ಮನೆಯ ಸುತ್ತಮುತ್ತ ಹಾಗೂ ಪರಿಸರದಲ್ಲಿ ಸ್ವಚ್ಛತೆ ಕಾಪಾಡುವುದರ ಜತೆಗೆ, ಸೊಳ್ಳೆಗಳಿಗೆ ಆಶ್ರಯ ತಾಣವಾದ ನೀರು ನಿಲ್ಲದಂತೆ ಎಚ್ಚರ ವಹಿಸುವ ಮೂಲಕ ಡೆಂಘೀ ನಿಯಂತ್ರಣ ಸಾಧ್ಯವಾಗಲಿದೆ.
ಕಾರವಾರ: ಡೆಂಘೀ ನಿಯಂತ್ರಣ ಆರೋಗ್ಯ ಇಲಾಖೆಯ ಜವಾಬ್ದಾರಿ ಮಾತ್ರವಲ್ಲ. ಸಮುದಾಯದಲ್ಲಿನ ಪ್ರತಿಯೊಬ್ಬ ಸಾರ್ವಜನಿಕರ ಜವಾಬ್ದಾರಿಯೂ ಆಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಡೆಂಘೀ ದಿನ ಪ್ರಯುಕ್ತ ಗುರುವಾರ ಆಯೋಜಿಸಿದ್ದ ಜಾಥಾ ಮತ್ತು ಮಾನವ ಸರಪಳಿ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸಿ ಮಾತನಾಡಿ, ಮನೆಯ ಸುತ್ತಮುತ್ತ ಹಾಗೂ ಪರಿಸರದಲ್ಲಿ ಸ್ವಚ್ಛತೆ ಕಾಪಾಡುವುದರ ಜತೆಗೆ, ಸೊಳ್ಳೆಗಳಿಗೆ ಆಶ್ರಯ ತಾಣವಾದ ನೀರು ನಿಲ್ಲದಂತೆ ಎಚ್ಚರ ವಹಿಸುವ ಮೂಲಕ ಡೆಂಘೀ ನಿಯಂತ್ರಣ ಸಾಧ್ಯವಾಗಲಿದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕಾಗಿದ್ದು, ಸಮುದಾಯದ ಪ್ರತಿಯೊಬ್ಬರ ಸಹಭಾಗಿತ್ವದಿಂದ ಡೆಂಘೀ ನಿರ್ಮೂಲನೆ ಸಾಧ್ಯವಾಗಲಿದೆ ಎಂದರು.
ಮಳೆಗಾಲದಲ್ಲಿ ಡೆಂಘೀ ಉಲ್ಬಣಗೊಳ್ಳುವ ಸಾಧ್ಯತೆಗಳಿದ್ದು, ಮನೆ ಸುತ್ತಮುತ್ತಲಿನ ಪರಿಸರದಲ್ಲಿ ಮಳೆ ನೀರು ನಿಲ್ಲದಂತೆ ಜಾಗೃತಿ ವಹಿಸಬೇಕು. ಸ್ವಯಂ ರಕ್ಷಣಾ ವಿಧಾನಗಳಾದ ಸೊಳ್ಳೆ ನಿರೋಧಕ ಹಾಗೂ ಸೊಳ್ಳೆ ಪರದೆಗಳನ್ನು ಬಳಸುವ ಮೂಲಕ ಸೊಳ್ಳೆಗಳು ಕಚ್ಚದಂತೆ ಎಚ್ಚರವಹಿಸುವ ಮೂಲಕ ಡೆಂಘೀಯಿಂದ ರಕ್ಷಣೆ ಪಡೆಯುವಂತೆ ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನೀರಜ್ ಬಿ.ವಿ., ಜಿಲ್ಲಾ ವಾರ್ತಾಧಿಕಾರಿ ಬಿ. ಶಿವಕುಮಾರ್, ಆರ್‌ಸಿಎಚ್ಒ ಡಾ. ನಟರಾಜ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಕ್ಯಾ. ರಮೇಶ ರಾವ್, ತಾಲೂಕು ಆರೋಗ್ಯಾಧಿಕಾರಿ ಡಾ. ಸೂರಜಾ ನಾಯಕ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸವರಾಜ ಕನ್ನಕ್ಕನವರ್, ವಿವಿಧ ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.