ಖಾಸಗಿ ಆಸ್ಪತ್ರೆಗಳಿಗೂ ಡೆಂಘೀ ಪರೀಕ್ಷೆ ದರ ನಿಗದಿ: ದಿನೇಶ್

KannadaprabhaNewsNetwork | Published : Jul 3, 2024 12:18 AM

ಸಾರಾಂಶ

ಡೆಂಘೀ ಪ್ರಕರಣಗಳ ಪರೀಕ್ಷೆಗೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಗಳಿಗೂ ದರ ನಿಗದಿ ಮಾಡಿ, ಬುಧವಾರ ಈ ಕುರಿತು ಸುತ್ತೋಲೆ ಹೊರಡಿಸುವಂತೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಡೆಂಘೀ ಪ್ರಕರಣಗಳ ಪರೀಕ್ಷೆಗೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಗಳಿಗೂ ದರ ನಿಗದಿ ಮಾಡಿ, ಬುಧವಾರ ಈ ಕುರಿತು ಸುತ್ತೋಲೆ ಹೊರಡಿಸುವಂತೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಹೆಚ್ಚುತ್ತಿರುವ ಡೆಂಗೀ ಪ್ರಕರಣ ನಿಯಂತ್ರಣ ಸಂಬಂಧ ವಿಧಾನಸೌಧದಲ್ಲಿ ಮಂಗಳವಾರ ಆರೋಗ್ಯ ಇಲಾಖೆ, ಬಿಬಿಎಂಪಿ, ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಡೆಂಘೀ ನಿಯಂತ್ರಿಸಲು ಕಠಿಣ ಕ್ರಮ ಕೈಗೊಳ್ಳಬೇಕು. ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಡೆಂಘೀ ಪಾಸಿಟಿವ್‌ ಪ್ರಕರಣಗಳ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡುವಂತೆ ಕ್ರಮ ಕೈಗೊಳ್ಳಬೇಕು ಎಂದರು.ರಾಜ್ಯದಲ್ಲಿ ಕಳೆದ ಸಾಲಿಗೆ ಹೋಲಿಸಿದರೆ ಈ ಬಾರಿ ಡೆಂಘೀ ಪ್ರಕರಣಗಳ ಪರೀಕ್ಷೆಯಲ್ಲಿ ಶೇ.42ರಷ್ಟು ಹೆಚ್ಚಳವಾಗಿದೆ. ಸಾಧ್ಯವಾದಷ್ಟು ಮುಂಚಿತವಾಗಿ ಡೆಂಘೀ ಪಾಸಿಟಿವ್‌ ಪ್ರಕರಣಗಳನ್ನು ಪತ್ತೆ ಮಾಡಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳು ಹೆಚ್ಚಿನ ನಿಗಾವಹಿಸಬೇಕು ಎಂದು ಸೂಚಿಸಿದರು.ಸಭೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ದಿನೇಶ್‌ ಗುಂಡೂರಾವ್‌, ರಾಜ್ಯದಲ್ಲಿ ಜನವರಿಯಿಂದ ಜೂನ್ ಅಂತ್ಯದವರೆಗೆ 6,187 ಡೆಂಘೀ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, 6 ಮಂದಿ ಸಾವಿಗೀಡಾಗಿದ್ದಾರೆ. ಮರಣ ಪ್ರಮಾಣ ಶೇ. 0.09ರಷ್ಟಿದೆ. ಸಾವುಗಳನ್ನು ತಡೆಯುವ ನಿಟ್ಟಿನಲ್ಲಿ ಹೆಚ್ಚಿನ ನಿಗಾವಹಿಸಲು ಸೂಚಿಸಲಾಗಿದೆ. ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಹಾವೇರಿ, ಚಿತ್ರದುರ್ಗ, ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರಕರಣಗಳು ಹೆಚ್ಚಾಗಿ ಕಂಡುಬಂದಿವೆ ಎಂದು ವಿವರಿಸಿದರು. ಎಲ್ಲ ಸರ್ಕಾರಿ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆಗೆ ಬೇಕಾಗುವ ಎಲ್ಲ ವ್ಯವಸ್ಥೆ ಕಲ್ಪಿಸಲಾಗಿದೆ. ಡೆಂಘೀ ನಿಯಂತ್ರಿಸಲು ಈಡಿಸ್‌ ಸೊಳ್ಳೆ ಹಾಗೂ ಲಾರ್ವಾ ಉತ್ಪತ್ತಿ ಬಗ್ಗೆ ಜನರಿಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಬೇಕು ಎಂದು ಸೂಚಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಪ್ರತಿ ಮನೆಗೆ ಭೇಟಿ ನೀಡಿ ಡೆಂಘೀ ಬಗ್ಗೆ ಜನರಿಗೆ ತಿಳಿ ಹೇಳಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮೆಡಿಕಲ್‌ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರುವ ಪ್ರತಿ ಶಾಲೆಗೆ ಭೇಟಿ ನೀಡಿ ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು. ಈಗಾಗಲೇ ವಿಜ್ಞಾನ ಶಿಕ್ಷಕರಿಗೆ ಡೆಂಘೀ ಹಾಗೂ ಲಾರ್ವಾ ನಾಶದ ಬಗ್ಗೆ ತರಬೇತಿ ನೀಡಲಾಗಿದೆ. ಹಾಗೆಯೇ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಿ ಶಿಕ್ಷಕರು ಕೈಗೊಳ್ಳುವ ಮುಂಜಾಗ್ರತಾ ಕ್ರಮಗಳ ಕುರಿತಂತೆ ಮೇಲ್ವಿಚಾರಣೆ ನಡೆಸಬೇಕು ಎಂದು ತಿಳಿಸಲಾಗಿದೆ ಎಂದರು. ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್‌ ಇತರರಿದ್ದರು.ಪ್ರತಿ ಶುಕ್ರವಾರ ಡೆಂಘೀ ನಿಯಂತ್ರಣ ಅಭಿಯಾನ

ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆಯ ಎಲ್ಲ ಅಧಿಕಾರಿಗಳು ಪ್ರತಿ ಶುಕ್ರವಾರ ತಮ್ಮ ವ್ಯಾಪ್ತಿಯಲ್ಲಿ ಪರಿಶೀಲನೆ ನಡೆಸಬೇಕು. ಲಾರ್ವಾ ನಾಶಕ್ಕೆ ತೆಗೆದುಕೊಳ್ಳುತ್ತಿರುವ ಕ್ರಮಗಳನ್ನು ಪರಿಶೀಲಿಸಬೇಕು. ಕಟ್ಟಡ ನಿರ್ಮಾಣದಲ್ಲಿ ತೊಡಗಿರುವ ಸಂಸ್ಥೆಗಳ ಜತೆಗೆ ಬಿಬಿಎಂಪಿ ಆಯುಕ್ತರು ಸಭೆ ನಡೆಸಬೇಕು. ನಿರ್ಮಾಣ ಕಾಮಗಾರಿಯಲ್ಲಿ ಸಂಗ್ರಹವಾಗಿರುವ ನೀರಿನಲ್ಲಿ ಲಾರ್ವಾ ನಾಶಪಡಿಸಲು ಕ್ರಮ ಕೈಗೊಳ್ಳುವಂತೆ ದಿನೇಶ್‌ ಗುಂಡೂರಾವ್‌ ಅಧಿಕಾರಿಗಳಿಗೆ ಸೂಚಿಸಿದರು.

Share this article