16ರಿಂದ ಉಪಲೋಕಾಯುಕ್ತ ನ್ಯಾ.ವೀರಪ್ಪ ಜಿಲ್ಲೆಗೆ ಭೇಟಿ

KannadaprabhaNewsNetwork | Published : Jan 11, 2025 12:49 AM

ಸಾರಾಂಶ

ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆ ನಡೆಸುವರು.

ಬಳ್ಳಾರಿ: ಇದೇ ಜ.16, 17, 18ರಂದು ಬಳ್ಳಾರಿ ಜಿಲ್ಲೆಗೆ ಕರ್ನಾಟಕ ಉಪಲೋಕಾಯುಕ್ತ ನ್ಯಾ.ಬಿ.ವೀರಪ್ಪ ಭೇಟಿ ನೀಡಲಿದ್ದು, ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಗೆ ಸಲ್ಲಿಕೆಯಾದ ಲೋಕಾಯುಕ್ತ ದೂರುಗಳಿಗೆ ಸಂಬಂಧಿಸಿದಂತೆ ಅಗತ್ಯ ಮಾಹಿತಿಯೊಂದಿಗೆ ಸಿದ್ಧರಿರುವಂತೆ ಜಿಲ್ಲಾಧಿಕಾರಿ ಪ್ರಶಾಂತಕುಮಾರ್ ಮಿಶ್ರಾ ಅಧಿಕಾರಿಗಳಿಗೆ ಸೂಚಿಸಿದರು.

ಉಪಲೋಕಾಯುಕ್ತರ ಭೇಟಿ ಹಿನ್ನೆಲೆಯಲ್ಲಿ ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.

ಜಿಲ್ಲೆಗೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ ದಾಖಲಾದ ದೂರು ಪ್ರಕರಣಗಳ ಕುರಿತು ಜ.18ರಂದು ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಉಪಲೋಕಾಯುಕ್ತರು ವಿಚಾರಣೆ ನಡೆಸಲಿದ್ದು, ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ದಾಖಲೆ ಹಾಗೂ ಮಾಹಿತಿಯೊಂದಿಗೆ ಹಾಜರಾಗುವಂತೆ ಅವರು ತಿಳಿಸಿದರು.

ಜ.18ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಮತ್ತು ಮಧ್ಯಾಹ್ನ 2.30ರಿಂದ ಸಂಜೆ 5 ಗಂಟೆಯವರೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಜಿಲ್ಲೆಗೆ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ತನಿಖೆ/ವಿಚಾರಣೆಗೆ ಬಾಕಿಯಿರುವ ಪ್ರಕರಣಗಳಲ್ಲಿ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ವಿಚಾರಣೆ ನಡೆಸುತ್ತಾರೆ ಎಂದರು.

ಜ.17ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಮತ್ತು ಮಧ್ಯಾಹ್ನ 2.30ರಿಂದ ಸಂಜೆ 5 ಗಂಟೆಯವರೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆ ನಡೆಸುವರು. ಜಿಲ್ಲೆಯಲ್ಲಿ ಯಾರಿಗಾದರೂ ಸರ್ಕಾರಿ ಅಧಿಕಾರಿ, ನೌಕರರಿಂದ ತಮಗೆ ಕಾನೂನು ರೀತ್ಯಾ ಆಗಬೇಕಾದ ಕೆಲಸದಲ್ಲಿ ವಿಳಂಬವೇನಾದರೂ ಆಗಿದ್ದರೆ ಅಥವಾ ಅಧಿಕಾರಿ, ನೌಕರರು ಯಾವುದೇ ತರಹದ ಭ್ರಷ್ಟಾಚಾರದಲ್ಲಿ ತೊಡಗಿದ್ದರೆ, ಅದರಿಂದ ತೊಂದರೆಗೊಳಗಾದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಬಹುದಾಗಿದ್ದು, ಈ ವೇಳೆ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ಸ್ಥಳದಲ್ಲಿ ಉಪಸ್ಥಿತರಿರಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ ಕುಮಾರ್ ಮಿಶ್ರಾ ಅವರು ತಿಳಿಸಿದರು.

ಉಪಲೋಕಾಯುಕ್ತ ನ್ಯಾ.ಬಿ.ವೀರಪ್ಪ ಭೇಟಿ ಹಿನ್ನೆಲೆಯಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳು ತಪ್ಪದೇ ಕೇಂದ್ರ ಸ್ಥಾನದಲ್ಲಿದ್ದು ಕರ್ತವ್ಯ ನಿರ್ವಹಿಸಬೇಕು. ಅಧಿಕಾರಿಗಳು ಉಪಲೋಕಾಯುಕ್ತರ ಭೇಟಿ ವೇಳೆ ಗೈರು ಹಾಜರಾಗಿರುವುದು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಜಿಪಂಸಿಇಒ ರಾಹುಲ್ ಶರಣಪ್ಪ ಸಂಕನೂರ ಮಾತನಾಡಿ, ಜ.16ರಂದು ಉಪಲೋಕಾಯುಕ್ತರು ಜಿಲ್ಲೆಯ ಹಾಸ್ಟೆಲ್, ಕಚೇರಿಗಳು, ಅಂಗನವಾಡಿ ಕೇಂದ್ರ, ಆಸ್ಪತ್ರೆಗಳಿಗೆ ಅನಿರೀಕ್ಷಿತ ಭೇಟಿ ಪರಿಶೀಲನೆ ನಡೆಸುವರು. ಎಲ್ಲಾ ಅಧಿಕಾರಿಗಳು ತಮ್ಮ ಕಚೇರಿ ಸೇರಿದಂತೆ ಕಚೇರಿ ಆವರಣಗಳನ್ನು ಸ್ವಚ್ಛವಾಗಿಟ್ಟುಸಿಕೊಳ್ಳಬೇಕು ಎಂದರು.

ಎಡಿಸಿ ಮಹಮ್ಮದ್ ಝುಬೇರ್, ಎಎಸ್ಪಿ ನವೀನ್ ಕುಮಾರ್, ಲೋಕಾಯುಕ್ತ ಬಳ್ಳಾರಿ ವಿಭಾಗದ ಎಸ್ಪಿ ಸಿ.ಸಿದ್ದರಾಜು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Share this article