ಗದಗ: ಜಿಲ್ಲಾಡಳಿತ ಭವನ, ಎಸ್.ಪಿ.ಆಫೀಸ್, ಎಸಿ ಆಫೀಸ್, ಜಿಮ್ಸ್ ಸೇರಿದಂತೆ ಸರ್ಕಾರಿ ಶಾಲಾ ಕಾಲೇಜು ಹಾಗೂ ಹಾಸ್ಟೆಲ್‌ಗಳಲ್ಲಿ ತೋಟಗಾರಿಕೆ ಇಲಾಖೆಯಿಂದ ಉದ್ಯಾನವನ ಅಭಿವೃದ್ಧಿಪಡಿಸಿ ನಿರ್ವಹಿಸಬೇಕು ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಜಿಲ್ಲೆಯಲ್ಲಿನ 7 ತಾಲೂಕುಗಳಲ್ಲಿ ತಲಾ ಒಂದು ಲಕ್ಷ ಗಿಡ ನೆಡುವ ಕೆಲಸವಾಗಬೇಕು. ಸಸಿ ನೆಡುವ ಕಾರ್ಯಕ್ರಮದ ಯೋಜನೆ ತಯಾರಿಸಿ ವಿವರವಾದ ಮಾಹಿತಿಯೊಂದಿಗೆ ಆಯಾ ತಾಲೂಕಿನ ಜನಪ್ರತಿನಿಧಿಗಳ ಮಾರ್ಗದರ್ಶನ ಪಡೆದು ಕೆಲಸ ನಿರ್ವಹಿಸಬೇಕು.
ಗದಗ ತಾಲೂಕಿನಲ್ಲಿ 8 ಗ್ರಾಮಗಳಲ್ಲಿ ಸ್ಮಶಾನದ (ರುದ್ರಭೂಮಿಯ) ಸಮಸ್ಯೆಯಿದ್ದು, ಈ ಕುರಿತು ನ.1 ರೊಳಗೆ ರುದ್ರಭೂಮಿಗೆ ಸ್ಥಳ ಗುರುತಿಸಿ ಕ್ರಮ ಕೈಗೊಳ್ಳಬೇಕು. ರುದ್ರಭೂಮಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇರುವ ಹಾಗೇ ನೊಡಿಕೊಳ್ಳಬೇಕು. ಸಾರ್ವಜನಿಕರಿಗೆ ಪಡಿತರ ಚೀಟಿ ವಿತರಣೆ ಮಾಡುವಾಗ ಯಾವುದೇ ಅವ್ಯವಹಾರ ಆಗದಂತೆ ನೋಡಿಕೊಳ್ಳಬೇಕು.ಹಿಂದುಳಿದ, ಅಲ್ಪಸಂಖ್ಯಾತರ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಸುತ್ತಿರುವ ವಸತಿ ಶಾಲೆಗಳಲ್ಲಿ ಗುಣಮಟ್ಟದ ಆಹಾರ ಪೂರೈಕೆಯಾಗುವಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳು ಅನಿರೀಕ್ಷಿತವಾಗಿ ಹಾಸ್ಟೆಲ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಮನೆ ಮನೆಗಳಿಗೆ ನಲ್ಲಿ ಮೂಲಕ ನೀರು ಸರಬರಾಜು ಮಾಡುವ ಜೆಜೆಎಂ ಯೋಜನೆಯಡಿ ಸಮರ್ಪಕ ನಿರ್ವಹಣೆಗೆ ಕ್ರಮ ವಹಿಸಬೇಕು. ನೀರು ವೃಥಾ ಪೋಲಾಗದಂತೆ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಹಣೆ ಸಮರ್ಪಕವಾಗಿ ಆಗಬೇಕು ಎಂದರು.
ನರಗುಂದ ಶಾಸಕ ಸಿ.ಸಿ. ಪಾಟೀಲ ಮಾತನಾಡಿ, ರೈತರಿಗೆ ವಿತರಿಸಲಾಗುವ ರಸಗೊಬ್ಬರದ ಗುಣಮಟ್ಟದ ಪರೀಕ್ಷೆ ನಡೆಸಬೇಕು. ಅರ್ಹ ಫಲಾನುಭವಿಗಳಿಗೆ ಕೃಷಿ ಯಂತ್ರೋಪಕರಣಗಳ ವಿತರಣೆ ಮಾಡುವಾಗ ವಿನಾಕಾರಣ ವಿಳಂಬ ಮಾಡಬಾರದು ಎಂದರು.
ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ, ರೋಣ ಶಾಸಕ ಜಿ.ಎಸ್. ಪಾಟೀಲ ಮಾತನಾಡಿ, ಅಕಾಲಿಕ ಮಳೆಯಿಂದ ಹಾನಿಗೊಳಗಾದ ತೋಟಗಾರಿಕಾ ಪ್ರದೇಶದ ಸರ್ವೇ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು. ಜನತಾ ದರ್ಶನ ಕಾರ್ಯಕ್ರಮದಲ್ಲಿ ಸ್ವೀಕರಿಸಿದ ಅರ್ಜಿ ಶೀಘ್ರವಾಗಿ ವಿಲೇವಾರಿಯಾಗುವಂತೆ ಕ್ರಮ ಕೈಕೊಳ್ಳಬೇಕು.
ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಮಾತನಾಡಿ, ಕಂದಾಯ ಇಲಾಖೆಯಲ್ಲಿ ವಿವಿಧ ಯೋಜನೆಗಳ ಸೌಲಭ್ಯ ಒದಗಿಸಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಗೆ ನೇರವಾಗಿ ಅವರ ಖಾತೆಗಳಿಗೆ ಹಣ ಜಮೆ ಮಾಡಲಾಗುತ್ತಿದೆ. ಸಕಾಲ ಯೋಜನೆಯಡಿ ಸ್ವಿಕೃತ ಅರ್ಜಿಗಳು ನಿಗದಿತ ಕಾಲದಲ್ಲಿಯೇ ವಿಲೇವಾರಿಯಾಗುತ್ತಿದ್ದು, ರಾಜ್ಯದಲ್ಲಿಯೇ ಜಿಲ್ಲೆಯು ಅಗ್ರಸ್ಥಾನದಲ್ಲಿದೆ ಎಂದು ತಿಳಿಸಿದರು.ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ಮಾತನಾಡಿ, ಜಿಲ್ಲೆಯಲ್ಲಿ ಸೆ. 25 ರವರೆಗೆ ವಾಡಿಕೆ ಮಳೆ 467 ಮಿ.ಮೀ ಇದ್ದು, ವಾಸ್ತವ ಮಳೆ 424 ಮಿ.ಮೀ ಆಗಿರುತ್ತದೆ. 311771 ಹೆಕ್ಟೇರ್ ಪ್ರದೇಶ ಬಿತ್ತನೆಯಾಗಿದೆ. ರೈತರಿಗೆ ವಿತರಣೆಗೆ 12504 ಮೆಟ್ರಿಕ್ ಟನ್ ರಸಗೊಬ್ಬರದ ಲಭ್ಯತೆ ಇದೆ ಎಂದು ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ತೋಟಗಾರಿಕೆ, ಶಿಕ್ಷಣ, ಜೆಜೆಎಂ. ಹೆಸ್ಕಾಂ ಸೇರಿದಂತೆ ವಿವಿಧ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಲಾಯಿತು.