ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿಗೆ ಹಿನ್ನಡೆಯಾಗಿಲ್ಲ

KannadaprabhaNewsNetwork | Published : May 13, 2025 1:21 AM
Follow Us

ಸಾರಾಂಶ

ಸಾಗರ: ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿಗೆ ಯಾವುದೇ ಹಿನ್ನಡೆಯಾಗಿಲ್ಲ. ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ನೂರಾರು ಕೋಟಿ ರು. ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಇದು ಸಿದ್ದರಾಮಯ್ಯ ಸರ್ಕಾರ ಆರ್ಥಿಕವಾಗಿ ಸದೃಢವಾಗಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಸಾಗರ: ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿಗೆ ಯಾವುದೇ ಹಿನ್ನಡೆಯಾಗಿಲ್ಲ. ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ನೂರಾರು ಕೋಟಿ ರು. ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಇದು ಸಿದ್ದರಾಮಯ್ಯ ಸರ್ಕಾರ ಆರ್ಥಿಕವಾಗಿ ಸದೃಢವಾಗಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ನಗರಸಭೆ ರಂಗಮಂದಿರದಲ್ಲಿ ಸೋಮವಾರ ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ೯೪ಸಿ ೯೪ಸಿಸಿ ಮತ್ತು ಬಿ ಖಾತಾ ಮಂಜೂರಾತಿ ಪತ್ರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರಾಜ್ಯದಲ್ಲಿ ೯೪ಸಿ ೯೪ಸಿಸಿ ಹಕ್ಕುಪತ್ರ ಕೊಡಬೇಕು ಎಂದು ಕಾಗೋಡು ತಿಮ್ಮಪ್ಪನವರು ಸ್ಪೀಕರ್ ಆಗಿದ್ದಾಗ ಪಟ್ಟು ಹಿಡಿದು ಕೆಲಸ ಮಾಡಿದ್ದರು. ಈಗ ಮತ್ತೆ ಹಕ್ಕುಪತ್ರ ವಿತರಣೆಗೆ ಚಾಲನೆ ಸಿಕ್ಕಿದೆ. ಇದರ ಜೊತೆಗೆ ಶರಾವತಿ ಮುಳುಗಡೆ ಸಂತ್ರಸ್ತರಿಗೆ ಹಕ್ಕುಪತ್ರ ನೀಡುವ ಯೋಜನೆ ಸದ್ಯದಲ್ಲಿಯೆ ಕಾರ್ಯರೂಪಕ್ಕೆ ಬರಲಿದೆ ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಗಮನಾರ್ಹ ಬದಲಾವಣೆ ತರಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ನಂತರ ಮಕ್ಕಳಿಗೆ ಕಡಿಮೆ ಅಂಕ ಬಂದರೆ ಅವರು ಸ್ಪರ್ಧಾತ್ಮಕ ಪರೀಕ್ಷೆಗೆ ಹೋಗಲು ಸಮಸ್ಯೆ ಆಗುತ್ತಿತ್ತು. ಈ ಹಿನ್ನೆಲೆಯಲ್ಲಿ ಅವರಿಗೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದೆ. ಸುಮಾರು ೭೯ ಸಾವಿರ ಮಕ್ಕಳು ಮತ್ತೆ ಪರೀಕ್ಷೆ ಬರೆದು ಉತ್ತಮ ಅಂಕ ಪಡೆದಿದ್ದಾರೆ. ಎಸ್ಎಸ್ಎಲ್‌ಸಿ ಅನುತ್ತೀರ್ಣರಾದ ಮಕ್ಕಳಿಗೆ ಉಚಿತವಾಗಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ್ದರಿಂದ ೨.೭೬ ಲಕ್ಷ ಮಕ್ಕಳು ಮತ್ತೊಮ್ಮೆ ಪರೀಕ್ಷೆ ಬರೆದಿದ್ದಾರೆ ಎಂದು ತಿಳಿಸಿದರು.

ಶಾಸಕ ಗೋಪಾಲಕೃಷ್ಣ ಬೇಳೂರು ಮಾತನಾಡಿ, ಕ್ಷೇತ್ರ ವ್ಯಾಪ್ತಿಯಲ್ಲಿ ಅನೇಕ ಅಭಿವೃದ್ಧಿ ಕೆಲಸಗಳು ನೂರಾರು ಕೋಟಿ ರು. ವೆಚ್ಚದಲ್ಲಿ ನಡೆಯುತ್ತಿದ್ದು, ಅಭಿವೃದ್ಧಿಗೆ ಹಣ ಇಲ್ಲ ಎಂದವರಿಗೆ ಇದೇ ಉತ್ತರವಾಗಿದೆ. ನೆನಗುದಿಗೆ ಬಿದ್ದಿದ್ದ ಒಳಚರಂಡಿ ಕಾಮಗಾರಿಗೆ ೨೦ ಕೋಟಿ ರು., ಆಡಳಿತ ಸೌಧಕ್ಕೆ ಮೂಲ ಸೌಲಭ್ಯ ಒದಗಿಸಲು ೪ ಕೋಟಿ ರು, ಪ್ರಥಮ ದರ್ಜೆ ಕಾಲೇಜಿನ ಕೊಠಡಿ ನಿರ್ಮಾಣಕ್ಕೆ ೨ ಕೋಟಿ ರು. ಅನುದಾನ ಮಂಜೂರು ಮಾಡಲಾಗಿದೆ. ಬಹಳ ಕಾಲದಿಂದ ೯೪ಸಿ ೯೪ಸಿಸಿ ಹಕ್ಕುಪತ್ರ ನೀಡಿರಲಿಲ್ಲ. ಮೊದಲ ಹಂತದಲ್ಲಿ ೧೫೦ಕ್ಕೂ ಹೆಚ್ಚು ಜನರಿಗೆ ಹಕ್ಕುಪತ್ರ ನೀಡಿದೆ. ಬಹುಮುಖ್ಯವಾಗಿ ಬಿ ಖಾತಾ ಮಂಜೂರಾತಿ ಪತ್ರ ನೀಡಿದೆ ಎಂದರು.

ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್, ಉಪಾಧ್ಯಕ್ಷೆ ಸವಿತಾ ವಾಸು, ಗ್ಯಾರಂಟಿ ಸಮಿತಿ ಅಧ್ಯಕ್ಷ ಬಿ.ಆರ್.ಜಯಂತ್, ಉಪವಿಭಾಗಾಧಿಕಾರಿ ವಿರೇಶಕುಮಾರ್, ಕಾರ್ಯನಿರ್ವಾಹಣಾಧಿಕಾರಿ ಶಿವಪ್ರಕಾಶ್, ಪ್ರಮುಖರಾದ ರಂಗಸ್ವಾಮಿ, ಗಣಪತಿ ಮಂಡಗಳಲೆ, ಮಧುಮಾಲತಿ, ನಾದೀರಾ ಪರ್ವಿನ್, ಚಂದ್ರಪ್ಪ, ಲಲಿತಮ್ಮ ಇನ್ನಿತರರು ಹಾಜರಿದ್ದರು. ಪೌರಾಯುಕ್ತ ಎಚ್.ಕೆ.ನಾಗಪ್ಪ ಸ್ವಾಗತಿಸಿದರು. ತಹಶೀಲ್ದಾರ್ ಚಂದ್ರಶೇಖರ ನಾಯ್ಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ದೀಪಕ್ ಸಾಗರ್ ನಿರೂಪಿಸಿದರು.