ಕನ್ನಡಪ್ರಭ ವಾರ್ತೆ ಬೇಲೂರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಕರ್ನಾಟಕದ ದಿಗ್ಗಜ ನಾಯಕ, ಸಾಮಾಜಿಕ ನ್ಯಾಯದ ಹೋರಾಟಗಾರ ಹಾಗೂ ಹಿಂದುಳಿದ ವರ್ಗಗಳ ಹಿತಚಿಂತಕ ಡಿ. ದೇವರಾಜ ಅರಸು ಅವರ 110ನೇ ಜನ್ಮದಿನಾಚರಣೆಯನ್ನು ಭಾವಪೂರ್ಣವಾಗಿ ಆಚರಿಸಲಾಯಿತು.ಪಟ್ಟಣದ ಅಂಬೇಡ್ಕರ್ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ತಾಲೂಕು ದಂಡಾಧಿಕಾರಿ ಶ್ರೀಧರ್ ಕಂಕನವಾಡಿ ಅವರು ಉದ್ಘಾಟಿಸಿ ಮಾತನಾಡಿ, ಡಿ. ದೇವರಾಜ ಅರಸು ಅವರು ನಿಜವಾದ ಜನನಾಯಕರಾಗಿದ್ದು ಹಿಂದುಳಿದ ವರ್ಗಗಳಿಗೆ ಶಿಕ್ಷಣ, ಉದ್ಯೋಗ ಮತ್ತು ಸಾಮಾಜಿಕ ನ್ಯಾಯ ಕಲ್ಪಿಸುವಲ್ಲಿ ಅವರ ಕೊಡುಗೆ ಅಪಾರವಾಗಿದೆ. ಅವರ ಆದರ್ಶಗಳನ್ನು ನಾವು ಅನುಸರಿಸಿದಾಗ ಮಾತ್ರ ನಿಜವಾದ ಸಾಮಾಜಿಕ ಸಮಾನತೆ ಸಾಧ್ಯ. ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಸಬಲೀಕರಣಕ್ಕೆ ಅವರ ಕೊಡುಗೆ ಮಹತ್ವದ್ದಾಗಿದೆ. ಅವರು ಜಾರಿಗೆ ತಂದ ಹಾಸ್ಟೆಲ್ ವ್ಯವಸ್ಥೆ, ವಿದ್ಯಾರ್ಥಿವೇತನ ಯೋಜನೆಗಳು ಹಾಗೂ ಸಮಾಜಮುಖಿ ಕಾರ್ಯಕ್ರಮಗಳು ಇಂದಿಗೂ ಸಾವಿರಾರು ಬಡ ಮಕ್ಕಳಿಗೆ ಶಿಕ್ಷಣದ ಬೆಳಕು ನೀಡುತ್ತಿವೆ. ಅವರ ಆಡಳಿತ ತತ್ವ, ನಿಷ್ಠೆ ಮತ್ತು ಸೇವಾ ಮನೋಭಾವ ಯುವ ಪೀಳಿಗೆಗೆ ಸ್ಫೂರ್ತಿಯಾಗಬೇಕು ಎಂದು ಹೇಳಿದರು.
ಜಿಲ್ಲಾ ಕೆಡಿಪಿ ಸದಸ್ಯೆ ಸೌಮ್ಯ ಆನಂದ್ ಮಾತನಾಡಿ, ಡಿ. ದೇವರಾಜ ಅರಸು ಅವರು ನಿಜವಾದ ಸಮಾಜಸೇವಕ ಹಾಗೂ ಹಿಂದುಳಿದ ವರ್ಗಗಳ ಹಿತಚಿಂತಕರಾಗಿದ್ದರು. ಅವರ ಆಡಳಿತದಲ್ಲಿ ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಹಿಂದುಳಿದ ವರ್ಗಗಳ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿತ್ತು. ಇಂದು ನಾವು ಪಡೆಯುತ್ತಿರುವ ಅನೇಕ ಸೌಲಭ್ಯಗಳು ಅವರ ದೂರದೃಷ್ಟಿ ಮತ್ತು ದೀರ್ಘಕಾಲದ ಹೋರಾಟದ ಫಲವೆಂದು ಹೇಳಿದರು. ಈ ವೇಳೆ ಹಾಸ್ಟೆಲ್ ವಿದ್ಯಾರ್ಥಿಗಳು ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಗದು ಬಹುಮಾನವನ್ನು ವಿತರಿಸಲಾಯಿತು, ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷೆ ಉಷಾ ಸತೀಶ್, ಬೇಲೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಾ,ನ ಮಂಜೇಗೌಡ, ಹಿಂದುಳಿದ ವರ್ಗಗಳ ಇಲಾಖೆಯ ಕಲ್ಯಾಣಾಧಿಕಾರಿ ಮುದುಕಪ್ಪ , ಸುನಿಲ್ ದೊಡ್ಡಿಹಳ್ಳಿ, ಕೀರ್ತಿ, ಪ್ರಥಮ ದರ್ಜೆ ಸಹಾಯಕರು ವೀಣಾ ಎಂ ಡಿ ಉಪನ್ಯಾಸಕರಾದ ಲಕ್ಷ್ಮೀ ನಾರಾಯಣ, ನಿಲಯ ಪಾಲಕರಾದಂತಹ ವೀಣಾ ವಿ ಎಸ್ ನಟರಾಜು ಹಾಗೂ ಇಲಾಖೆ ಸಿಬ್ಬಂದಿ ಹಾಜರಿದ್ದರು.