಂಗೇಗೌಡ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪುಷ್ಪಲತಾ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶಿವಲಿಂಗಯ್ಯ, ನಂಜುಂಡ ಪ್ರಸಾದ್, ಹಿರಿಯ ಆರೋಗ್ಯ ಸುರಕ್ಷತಾ ಅಧಿಕಾರಿ ವಿಶಾಲಾಕ್ಷಿ, ಪ್ರಯೋಗಶಾಲಾ ತಂತ್ರಜ್ಞಾನ ಅಧಿಕಾರಿ ಮಂಜೇಗೌಡ, ಆಶಾ, ಮೇಲ್ವಿಚಾರಕಿ ಶೋಭಾ, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿ ಕೋಮಲಾ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವೈಯಕ್ತಿಕ ಕಾರಣದಿಂದ ಬೇಸತ್ತು ಕಿರುತೆರೆ ಯುವ ನಟಿ ಆತ್ಮ*ತ್ಯೆ
ಜ.6 ಇಲ್ಲವೇ 9ಕ್ಕೆ ಡಿಕೆಶಿ ಸಿಎಂ 200% ಕನ್ಫರ್ಮ್: ಇಕ್ಬಾಲ್