ಉಳುವವನೇ ಭೂಮಿಯ ಒಡೆಯ ಕಾಯ್ದೆಯ ಮೂಲಕ ಬಡ ರೈತರಿಗೆ ಭೂಮಿಯ ಒಡೆತನ ಹಾಗೂ ಮಂಡಲ್ ಕಮಿಷನ್‌ಗಿಂತ ಮುಂಚೆಯೇ ಶೇ. 70ರಷ್ಟು ಮೀಸಲಾತಿ ತಂದುಕೊಟ್ಟ ಧೀಮಂತ ನಾಯಕ ಅರಸು.
ಗದಗ: ಕರ್ನಾಟಕ ಕಂಡ ಅಪ್ರತಿಮ ನಾಯಕ, ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜ ಅರಸು ಅವರು ರಾಜ್ಯದಲ್ಲಿ ಸಾಮಾಜಿಕ ಸಮಾನತೆಗೆ ಭದ್ರ ಬುನಾದಿ ಹಾಕಿದ್ದು, ಅವರ ಕೊಡುಗೆ ಸಮಾಜಕ್ಕೆ ಅಪಾರವಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ತಿಳಿಸಿದರು.
ಗುರುವಾರ ನಗರದ ಕನಕ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಡಿ. ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಉಳುವವನೇ ಭೂಮಿಯ ಒಡೆಯ ಕಾಯ್ದೆಯ ಮೂಲಕ ಬಡ ರೈತರಿಗೆ ಭೂಮಿಯ ಒಡೆತನ ಹಾಗೂ ಮಂಡಲ್ ಕಮಿಷನ್‌ಗಿಂತ ಮುಂಚೆಯೇ ಶೇ. 70ರಷ್ಟು ಮೀಸಲಾತಿ ತಂದುಕೊಟ್ಟ ಧೀಮಂತ ನಾಯಕ ಅರಸು ಎಂದು ಸ್ಮರಿಸಿದರು.
ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ವಿ. ಬಳ್ಳಾರಿ ಮಾತನಾಡಿ, ಜಿಲ್ಲೆಯಲ್ಲಿ ಇಲಾಖೆ ಹಾಗೂ ಜಿಲ್ಲಾಡಳಿತದ ಶ್ರಮದಿಂದ 48ಕ್ಕೂ ಹೆಚ್ಚು ವಸತಿ ನಿಲಯಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ ಎಂದರು.
ಜಿಲ್ಲಾ ಹಾಲುಮತ ಸಂಘದ ಅಧ್ಯಕ್ಷ ಫಕೀರಪ್ಪ ಹೆಬಸೂರ ಮಾತನಾಡಿ, ಯುವಜನತೆ ಡಾ. ಎಪಿಜೆ ಅಬ್ದುಲ್ ಕಲಾಂ ಅವರಂತಹ ಆದರ್ಶಗಳನ್ನು ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಪ್ರಭಾಕರ ಉಳ್ಳಾಗಡ್ಡಿ ಉಪನ್ಯಾಸ ನೀಡಿದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅಮಿತ ಬಿದರಿ, ಸರ್ಕಾರಿ ನೌಕರರ ಸಂಘದ ಮಾಜಿ ಜಿಲ್ಲಾಧ್ಯಕ್ಷ ರವಿ ಎಲ್. ಗುಂಜಿಕರ, ಕನಕದಾಸ ಶಿಕ್ಷಣ ಸಮಿತಿ ಅಧ್ಯಕ್ಷ ರವಿ ದಂಡಿನ, ತಹಸೀಲ್ದಾರ್ ಶ್ರೀನಿವಾಸ ಕುಲಕರ್ಣಿ, ರಾಜ್ಯ ಹಾಲುಮತ ಸಂಘದ ಅಧ್ಯಕ್ಷ ರುದ್ರಣ್ಣ ಗುಳಗುಳಿ ಹಾಗೂ ಅಲೆಮಾರಿ ಸಂಘದ ಜಿಲ್ಲಾಧ್ಯಕ್ಷ ಹರೀಶ ಪೂಜಾರ ಉಪಸ್ಥಿತರಿದ್ದರು.
ಇದೇ ವೇಳೆ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಹಾಗೂ ಕ್ರೀಡಾ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಸತಿನಿಲಯದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಜಾನಪದ ಕಲಾವಿದ ವೀರಣ್ಣ ಅಂಗಡಿ ಮತ್ತು ಸಂಗಡಿಗರು ನಾಡಗೀತೆ ಹಾಗೂ ಅರಸು ಕುರಿತ ಗೀತೆ ಪ್ರಸ್ತುತಪಡಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮೆಹಬೂಬ ತುಂಬರಮಟ್ಟಿ ಸ್ವಾಗತಿಸಿದರು. ತಾಲೂಕು ವಿಸ್ತರಣಾಧಿಕಾರಿ ಜಿ.ಎನ್. ಮಲ್ಲೂರು ಹಾಗೂ ನಿಲಯ ಪಾಲಕ ಡಿ.ಎಚ್. ವಸ್ತಾದ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.