ಆರೋಗ್ಯ ಕೇಂದ್ರಗಳಲ್ಲಿ ಡೆಂಘೀ ತಪಾಸಣೆ ಕಡ್ಡಾಯ: ಜಿಪಂ ಸಿಇಒ

KannadaprabhaNewsNetwork |  
Published : Jul 22, 2024, 01:15 AM IST
ಜಿಪಂ ಸಿಇಓ ರಾಹುಲ ಶಿಂಧೆ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾಸಭೆ ನಡೆಸಿದರು | Kannada Prabha

ಸಾರಾಂಶ

ಡೆಂಘೀ ಮಹಾಮಾರಿ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಡೆಂಘೀ ನಿಯಂತ್ರಣ ಹಾಗೂ ಕೈಗೊಳ್ಳಬೇಕಾದ ಸುರಕ್ಷಾ ಕ್ರಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ಜಿಲ್ಲೆಯ ಪ್ರತಿ ಆರೋಗ್ಯ ಕೇಂದ್ರಗಳಲ್ಲಿ ಡೆಂಘೀ ತಪಾಸಣೆ ಕಡ್ಡಾಯವಾಗಿ ಜರುಗಿಸುವಂತೆ ಜಿಪಂ ಸಿಇಒ ರಾಹುಲ್‌ ಶಿಂಧೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಡೆಂಘೀ ಮಹಾಮಾರಿ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಡೆಂಘೀ ನಿಯಂತ್ರಣ ಹಾಗೂ ಕೈಗೊಳ್ಳಬೇಕಾದ ಸುರಕ್ಷಾ ಕ್ರಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ಜಿಲ್ಲೆಯ ಪ್ರತಿ ಆರೋಗ್ಯ ಕೇಂದ್ರಗಳಲ್ಲಿ ಡೆಂಘೀ ತಪಾಸಣೆಯನ್ನು ಕಡ್ಡಾಯವಾಗಿ ಜರುಗಿಸುವಂತೆ ಆರೋಗ್ಯಾಧಿಕಾರಿಗಳಿಗೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್‌ ಶಿಂಧೆ ಸೂಚನೆ ನೀಡಿದರು.

ಜಿಪಂ ಸಭಾಂಗಣದಲ್ಲಿ ಜರುಗಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕಳೆದ ಜನವರಿಯಿಂದ ಜುಲೈ ಅಂತ್ಯದವರೆಗೆ 1757 ಡೆಂಘೀ ಮಾದರಿಗಳನ್ನು ಪರೀಕ್ಷಿಸಿದ್ದು, ಅದರಲ್ಲಿ 260 ಪಾಸಿಟಿವ್ ಪ್ರಕರಣ ಕಂಡು ಬಂದಿವೆ. ಪ್ರಕರಣಗಳು ಹೆಚ್ಚಾಗಿ ಕಂಡು ಬಂದಿರುವ ಪ್ರದೇಶಗಳಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ನಿಯಮಿತವಾಗಿ ಪರೀಕ್ಷೆ ನಡೆಸಿ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಪ್ರತಿ ಮನೆಗೆ ಭೇಟಿ ನೀಡಿ, ನೀರು ತುಂಬಿಟ್ಟ ಎಲ್ಲ ಪರಿಕರಗಳನ್ನು ಕೂಲಂಕುಷವಾಗಿ ಪರೀಕ್ಷಿಸಿ ಲಾರ್ವಾ ಕಂಡು ಬಂದ ಪರಿಕರ ಸ್ವಚ್ಛಗೊಳಿಸಬೇಕು. ಈ ಪ್ರಕ್ರಿಯೆ ನಿರಂತರವಾಗಿ ಜಿಲ್ಲೆಯಾದ್ಯಂತ ಜರುಗಿಸುವುದರ ಮೂಲಕ ಡೆಂಘೀ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಾಗೃತಿ ಮೂಡಿಸಲು ಸೂಚಿಸಿದರು.

ಜಿಲ್ಲೆಯಲ್ಲಿನ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಡೆಂಘೀ ಪರೀಕ್ಷೆಗೆ ಬೇಕಾಗುವ ಆರ್.ಡಿ.ಕೆ ಕಿಟ್‌ ಗಳು ಲಭ್ಯವಿರುವಂತೆ ನೋಡಿಕೊಳ್ಳಬೇಕು. ಡೆಂಘೀ ಜ್ವರದಿಂದ ಬಳಲುತ್ತಿರುವ ಸೋಂಕಿತರ ಚಿಕಿತ್ಸೆ ನೀಡುವಲ್ಲಿ ಉದಾಸೀನತೆ ತೋರದೆ ಆದ್ಯತೆನೀಡುವಂತೆ ತಿಳಿಸಿದರು.

