ಎಂಜಿನಿಯರಿಂಗ್ ಶಿಕ್ಷಣವು ಕೇವಲ ಅಂಕ ಗಳಿಸುವುದಕ್ಕೆ ಸೀಮಿತವಾಗಬಾರದು. ವಿದ್ಯಾರ್ಥಿಗಳು ಕುತೂಹಲ, ವಿಮರ್ಶಾತ್ಮಕ ಚಿಂತನೆ, ಸಂವಹನ ಕೌಶಲ, ತಂಡದೊಂದಿಗೆ ಕೆಲಸ ಮಾಡುವ ಸಾಮರ್ಥ್ಯ ಹಾಗೂ ಪ್ರಾಮಾಣಿಕತೆಯನ್ನು ಬೆಳೆಸಿಕೊಳ್ಳಬೇಕು. ಈ ಗುಣಗಳು ಭವಿಷ್ಯದ ವೃತ್ತಿಜೀವನದಲ್ಲಿ ಯಶಸ್ಸು ಸಾಧಿಸಲು ಸಹಕಾರಿಯಾಗುತ್ತವೆ ಎಂದರು.
ಕನ್ನಡಪ್ರಭ ವಾರ್ತೆ ಹಾಸನ
ಎಂಜಿನಿಯರಿಂಗ್ ವಿದ್ಯಾರ್ಥಿಗಳು ಕೇವಲ ಅಂಕ ಗಳಿಕೆಗೆ ಸೀಮಿತವಾಗದೆ, ಸಮಸ್ಯೆಗಳನ್ನು ಅರ್ಥೈಸಿಕೊಳ್ಳುವ, ಸರಿಯಾದ ಪ್ರಶ್ನೆಗಳನ್ನು ಕೇಳುವ, ತಾರ್ಕಿಕವಾಗಿ ಚಿಂತಿಸುವ ಹಾಗೂ ನೈಜ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕೌಶಲಗಳನ್ನು ಬೆಳೆಸಿಕೊಳ್ಳಬೇಕು ಎಂದು ಮಲೆನಾಡು ಎಂಜಿನಿಯರಿಂಗ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಸಿ.ವಿ. ವೆಂಕಟೇಶ್ ಸಲಹೆ ನೀಡಿದರು.
ನಗರದ ಮಲೆನಾಡು ಎಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ವತಿಯಿಂದ ಆಯೋಜಿಸಿದ್ದ ಓರಿಯಂಟೇಶನ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಎಂಜಿನಿಯರಿಂಗ್ ಶಿಕ್ಷಣವು ಕೇವಲ ಅಂಕ ಗಳಿಸುವುದಕ್ಕೆ ಸೀಮಿತವಾಗಬಾರದು. ವಿದ್ಯಾರ್ಥಿಗಳು ಕುತೂಹಲ, ವಿಮರ್ಶಾತ್ಮಕ ಚಿಂತನೆ, ಸಂವಹನ ಕೌಶಲ, ತಂಡದೊಂದಿಗೆ ಕೆಲಸ ಮಾಡುವ ಸಾಮರ್ಥ್ಯ ಹಾಗೂ ಪ್ರಾಮಾಣಿಕತೆಯನ್ನು ಬೆಳೆಸಿಕೊಳ್ಳಬೇಕು. ಈ ಗುಣಗಳು ಭವಿಷ್ಯದ ವೃತ್ತಿಜೀವನದಲ್ಲಿ ಯಶಸ್ಸು ಸಾಧಿಸಲು ಸಹಕಾರಿಯಾಗುತ್ತವೆ ಎಂದರು.
ಥರ್ಮೋಡೈನಾಮಿಕ್ಸ್, ಫ್ಲೂಯಿಡ್ ಮೆಕ್ಯಾನಿಕ್ಸ್, ಮೆಕ್ಯಾನಿಕ್ಸ್ ಆಫ್ ಮೆಟೀರಿಯಲ್ಸ್ ಮತ್ತು ಮೆಟಲರ್ಜಿ ಸೇರಿದಂತೆ ಎಂಜಿನಿಯರಿಂಗ್ನ ಮೂಲ ವಿಷಯಗಳು ನೈಜ ಜಗತ್ತಿನ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ನೆರವಾಗುತ್ತವೆ. ಆದ್ದರಿಂದ ವಿದ್ಯಾರ್ಥಿಗಳು ಪರೀಕ್ಷೆಯ ದೃಷ್ಟಿಯಿಂದ ಮಾತ್ರ ವಿಷಯಗಳನ್ನು
ಕಲಿಯದೆ, ಅವುಗಳ ಹಿಂದಿರುವ ತತ್ವಗಳು, ಕಾರ್ಯವಿಧಾನಗಳು ಹಾಗೂ ಪ್ರಾಯೋಗಿಕ ಅನ್ವಯಗಳನ್ನು ಆಳವಾಗಿ ಅರ್ಥಮಾಡಿಕೊಳ್ಳಬೇಕು ಎಂದು ತಿಳಿಸಿದರು. ಪ್ರಸ್ತುತ ಕೃತಕ ಬುದ್ಧಿಮತ್ತೆ (ಎಐ) ಮತ್ತು ಡಿಜಿಟಲ್ ತಂತ್ರಜ್ಞಾನಗಳು ಎಂಜಿನಿಯರಿಂಗ್ ಕ್ಷೇತ್ರದಲ್ಲಿ ವೇಗವಾಗಿ ಬದಲಾವಣೆ ತರುತ್ತಿವೆ. ವಿದ್ಯಾರ್ಥಿಗಳು ಎಐ ತಂತ್ರಜ್ಞಾನವನ್ನು ಕಲಿಕೆಗೆ ಪೂರಕ ಸಾಧನವಾಗಿ ಬಳಸಬೇಕು. ಎಐ ನೀಡುವ ಮಾಹಿತಿಯನ್ನು ಪರಿಶೀಲಿಸದೆ ಅವಲಂಬಿಸುವ ಬದಲು, ಸ್ವತಂತ್ರವಾಗಿ ಚಿಂತಿಸುವ ಹಾಗೂ ಸಮಸ್ಯೆಗಳನ್ನು ಪರಿಹರಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಶಿಕ್ಷಣ ತಜ್ಞ ಸಾಗರ್ ಎ. ಎಚ್. ಮಾತನಾಡಿ, ವಿದ್ಯಾರ್ಥಿಗಳು ವೈಫಲ್ಯಗಳಿಂದ ಪಾಠ ಕಲಿಯಬೇಕು. ನಿರಂತರ ಪ್ರಯತ್ನ ಮತ್ತು ಅಭ್ಯಾಸದ ಮೂಲಕ ತಮ್ಮ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಬೇಕು. ಶಿಕ್ಷಣವು ಪಠ್ಯಪುಸ್ತಕದ ಜ್ಞಾನಕ್ಕೆ ಮಾತ್ರ ಸೀಮಿತವಾಗದೆ, ಸಮಾಜದಲ್ಲಿನ ವಿವಿಧ ವಿಚಾರಗಳನ್ನು ಅರ್ಥಮಾಡಿಕೊಳ್ಳುವ ಹಾಗೂ ಅವುಗಳ ಬಗ್ಗೆ ತಾರ್ಕಿಕವಾಗಿ ಚಿಂತಿಸುವ ಸಾಮರ್ಥ್ಯವನ್ನು ಬೆಳೆಸಬೇಕು ಎಂದರು. ವಿದ್ಯಾರ್ಥಿಗಳು ತಮ್ಮದೇ ಆದ ವಿಚಾರಗಳನ್ನು ರೂಪಿಸಿಕೊಂಡು, ಸುತ್ತಮುತ್ತಲಿನ ಜಗತ್ತನ್ನು ಪ್ರಶ್ನಿಸುವ ಮತ್ತು ಅರ್ಥಮಾಡಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು. ಎಂಜಿನಿಯರಿಂಗ್ ಪದವಿಯ ನಾಲ್ಕು ವರ್ಷಗಳು ಕೇವಲ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ಅವಧಿಯಾಗದೆ, ಹೊಸ ಕೌಶಲಗಳನ್ನು ಕಲಿಯುವ, ಯೋಜನೆಗಳನ್ನು ಕೈಗೆತ್ತಿಕೊಳ್ಳುವ, ಪ್ರಶ್ನೆಗಳನ್ನು ಕೇಳುವ ಹಾಗೂ ಆತ್ಮವಿಶ್ವಾಸ ಬೆಳೆಸಿಕೊಳ್ಳುವ ಮಹತ್ವದ ಕಾಲವಾಗಬೇಕು ಎಂದು ಹೇಳಿದರು. ಕಲಿಕೆಯಲ್ಲಿ ವಿನಯ, ಕೆಲಸದಲ್ಲಿ ಶಿಸ್ತು ಹಾಗೂ ವೃತ್ತಿಜೀವನದಲ್ಲಿ ಪ್ರಾಮಾಣಿಕತೆಯನ್ನು ಮೈಗೂಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಎಸ್. ಪ್ರದೀಪ್, ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ಎಜಿಲ್ ವಣ್ಣನ್, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.