)
ಮಡಿಕೇರಿ: ರಾಷ್ಟ್ರೀಯ ಹಾಗೂ ರಾಜ್ಯ ಜಲ ನೀತಿ ಅನ್ವಯ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕಿರುವ ಕಾರಣ ಜಲಾಶಯದಲ್ಲಿ ಪ್ರಸ್ತುತ ಲಭ್ಯವಿರುವ ನೀರನ್ನು ಮುಂಬರುವ ದಿನಗಳಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ಕಾಯ್ದಿರಿಸಿಕೊಂಡು ಬಳಸಲು ಸೂಚನೆ ನೀಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಪೂರ್ವ ಮುಂಗಾರು ಮತ್ತು ಮುಂಗಾರು ದುರ್ಬಲವಾಗಿರುವುದರಿಂದ ಜಲಾಶಯಗಳಲ್ಲಿ ಪ್ರಸ್ತುತ ಲಭ್ಯವಿರುವ ನೀರಿನ ಪ್ರಮಾಣವು ಕಡಿಮೆ ಇರುವುದರಿಂದ ಕೇವಲ ಕುಡಿಯುವ ನೀರಿನ ಅಗತ್ಯವನ್ನು ಪೂರೈಸಲು ಮಾತ್ರ ಸಾಕಾಗುವಂತಿರುವ ಹಿನ್ನೆಲೆಯಲ್ಲಿ ಪ್ರಸಕ್ತ ಪರಿಸ್ಥಿತಿಯಲ್ಲಿ ಕೃಷಿ ಬೆಳೆಗಳಿಗೆ ನೀರು ಹರಿಸುವುದು ಕಷ್ಟಸಾಧ್ಯವಾಗುತ್ತದೆ.
ಸರ್ಕಾರವು ಜಲಾಶಯದ ನೀರಿನ ಮಟ್ಟ, ಮಳೆಯ ಪ್ರಮಾಣ ಹಾಗೂ ಒಳಹರಿವಿನ ಸ್ಥಿತಿಗತಿಗಳನ್ನು ನಿರಂತರವಾಗಿ ಪರಿಶೀಲಿಸುತ್ತಿದ್ದು, ಪರಿಸ್ಥಿತಿಯಲ್ಲಿ ಅನುಕೂಲಕರ ಬದಲಾವಣೆಯಾದಲ್ಲಿ ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂಬ ಅಂಶವನ್ನು ತಿಳಿಸಿದೆ. ನೀರಿನ ಸಂಪನ್ಮೂಲಗಳ ಸುಸ್ಥಿರ ಬಳಕೆ ಹಾಗೂ ರೈತರ ಹಿತದೃಷ್ಟಿಯಿಂದ ಎಲ್ಲಾ ರೈತರು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ.