ಹಾವೇರಿ: ಚುನಾವಣಾ ಪೂರ್ವಸಿದ್ಧತೆ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಸಮರ್ಪಕವಾಗಿ ಕೈಗೊಳ್ಳುವ ಉದ್ದೇಶದಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಗುರುವಾರ ಹಾನಗಲ್ಲ ತಾಲೂಕಿನ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮತಗಟ್ಟೆಗಳಿಗೆ ಭೇಟಿ: ಹಾನಗಲ್ಲ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಗುಣಮಟ್ಟ ಮತ್ತು ನಿಖರತೆಯನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾಧಿಕಾರಿಗಳು ಮತಗಟ್ಟೆಗಳಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕೊಪ್ಪರಸಿಕೊಪ್ಪ ಗ್ರಾಮದ ಮತಗಟ್ಟೆ, ಶಿಗಿಹಳ್ಳಿ ಗ್ರಾಮದ ಮತಗಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮತದಾರರ ಪಟ್ಟಿಯಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡುವ ಸಂಬಂಧ ಸ್ವೀಕೃತವಾಗಿರುವ ನಮೂನೆ-8ರ ಅರ್ಜಿಗಳ ನೈಜತೆಯನ್ನು ಸ್ಥಳದಲ್ಲಿಯೇ ಪರಿಶೀಲಿಸಿ, ಅರ್ಜಿಗಳ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದರು. ಮತದಾರರ ಪಟ್ಟಿಯಲ್ಲಿನ ವಿವರಗಳ ನಿಖರತೆಯನ್ನು ಖಚಿತಪಡಿಸಿಕೊಳ್ಳಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.ಈ ಸಂದರ್ಭದಲ್ಲಿ ಹಾನಗಲ್ಲ ವಿಧಾನಸಭಾ ಮತಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಗಳು, ಹಾನಗಲ್ಲ ತಹಶೀಲ್ದಾರರು ಹಾಗೂ ಗ್ರೇಡ್-2 ಹೆಚ್ಚುವರಿ ಸಹಾಯಕ ಮತದಾರರ ನೋಂದಣಾಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯಲ್ಲಿ ಹಾನಗಲ್ಲ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಪ್ರಗತಿ, ಕ್ಷೇತ್ರಮಟ್ಟದ ಪರಿಶೀಲನೆ ಹಾಗೂ ಬಾಕಿ ಇರುವ ಅರ್ಜಿಗಳ ವಿಲೇವಾರಿ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು. ಮತದಾರರ ಪಟ್ಟಿಗೆ ಹೊಸ ಮತದಾರರ ಹೆಸರು ಸೇರ್ಪಡೆ, ಹೆಸರುಗಳನ್ನು ತೆಗೆದುಹಾಕುವುದು ಹಾಗೂ ಮತದಾರರ ವಿವರಗಳಲ್ಲಿ ತಿದ್ದುಪಡಿ ಮಾಡುವ ಸಂಬಂಧ ಸ್ವೀಕೃತವಾಗಿರುವ ನಮೂನೆ-6, 7 ಮತ್ತು 8ರ ಅರ್ಜಿಗಳ ಸ್ಥಿತಿಗತಿಗಳನ್ನು ಪರಿಶೀಲಿಸಲಾಯಿತು.
ಮತದಾರರ ಛಾಯಾಚಿತ್ರಗಳ ಗುಣಮಟ್ಟದ ಪರಿಶೀಲನೆಗೂ ಆದ್ಯತೆ ನೀಡಬೇಕು. ಮತದಾರರ ಪಟ್ಟಿಯಲ್ಲಿನ ವಿವರಗಳು ಹಾಗೂ ಛಾಯಾಚಿತ್ರಗಳು ನಿಖರವಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಯಾವುದೇ ಅರ್ಜಿಗಳು ಅನಗತ್ಯವಾಗಿ ಬಾಕಿ ಉಳಿಯದಂತೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಬಿಎಲ್‌ಒಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಸಭೆಯಲ್ಲಿ ಸಹಾಯಕ ಮತದಾರರ ನೋಂದಣಾಧಿಕಾರಿಗಳು, ಹಾನಗಲ್ಲ ತಹಶೀಲ್ದಾರರು, ಹೆಚ್ಚುವರಿ ಸಹಾಯಕ ಮತದಾರರ ನೋಂದಣಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪುರಸಭೆಯ ಮುಖ್ಯಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.