ರಾಮನಗರ: ಜಿಲ್ಲಾ ಕೇಂದ್ರ ರಾಮನಗರ ಟೌನಿನ ಅಭಿವೃದ್ಧಿ ದೃಷ್ಟಿಯಿಂದ ವಿಸ್ತೃತವಾದ ಟೌನ್ ಮಾಸ್ಟರ್ ಪ್ಲಾನ್‌ಗೆ ರಾಜ್ಯ ಸರ್ಕಾರದಿಂದ ಶೀಘ್ರದಲ್ಲೇ ಅನುಮೋದನೆ ಪಡೆಯಲಾಗುವುದು ಎಂದು ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗೇಗೌಡ (ಪ್ರಾಣೇಶ್) ತಿಳಿಸಿದರು.
ಹಿಂದಿನ ಅಧ್ಯಕ್ಷ ಚೇತನ್ ಕುಮಾರ್ ಅವರು ಕೈಗೊಂಡಿದ್ದ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸುವುದರ ಜತೆಗೆ, ಸರ್ಕಾರದ ಮಟ್ಟದಲ್ಲಿ ಬಗೆಹರಿಸಬೇಕಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು. ಬಡಾವಣೆಗಳ ಸಮಸ್ಯೆಯನ್ನು ಬಗೆಹರಿಸಲಾಗಿದ್ದು, 116 ಎಕರೆಯಲ್ಲಿ ನೂತನ ಬಡಾವಣೆ ನಿರ್ಮಿಸಲಾಗುತ್ತಿದೆ. ಇಲ್ಲ ಕಡಿಮೆ ಬೆಲೆಯಲ್ಲಿ ಬಡವರು, ಮಧ್ಯಮ ವರ್ಗದವರಿಗೆ ಸುಸಜ್ಜಿತ ನಿವೇಶನಗಳನ್ನು ನೀಡಲು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಅನಧಿಕೃತ ಬಡಾವಣೆಗಳಿಗೆ ಅವಕಾಶ ನೀಡುವುದಿಲ್ಲ. ಜನರು ಕಚೇರಿಗಳಿಗೆ ಅಲೆದಾಡದೆ ತ್ವರಿತಗತಿಯಲ್ಲಿ ಕೆಲಸ ಕಾರ್ಯಗಳಾಗುವಂತೆ ವ್ಯವಸ್ಥೆ ಮಾಡುತ್ತಾರೆ. ರೂಡಾವನ್ನು ಜನಸ್ನೇಹಿ ಸಂಸ್ಥೆಯನ್ನಾಗಿ ರೂಪಿಸಲಾಗುವುದು ಎಂದರು.ಮುಖ್ಯಮಂತ್ರಿಗಳು ನಮ್ಮ ಜಿಲ್ಲೆಯವರೇ ಆಗಿರುವ ಕಾರಣ ಅಗತ್ಯ ಸಹಕಾರ ಪಡೆದು ಜಿಲ್ಲಾ ಕೇಂದ್ರ ರಾಮನಗರ ನಗರಾಭಿವೃದ್ದಿಗೆ ಶ್ರಮಿಸುತ್ತೇನೆ. ಜಿಲ್ಲೆಯ ಅಭಿವೃದ್ಧಿಗಾಗಿ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಅವರ ಮಾರ್ಗದರ್ಶನ ಹಾಗೂ ವಿಶ್ವಾಸದಿಂದ ನನಗೆ ಈ ಸ್ಥಾನ ದೊರೆತಿದ್ದು, ಅವರ ನಂಬಿಕೆಗೆ ದಕ್ಕೆಯಾಗದಂತೆ ಕಾರ್ಯನಿರ್ವಹಿಸುತ್ತೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ಪ್ರಾಣೇಶ್ ಅವರಿಗೆ ನಗರಸಭೆ ಮಾಜಿ ಅಧ್ಯಕ್ಷ ಶೇಷಾದ್ರಿ, ಜಿಬಿಡಿಎ ಅಧ್ಯಕ್ಷ ಎಲ್.ಚಂದ್ರಶೇಖರ್, ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಎ.ಬಿ.ಚೇತನ್ ಕುಮಾರ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಎಚ್.ರಾಜು, ಜಿಪಂ ಮಾಜಿ ಅಧ್ಯಕ್ಷ ಎಚ್.ಸಿ.ರಾಜು, ತಾಪಂ ಮಾಜಿ ಅಧ್ಯಕ್ಷ ಭದ್ರಯ್ಯ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಂ.ರೇವಣ್ಣ, ಮಾಯಾಗಾನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ವೆಂಕಟೇಶ್ ಮೂರ್ತಿ ಅಭಿನಂದಿಸಿದರು.
ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗೇಗೌಡ (ಪ್ರಾಣೇಶ್) ಸುದ್ದಿಗಾರರೊಂದಿಗೆ ಮಾತನಾಡಿದರು.