ಸಾಮಾಜಿಕ ಜಾಲತಾಣದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಪದ ಬಳಕೆ ಮಾಡಿ ವಿಡಿಯೋ ಪ್ರಚಾರ ಮಾಡಿರುವ ವ್ಯಕ್ತಿಯನ್ನು ರಾಜ್ಯದಿಂದ ಗಡಿಪಾರು ಮಾಡಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಕೊಡಗು ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಕನ್ನಡಪ್ರಭ ವಾರ್ತೆ ಮಡಿಕೇರಿ
ಸಾಮಾಜಿಕ ಜಾಲತಾಣದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಪದ ಬಳಕೆ ಮಾಡಿ ವಿಡಿಯೋ ಪ್ರಚಾರ ಮಾಡಿರುವ ವ್ಯಕ್ತಿಯನ್ನು ರಾಜ್ಯದಿಂದ ಗಡಿಪಾರು ಮಾಡಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಕೊಡಗು ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಒಕ್ಕೂಟದ ಸಂಯೋಜಕ ಮೋಹನ್ ಮೌರ್ಯ, ಆರೋಪಿಯು ಡಾ. ಅಂಬೇಡ್ಕರ್ ಅವರ ವ್ಯಕ್ತಿತ್ವ, ಗೌರವ ಹಾಗೂ ಭಾರತೀಯ ಸಂವಿಧಾನದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಲ್ಲದೆ, ಎಸ್ಸಿ/ಎಸ್ಟಿ ಮೀಸಲಾತಿ ವ್ಯವಸ್ಥೆ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿದ್ದಾನೆ. ಉದ್ದೇಶಪೂರ್ವಕವಾಗಿ ರಾಷ್ಟ್ರೀಯ ಮಹಾನ್ ನಾಯಕರನ್ನು ನಿಂದಿಸಿ ವಿಡಿಯೋ ಹರಿಬಿಡುವುದು ಸಾರ್ವಜನಿಕರಲ್ಲಿ ಆಕ್ರೋಶ ಮತ್ತು ಸಾಮಾಜಿಕ ಸಂಘರ್ಷಕ್ಕೆ ಕಾರಣವಾಗುತ್ತದೆ. ಇದು ಜಾತಿ ದ್ವೇಷ ಹರಡುವ ಕೆಲಸವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಆರೋಪಿಯ ಸಾಮಾಜಿಕ ಜಾಲತಾಣ ಖಾತೆ ಹಾಗೂ ಡಿಜಿಟಲ್ ಮಾಹಿತಿ ಪರಿಶೀಲಿಸಿ, ಯಾವ ಉದ್ದೇಶದಿಂದ ವಿಡಿಯೋ ಮಾಡಲಾಗಿದೆ ಎಂದು ಸಮಗ್ರ ತನಿಖೆ ನಡೆಸಬೇಕು, ಸಂಬಂಧಿಸಿದ ಕಾನೂನುಗಳಡಿ ಪ್ರಕರಣ ದಾಖಲಿಸಿ ವಿಡಿಯೋವನ್ನು ತಕ್ಷಣ ತೆಗೆದುಹಾಕಬೇಕು ಮತ್ತು ಮತ್ತಷ್ಟು ಹಂಚಿಕೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್. ಹಾದಿಮನಿ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದರು.ಮುಖಂಡರಾದ ವಿನಯ್, ಎಚ್.ಎಸ್. ಗಣೇಶ್, ಎಚ್.ಎಲ್. ದಿವಾಕರ್, ಡಿ.ಎಸ್. ನಿರ್ವಾಣಪ್ಪ, ಕೆ.ಬಿ. ರಾಜು, ಎಸ್.ಸಿ. ಸತೀಶ್, ಲೋಕೇಶ್ ಕುಶಾಲನಗರ, ಮಂಜುನಾಥ್ ಹೆಬ್ಬಾಲೆ, ಸಣ್ಣಯ್ಯ, ಜನಾರ್ಧನ್, ಸುಶೀಲ ಸೇರಿದಂತೆ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಸಂಘಟನೆಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.