ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಡೆಂಘೀ ನಿಯಂತ್ರಣಕ್ಕಾಗಿ ಜಿಲ್ಲೆಯಾದ್ಯಂತ ನಿರಂತರವಾಗಿ ಲಾರ್ವಾ ಸಮೀಕ್ಷೆ ನಡೆಸಿ, ಸೊಳ್ಳೆ ಉತ್ಪತ್ತಿ ತಾಣ ನಾಶಪಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಡೆಂಘೀ ಜ್ವರದ ಮುಂಜಾಗ್ರತೆ ಹಾಗೂ ನಿಯಂತ್ರಣ ಕಾರ್ಯಗಳ ಹಿನ್ನೆಲೆ ಕೈಗೊಂಡಿರುವ ಕ್ರಮಗಳ ಕುರಿತು ಹಮ್ಮಿಕೊಂಡಿದ್ದ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲ ಹಳ್ಳಿಗಳಲ್ಲಿ ನೈರ್ಮಲ್ಯ ಕಾಪಾಡುವ ಸಲುವಾಗಿ ಚರಂಡಿ ಸ್ವಚ್ಛತೆಗೆ ಬ್ಲೀಚಿಂಗ್ ಪೌಡರ್ ಸಿಂಪಡಣೆ ಮಾಡಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹೆಚ್ಚು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಜವಾಬ್ದಾರಿ ನೀಡಿ, ಡೆಂಘೀ ನಿಯಂತ್ರಣಕ್ಕೆ ಕ್ರಮ ವಹಿಸಬೇಕು. ವಾರಕೊಮ್ಮೆ ಚರಂಡಿಗಳ ಸ್ವಚ್ಛತೆ ಮಾಡಿಸಬೇಕು. ಜಿಲ್ಲಾಸ್ಪತ್ರೆಯಲ್ಲಿ ಸ್ವಚ್ಛತೆ ಇಲ್ಲ ಎಂದು ಸಾಕಷ್ಟು ದೂರುಗಳು ಬರುತ್ತಿವೆ. ನಗರಸಭೆಯೊಂದಿಗೆ ಸಮನ್ವಯ ಮಾಡಿಕೊಂಡು, ಸ್ವಚ್ಛತೆಗೆ ಕ್ರಮವಹಿಸಬೇಕು ಎಂದು ಸೂಚಿಸಿದರು.
ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ಜಿಲ್ಲೆಯಲ್ಲಿ ಡೆಂಘೀ ನಿಯಂತ್ರಣಕ್ಕಾಗಿ ಲಾರ್ವಾ ಸಮೀಕ್ಷೆ ನಡೆಸಿ, ಲಾರ್ವಾ ನಾಶ ಚಟುವಟಿಕೆ ಕಾರ್ಯವನ್ನು ನಿರಂತರವಾಗಿ ಮಾಡಲಾಗುತ್ತಿದೆ. ಡೆಂಘೀ ರೋಗಕ್ಕೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಇಲ್ಲ. ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಡೆಂಘೀ ನಿಯಂತ್ರಣಕ್ಕಾಗಿ ಸೂಕ್ತ ಕ್ರಮ ವಹಿಸಲಾಗಿದೆ ಎಂದು ಹೇಳಿದರು.ಡೆಂಘೀ ಪರೀಕ್ಷೆಗೆ ಸರ್ಕಾರ ನಿಗದಿಪಡಿಸಿರುವ ದರದ ಪ್ರಕಾರವೇ ಟೆಸ್ಟ್ ಮಾಡಬೇಕು. ಡೆಂಘೀ ಜ್ವರದ ಚಿಕಿತ್ಸೆಗೆ ತಾಲೂಕು ಮಟ್ಟದ ಆಸ್ಪತ್ರೆಗಳಲ್ಲಿ 10 ರಿಂದ 15 ಹಾಸಿಗೆ ಮೀಸಲಿಡಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಮಾತನಾಡಿ, ಲಾರ್ವಾ ಸಮೀಕ್ಷೆ ನಡೆಸಿ, ಸೊಳ್ಳೆಗಳ ಉತ್ಪತ್ತಿಗಳ ತಾಣ ನಾಶ ಪಡಿಸಲಾಗುತ್ತಿದೆ. ಚಿತ್ರದುರ್ಗ ನಗರ ಪ್ರದೇಶದಲ್ಲಿ ಗುರುತಿಸಲಾಗಿರುವ ಹಾಟ್‍ಸ್ಪಾಟ್ ಪ್ರದೇಶಗಳಲ್ಲಿ ನಿರಂತರವಾಗಿ ಲಾರ್ವಾ ಸಮೀಕ್ಷೆ ನಡೆಸಿ, ಡೆಂಘೀ ನಿರ್ಮೂಲನೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.ಶಾಸಕ ಟಿ.ರಘುಮೂರ್ತಿ ಮಾತನಾಡಿ, ಕಳೆದ ವರ್ಷಕ್ಕೆ ಹೋಲಿಕೆ ಮಾಡಿದಾಗ ಜಿಲ್ಲೆಯಲ್ಲಿ ಈ ಬಾರಿ ಡೆಂಘೀ ಪ್ರಕರಣಗಳು ಹೆಚ್ಚಳವಾಗಿವೆ. ಡೆಂಘೀ ನಿಯಂತ್ರಣಕ್ಕೆ ಅಗತ್ಯ ಮುನ್ನಚ್ಚರಿಕೆ ಕ್ರಮ ಕೈಗೊಳ್ಳಬೇಕು. ಶುದ್ಧ ಕುಡಿಯುವ ನೀರು ಘಟಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ದುರಸ್ತಿಗೆ ಬಂದಿರುವ ಆರ್‌ಓ ಘಟಕಗಳನ್ನು ತಕ್ಷಣ ರಿಪೇರಿ ಮಾಡಿ, ಸಾರ್ವಜನಿಕರಿಗೆ ನಿರಂತರವಾಗಿ ಶುದ್ಧ ನೀರು ಪೂರೈಕೆ ಮಾಡಬೇಕು ಎಂದರು.
ಎಲ್ಲ ಮಾದರಿ ನೀರಿಗೂ ಒಂದೇ ರೀತಿ ಯಂತ್ರಗಳ ಅಳವಡಿಕೆಯಿಂದಾಗಿ ಶುದ್ಧ ಕುಡಿಯುವ ನೀರಿನ ಘಟಕಗಳು ಪದೇ ಪದೇ ದುರಸ್ತಿಗೆ ಬರುತ್ತಿವೆ. ನೀರಿನ ಮಾದರಿಗೆ ಅನುಗುಣವಾಗಿ ಹೊಸ ರೀತಿ ಯಂತ್ರಗಳ ಅಳವಡಿಕೆ ಮಾಡಬೇಕು ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಹೇಳಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿಲ್ಲಾ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಕಾಶೀ, ಡೆಂಘೀ ನಿಯಂತ್ರಣ ಕಾರ್ಯಗಳಿಗೆ ನೇಮಕವಾಗಿರುವ ತಾಲೂಕು ನೋಡಲ್ ಅಧಿಕಾರಿಗಳು, ತಹಸೀಲ್ದಾರ್, ತಾಲೂಕು ಆರೋಗ್ಯಾಧಿಕಾರಿಗಳು, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಇದ್ದರು.