ಹಾವೇರಿ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳನ್ನು ವಸ್ತು ಪ್ರದರ್ಶನದ ಮೂಲಕ ಅದ್ಭುತವಾಗಿ ಅನಾವರಣಗೊಳಿಸಲಾಗಿದೆ ಎಂದು ಶಾಸಕರು ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಿಳಿಸಿದರು.ಸೋಮವಾರ ನಗರದ ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸರ್ಕಾರದ ಯೋಜನೆಗಳು ಹಾಗೂ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು.
ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಕುರಿತು ಜನರಿಗೆ ಮನವರಿಕೆ ಮಾಡಲು ಈ ತರಹದ ವಸ್ತು ಪ್ರದರ್ಶನ ಮಳಿಗೆಗಳು ಸಹಕಾರಿಯಾಗಲಿವೆ. ಗ್ಯಾರಂಟಿ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿ, ಮಹಿಳೆ, ಮಧ್ಯಮವರ್ಗ, ವಿದ್ಯಾರ್ಥಿಗಳ ಸಾಮಾಜಿಕ ಹಾಗೂ ಆರ್ಥಿಕ ಸುಧಾರಣೆಗೆ ಹಾಗೂ ಆರ್ಥಿಕ ಬೆಳವಣಿಗೆಗೆ ಪೂರಕವಾಗಿವೆ ಎಂದರು. ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಮಾತನಾಡಿ, ಗ್ಯಾರಂಟಿ ಯೋಜನೆಗಳಿಂದ ಬಡ ಜನರ ಜೀವನಮಟ್ಟ ಸುಧಾರಿಸಿದೆ ಹಾಗೂ ಇಂದು ದೇಶದ ಜಿಡಿಪಿ ಸಾಧನೆ ಕೊಡುಗೆಗೆ ಕರ್ನಾಟಕ ರಾಜ್ಯ ಎರಡನೇ ಸ್ಥಾನದಲ್ಲಿದೆ. ಇದಕ್ಕೆ ಗ್ಯಾರಂಟಿ ಯೋಜನೆಗಳೇ ಕಾರಣವಾಗಿವೆ ಎಂದರು.ಯೋಜನೆಗಳ ಅನಾವರಣ: ವಸ್ತು ಪ್ರದರ್ಶನ ಮಳಿಗೆಯಲ್ಲಿ ಸರ್ಕಾರ ಜಾರಿಗೆ ತಂದಿರುವ ಹಸಿವು ಮುಕ್ತ ಕರ್ನಾಟಕದತ್ತ ದಾಪುಗಾಲು, ಗ್ಯಾರಂಟಿ ಬದುಕು, ಶಕ್ತಿ ಗೃಹ ಜ್ಯೋತಿ, ಯುವ ನಿಧಿ, ಪ್ರಗತಿಯತ್ತ ಕರ್ನಾಟಕ, ಸಿರಿಗನ್ನಡಂ ಗೆಲ್ಗೆ, ನೀವು ಕರ್ನಾಟಕದಲ್ಲಿ ಹಸಿವಿನಿಂದ ಬಳಲುವುದಿಲ್ಲ(ಇಂದಿರಾ ಕ್ಯಾಂಟಿನ್), ಅನ್ನದಾತನ ಮೊಗದಲ್ಲಿ ಮಂದಹಾಸ, ಹಿಂದುಳಿದ ವರ್ಗಗಳ ಕಲ್ಯಾಣ ಪಣ, ಸರ್ವರಿಗೂ ಗುಣಮಟ್ಟದ ಆರೋಗ್ಯ ಸೌಲಭ್ಯ, ಸರ್ವರಿಗೂ ಸೂರು ಹೀಗೆ ವಿವಿಧ ಯೋಜನೆಗಳ ಅನಾವರಣ ಮಾಡಲಾಯಿತು.ಗಮನ ಸೆಳೆದ ಸಿಎಂ ಪ್ರತಿಕೃತಿ: ವಸ್ತು ಪ್ರದರ್ಶನ ಪ್ರವೇಶ ದ್ವಾರದಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಪುಸ್ತಕ ಕೈಯಲ್ಲಿ ಹಿಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ಸಾರ್ವಜನಿಕರನ್ನು ಆಕರ್ಷಿಸುತ್ತಿದೆ. ಪ್ರತಿಯೊಬ್ಬರೂ ಮುಖ್ಯಮಂತ್ರಿಗಳ ಪ್ರತಿಯೊಮೆಯೊಂದಿಗೆ ಛಾಯಾಚಿತ್ರ ಹಾಗೂ ಸೆಲ್ಫಿ ತೆಗೆದುಕೊಳ್ಳುತ್ತಿರುವುದು ವಿಶೇಷವಾಗಿತ್ತು. ಸಾರ್ವಜನಿಕರು ವಸ್ತು ಪ್ರದರ್ಶನ ಮಳಿಗೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಮೂಲಕ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿರುವುದು ಕಂಡುಬಂದಿತು. ವಾರ್ತಾಧಿಕಾರಿ ಭಾರತಿ ಅವರು ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಎಂ. ಹಿರೇಮಠ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಎಂ. ಮೈದೂರು, ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ, ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ, ಕೆಎಸ್‌ಆರ್‌ಟಿಸಿ ಡಿಸಿ ವಿಜಯಕುಮಾರ, ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರು, ನಗರಸಭೆ ವಿವಿಧ ಸಮಿತಿ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.