ಮಕ್ಕಳ ಆರೋಗ್ಯ ತಪಾಸಣೆ: ಮಕ್ಕಳಿಗೆ ಸಾಂಕ್ರಾಮಿಕ ರೋಗ ತಡೆ ಸೇರಿದಂತೆ ವಿವಿಧ ಲಸಿಕೆಗಳಿಂದ ವಂಚಿತರಾಗದಂತೆ ನಿಗಾವಹಿಸಬೇಕು. ಈ ಕಾರ್ಯದಲ್ಲಿ ಆರೊಗ್ಯ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು. ಪ್ರತಿ ತಿಂಗಳು ಮೂರನೇ ಶನಿವಾರ ಜಂಟಿ ಸಭೆ ನಡೆಸಿ ಮಕ್ಕಳ ಲಸಿಕಾ ಕಾರ್ಯಕ್ರಮದ ಬಗ್ಗೆ ಚರ್ಚಿಸಿ ಯಾವುದೇ ಕಾರಣಕ್ಕೂ ಮಕ್ಕಳು ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಆರ್.ಬಿ.ಎಸ್.ಕೆ ತಂಡದಿಂದ ನಿಯಮಿತವಾಗಿ ಮಕ್ಕಳ ಆರೋಗ್ಯ ತಪಾಸಣೆ ನಡೆಸಿದ ಮಕ್ಕಳಲ್ಲಿ ನೂನ್ಯತೆಗಳು ಕಂಡು ಬಂದಲ್ಲಿ ಅಂತಹ ಮಕ್ಕಳ ಮಾಹಿತಿಯನ್ನು ತಾಲೂಕು ಆರೋಗ್ಯ ಅಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳೊಂದಿಗೆ ಹಂಚಿಕೊಂಡು ಅಂತಹ ಮಕ್ಕಳ ಚಿಕಿತ್ಸೆಗೆ ಕ್ರಮ ಜರುಗಿಸಬೇಕು ಎಂದು ಹೇಳಿದರು.

ಜಿಲ್ಲೆಯ ಅಂಗನವಾಡಿ ಹಾಗೂ ಶಾಲೆಗಳಲ್ಲಿ ಶ್ರವಣ ದೊಷದಿಂದ ಬಳಲುತ್ತಿರುವ ಮಕ್ಕಳಿಗೆ ಬೇಕಾದ ಶ್ರವಣ ಸಾಧನಗಳ ವಿವರ ಒದಗಿಸಲು ತಿಳಿಸಿದ ಅವರು, ನಮ್ಮ ಕ್ಲಿನಿಕ್‌ಗಳ ಸ್ಥಾಪನೆಗೆ ಬೇಕಾದ ನಿವೇಶನಗಳನ್ನು ಆದಷ್ಟು ಬೇಗ ಗುರುತಿಸಬೇಕು. ಈ ಕುರಿತು ಸ್ಥಳೀಯ ಶಾಸಕರೊಂದಿಗೆ ನಿರಂತರ ಸಮನ್ವಯ ಸಾಧಿಸುವುದರ ಮೂಲಕ ಶೀಘ್ರವೇ ನಮ್ಮ ಕ್ಲಿನಿಕ್‌ಗಳ ಸ್ಥಾಪನೆಗೆ ಕ್ರಮ ಜರುಗಿಸುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿ(ಅಭಿವೃದ್ಧಿ) ಬಸವರಾಜ ಅಡವಿಮಠ, ಮುಖ್ಯ ಯೋಜನಾಧಿಕಾರಿ ಗಂಗಾಧರ ದಿವಟರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಹೇಶ ಕೋಣಿ, ಅಪರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್ .ಎಸ್. ಗಡೇದ, ಜಿಲ್ಲಾ ಶಸ್ತ್ರ ಚಿಕಿತ್ಸಕರು ಡಾ.ವಿ.ವಿ ಶಿಂಧೆ, ಜಿಲ್ಲಾ ಆಯುಷ್‌ ಅಧಿಕಾರಿ ಡಾ.ಶ್ರೀಕಾಂತ ಸುಣಧೋಳಿ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ಚೇತನ ಕಂಕಣವಾಡಿ, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಚಾಂದನಿ ದೇವಡಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಗೀತಾ ಕಾಂಬಳೆ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ವಿಶ್ವನಾಥ ಭೋವಿ, ಜಿಲ್ಲಾ ರೋಗವಾಹಕ ಆಶ್ರೀತರೋಗಗಳ ನಿಯಂತ್ರಣಾ ಅಧಿಕಾರಿ ಡಾ.ವಿವೇಕ ಹೊನ್ನಳ್ಳಿ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ಸಂಜಯ ದೊಡಮನಿ ಹಾಗೂ ತಾಲೂಕಾ ಆರೋಗ್ಯ ಅಧಿಕಾರಿಗಳು ಮತ್ತು ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳು, ಎನ್.ಎಚ್.ಎಂ ಸಿಬ್ಬಂದಿ ಉಪಸ್ಥಿತರಿದ್ದರು.ಜಿಲ್ಲೆಯ ಪ್ರತಿಯೊಂದು ತಾಲೂಕು ಆಸ್ಪತ್ರೆಗಳಲ್ಲಿ 10 ಅಪೌಷ್ಟಿಕ ಮಕ್ಕಳನ್ನು ಗುರುತಿಸಿ ಅಂತಹ ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿರುವ ಚಿಕ್ಕ ಮಕ್ಕಳ ತಜ್ಞರು ಪೌಷ್ಟಿಕ ಪುನಶ್ಚೇತನ ಕೇಂದ್ರಗಳನ್ನು ಸ್ಥಾಪಿಸಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಚಿಕಿತ್ಸೆ ನೀಡಬೇಕು. ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು ಅನುಸರಿಸಬೇಕಾದ ಆಹಾರ ಪದ್ಧತಿಯ ಕುರಿತು ಪಾಲಕರಿಗೆ ಮನವರಿಕೆ ಮಾಡಿಕೊಡಬೇಕು.

--ರಾಹುಲ್ ಶಿಂಧೆ, ಜಿಪಂ ಸಿಇಒ ಬೆಳಗಾವಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!